Connect with us

ಬೆಂಗಳೂರು

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದ: ಅನಿತಾ ಕುಮಾರಸ್ವಾಮಿಯ ಜಮೀನು ದಾಖಲೆ ಬಿಡುಗಡೆ, DK Shivkumar ವಿರುದ್ಧ ನಿಖಿಲ್ ಕಿಡಿ

ಬೆಂಗಳೂರು:
ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ವಿವಾದ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಭೂಪರಿಹಾರಕ್ಕೆ ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವಿವಾದದ ಕುರಿತು ಮಾತನಾಡಿ, ಕುಮಾರಸ್ವಾಮಿ ಕುಟುಂಬವೂ ಭೂಪರಿಹಾರಕ್ಕೆ ಅರ್ಜಿ ಸಲ್ಲಿಸಿದೆ ಎಂದು ಮಾಧ್ಯಮಗಳಿಗೆ ಹೇಳಿದ್ದರು. ಈ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ನಿಖಿಲ್, “ಮಿಸ್ಟರ್ ಶಿವಕುಮಾರ್ ಅವರೇ, ಸುಳ್ಳು ನಿಮ್ಮನೆ ದೇವರು. ವಿಷಯ ತಿಳಿದುಕೊಂಡು ಮಾತಾಡಿ. ರೈತರ ಮುಂದೆ ಅಪಪ್ರಚಾರ ಮಾಡಿದ್ರೆ ಕೈಕಟ್ಟಿ ಕುಳಿತುಕೊಳ್ಳಲ್ಲ,” ಎಂದು ಎಚ್ಚರಿಕೆ ನೀಡಿದ್ದಾರೆ.

ನಿಖಿಲ್ ಮತ್ತಷ್ಟು ಮುಂದೆ ಹೋಗಿ, “ಅಮ್ಮನ ಹೆಸರು ಭೂಪರಿಹಾರಕ್ಕೆ ಬಳಸಿದ್ದರೆ, ಆ ಜಮೀನನ್ನು ರೈತರಿಗೆ ಅಥವಾ ಬಡವರಿಗೆ ದಾನ ಮಾಡುತ್ತೇವೆ,” ಎಂದು ಘೋಷಿಸಿದರು.

ಈ ಮಧ್ಯೆ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್, ಅನಿತಾ ಕುಮಾರಸ್ವಾಮಿಯವರ ಹೆಸರಿನಲ್ಲಿ ದಾಖಲಾಗಿರುವ ಜಮೀನು ದಾಖಲೆಗಳನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ.
ಅವರು ಮಾಹಿತಿ ನೀಡಿದಂತೆ:

  • ಪ್ರಾಥಮಿಕ ಅಧಿಸೂಚನೆ ಮಾರ್ಚ್ 14ರಂದು ರಾಜ್ಯ ಪತ್ರದಲ್ಲಿ ಪ್ರಕಟಗೊಂಡಿದ್ದು,
  • ಮಾರ್ಚ್ 26 ರಂದು ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟವಾಯಿತು.
  • ಮಾರ್ಚ್ 29ರಂದು ಅನಿತಾ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಪ್ರಾಧಿಕಾರಕ್ಕೆ ಪತ್ರ ಬರೆದು ಭೂಸ್ವಾಧೀನ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅನಿತಾ ಅವರು ತಮ್ಮ ಪತ್ರದಲ್ಲಿ ಹೊಸೂರು ಮತ್ತು ಬನ್ನಿಗಿರಿ ಗ್ರಾಮಗಳ ಒಟ್ಟು 29 ಎಕರೆ 10 ಗುಂಟೆ ಜಮೀನಿನ ಖಾತೆ ಮತ್ತು ಪಹಣಿ ದಾಖಲೆಗಳು ತಮ್ಮ ಹೆಸರಲ್ಲಿ ಇವೆ ಎಂದು ತಿಳಿಸಿದ್ದಾರೆ. ಜೊತೆಗೆ, ವಿನಯ್ ಗೌಡ ಎಂಬವರಿಗೆ ವಿಶೇಷ ಪವರ್ ಆಫ್ ಅಟಾರ್ನಿ ನೀಡಿ, ಜಮೀನನ್ನು ಸ್ವಾಧೀನ ಅನುಭವಕ್ಕೆ ಪಡೆದಿದ್ದಾರೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಇನ್ನೊಂದೆಡೆ, ನಿಖಿಲ್ ಅವರು ತಮ್ಮ ಪತ್ರದಲ್ಲಿ ಹೊಸೂರು ಸರ್ವೆ ನಂ. 26 ರಲ್ಲಿ 4 ಎಕರೆ ಜಮೀನಿಗೆ ಜನರಲ್ ಪವರ್ ಆಫ್ ಅಟಾರ್ನಿ ಮತ್ತು ಕ್ರಯದ ಕರಾರುಪತ್ರ ಹೊಂದಿದ್ದಾರೆ ಎಂದು ವಿವರಿಸಿದ್ದಾರೆ.

ಈ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಜಿಡಿಎಸ್ ಹಾಗೂ ಕಾಂಗ್ರೆಸ್ ನಡುವಿನ ಸಂಘರ್ಷ ಕಾಣಿಸಿಕೊಳ್ಳುತ್ತಿದೆ. DK ಶಿವಕುಮಾರ್ ಅವರು “ನಾನು ನಿಮ್ಮ ಪರವಾಗಿ ನಿರ್ಧಾರ ತೆಗೆದುಕೊಳ್ಳಲು ಚರ್ಚೆ ಮಾಡುತ್ತೇನೆ” ಎಂದಿದ್ದರೂ, ಕಾಂಗ್ರೆಸ್ ಮುಖಂಡರು ಈ ವಿವಾದದಿಂದ ಹೊರಬರಲು ಹರಸಾಹಸ ಪಡುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

ಚುನಾವಣೆ

BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Continue Reading

ದೇಶ

ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ

ಬೆಂಗಳೂರು, ಫೆ.10: ಶೋಷಿತರು, ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಹಿಂದ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಅಹಿಂದ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ. ರಾಷ್ಟ್ರೀಯ ಅಹಿಂದ ಸಂಘಟನೆಯ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ ಹಾಗೂ ಕರ್ನಾಟಕ ರಾಜ್ಯ ಒಬಿಸಿ ಘಟಕದ ಅಧ್ಯಕ್ಷ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಈ ಬೇಡಿಕೆ ಮುಂದಿಡಲಾಗಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ಬಿ.ಕೆ. ಹರಿಪ್ರಸಾದ್ ಅವರು ಕೇವಲ ರಾಜಕೀಯ ನಾಯಕನಲ್ಲ, ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದಾರೆ ಎಂದು ಬಣ್ಣಿಸಿದರು. ಜಾತಿ ಗಣತಿಯಂತಹ ಸಂವೇದನಾಶೀಲ ಹಾಗೂ ಐತಿಹಾಸಿಕ ಮಹತ್ವದ ವಿಷಯದಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳ ಪರವಾಗಿ ಅವರು ದಿಟ್ಟ ನಿಲುವು ತಳೆದಿದ್ದಾರೆ ಎಂದು ಹೇಳಿದರು. ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳನ್ನು ರಾಜಕೀಯದ ಕೇಂದ್ರಬಿಂದುವಾಗಿಸಿಕೊಂಡು ನಡೆಸಿರುವ ಅವರ ಹೋರಾಟ ಅಹಿಂದ ಚಳವಳಿಗೆ ಹೊಸ ಬಲ ನೀಡಿದೆ ಎಂದು ಅಭಿಪ್ರಾಯಪಟ್ಟರು.

ಹಿಂದುಳಿದ ವರ್ಗದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ಆಡಳಿತಕ್ಕೆ ರಾಜಕೀಯ ಹಾಗೂ ನೈತಿಕವಾಗಿ ಬಲ ತುಂಬಿದ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್ ಪ್ರಮುಖರು ಎಂದು ಹೇಳಿದರು. ಪಕ್ಷದ ಒಳಗೂ ಹೊರಗೂ ಅಹಿಂದ ಧ್ವನಿಯನ್ನು ಸ್ಪಷ್ಟವಾಗಿ ಪ್ರತಿನಿಧಿಸಿರುವ ಇಂತಹ ನಾಯಕನನ್ನು ಸಂಪುಟಕ್ಕೆ ಸೇರಿಸುವುದರಿಂದ ಸರ್ಕಾರದ ವಿಶ್ವಾಸಾರ್ಹತೆ ಇನ್ನಷ್ಟು ಹೆಚ್ಚಲಿದೆ ಎಂದರು.

ಬಿ.ಕೆ. ಹರಿಪ್ರಸಾದ್ ಅವರು ಸಂಪುಟ ಸೇರಿದ್ದಲ್ಲಿ ಅಹಿಂದ ಸಂಘಟನೆಗಳಿಗೆ ಹೊಸ ಶಕ್ತಿ ಸಿಗಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆಗಳು, ಚರ್ಚೆಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಾಯಕರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಬಿ. ಶಿವಣ್ಣ ಸೇರಿದಂತೆ ಅಹಿಂದ ಕಾರ್ಯಕರ್ತರು ಮತ್ತು ಬಿ.ಕೆ. ಹರಿಪ್ರಸಾದ್ ಬೆಂಬಲಿಗರು ಉಪಸ್ಥಿತರಿದ್ದರು.

Continue Reading

ದೇಶ

ಹಿರಿಯ ಪತ್ರಕರ್ತ ಹಾಗೂ ಮಾಜಿ ಎಂಎಲ್‌ಸಿ ಪಿ. ರಾಮಯ್ಯ ನಿಧನ: ಪತ್ರಿಕೋದ್ಯಮದ ‘ತಪಸ್ವಿ’ಗೆ ಅಂತಿಮ ವಿದಾಯ

ಬೆಂಗಳೂರು: ಹಿರಿಯ ಪತ್ರಕರ್ತರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ಪಿ. ರಾಮಯ್ಯ (93) (P Ramiah) ಅವರು ಮಂಗಳವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಅವರ ಪುತ್ರ ಡಾ. ಬಾಲಜಿ ಮಾಹಿತಿ ನೀಡಿದ್ದಾರೆ. ಅವರ ನಿಧನದಿಂದ ಕನ್ನಡ ಪತ್ರಿಕೋದ್ಯಮ ಲೋಕಕ್ಕೆ ಅಪಾರ ನಷ್ಟವಾಗಿದೆ.

1933 ಸೆಪ್ಟೆಂಬರ್ 12ರಂದು ಜನಿಸಿದ ಪಿ. ರಾಮಯ್ಯ ಅವರು ಸುಮಾರು ಐದು ದಶಕಗಳ ಕಾಲ ‘ದಿ ಹಿಂದೂ’ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅದರಲ್ಲೂ ಸುಮಾರು 45 ವರ್ಷಗಳ ಕಾಲ ಕರ್ನಾಟಕದಲ್ಲಿ The Hindu ಪತ್ರಿಕೆಯ ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದು, ಸತ್ಯ, ನೈತಿಕತೆ ಮತ್ತು ಪ್ರಾಮಾಣಿಕತೆಗೆ ಅವರು ಬದ್ಧರಾಗಿದ್ದರು. ಇದೇ ಕಾರಣಕ್ಕೆ ಅವರನ್ನು ‘ಪತ್ರಿಕೋದ್ಯಮದ ತಪಸ್ವಿ’ ಎಂದು ಗೌರವದಿಂದ ಕರೆಯಲಾಗುತ್ತಿತ್ತು.

ಪತ್ರಿಕೋದ್ಯಮದ ಜೊತೆಗೆ ಸಾರ್ವಜನಿಕ ಜೀವನದಲ್ಲೂ ಸಕ್ರಿಯರಾಗಿದ್ದ ರಾಮಯ್ಯ ಅವರು ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿ, ಸರ್ಕಾರದ ನೀತಿ ನಿರೂಪಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಅನುಭವ ಕಥನ “ನಾನು ಹಿಂದೂ ರಾಮಯ್ಯ” ಕೃತಿ, ಪತ್ರಿಕೋದ್ಯಮದ ಮೌಲ್ಯಗಳನ್ನು ಎತ್ತಿ ಹಿಡಿಯುವ ದಾಖಲೆ ಎಂದು ಪರಿಗಣಿಸಲಾಗಿದೆ.

ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಆದಿಚುಂಚನಗಿರಿ ಮಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ರಾಮಯ್ಯ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಮತ್ತು ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ ಎಂದು ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ ಗಿರೀಶ್ ಲಿಂಗಣ್ಣ ಮಾಹಿತಿ ನೀಡಿದ್ದಾರೆ. ಅವರಿಗೆ ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧು ಬಳಗ ಉಳಿದಿದೆ.

Continue Reading

Trending