Connect with us

ರಾಜ್ಯ

ಚಾಮರಾಜನಗರ: ಸರ್ಕಾರಿ ಕಾಲೇಜಿನಲ್ಲಿ ಶಿಕ್ಷಕರಿಗೆ ಗೌರವ ಸಮಾರಂಭ – ವಿದ್ಯಾರ್ಥಿಗಳ ಪ್ರೀತಿ ತುಂಬಿದ ನೆನಪಿನ ಕಾಣಿಕೆ

ಚಾಮರಾಜನಗರ: ತಾಲೂಕು ಅಮಚವಾಡಿ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಇಂದು ಶಿಕ್ಷಕರಿಗೆ ಗೌರವ ಸಲ್ಲಿಸುವ ವಿಶೇಷ ಕಾರ್ಯಕ್ರಮ ಜರುಗಿತು. ಪಿಯುಸಿ ವಿದ್ಯಾರ್ಥಿಗಳು ತಮ್ಮ ಪ್ರೀತಿಯ, ಗೌರವದ ಮತ್ತು ಧನ್ಯವಾದದ ಭಾವವನ್ನು ಶಿಕ್ಷಕರಿಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಿಂದ ಸನ್ಮಾನ

ಪಿಯುಸಿ ವಿದ್ಯಾರ್ಥಿಗಳು ಬೋಧನೆ ಮಾಡುವ ಎಲ್ಲಾ ಉಪನ್ಯಾಸಕರಿಗೆ ನೆನಪಿನ ಕಾಣಿಕೆ ಮತ್ತು ಗುಲಾಬಿತನ್ಮೂಲಕ ಪ್ರೀತಿಯ ಕಾಣಿಕೆ ನೀಡಿದರು. ಈ ಸರಳ, ಆದರೆ ಹೃದಯಸ್ಪರ್ಶಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಂಭ್ರಮ ಸ್ಪಷ್ಟವಾಗಿ ಗಮನಕ್ಕೆ ಬಂತು.

ಅಧ್ಯಕ್ಷರ ಭಾಷಣ

ಹಿರಿಯ ಉಪನ್ಯಾಸಕ ಆರ್. ಮೂರ್ತಿ ಉದ್ಘಾಟನೆಯನ್ನು ನೆರವೇರಿಸಿ, ಶಿಕ್ಷಕ ವೃತ್ತಿಯ ಮಹತ್ವವನ್ನು ವಿವರಿಸಿದರು. “ಶಿಕ್ಷಕ ವೃತ್ತಿ ಬಹಳ ಗೌರವಾನ್ವಿತ ವೃತ್ತಿ. ಕಳೆದ ಮೂರು ದಶಕಗಳಿಂದ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ನೀಡುತ್ತಿರುವುದು ನನಗೆ ಸಂತೋಷವನ್ನು ನೀಡಿದೆ,” ಎಂದು ಅವರು ಹೇಳಿದರು.

ಮುಖ್ಯ ಭಾಷಣ – ಎಸ್. ರಾಧಾಕೃಷ್ಣನ್ ಗೌರವ

ಮುಖ್ಯ ಉಪನ್ಯಾಸಕ ಸುರೇಶ್ ಎನ್. ಋಗ್ವೇದಿ ಮಾತನಾಡಿ, “ಇಡೀ ಭಾರತದ ಶಿಕ್ಷಕರಿಗೆ ಡಾ. ಎಸ್. ರಾಧಾಕೃಷ್ಣನ್ ಅವರು ನೀಡಿದ ಮಹಾನ್ ಗೌರವವನ್ನು ಎಂದಿಗೂ ಮರೆಯಲಾಗುವುದಿಲ್ಲ. ಅವರು ಶಿಕ್ಷಕರಾಗಿ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದರು. ಭಾರತೀಯ ತತ್ವಜ್ಞಾನ ಮತ್ತು ಉಪನಿಷತ್ತಿನ ಅರ್ಥವನ್ನು ಸರಳವಾಗಿ ವಿಶ್ವಕ್ಕೆ ತಲುಪಿಸಿದರು. ಮಾನವನ ಜೀವನದಲ್ಲಿ ಶಿಕ್ಷಕರು ತಂದೆ ತಾಯಿಯ ನಂತರ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳು. ಪ್ರತಿಯೊಬ್ಬರು ಗುರುವಿನ ಮಾರ್ಗದಲ್ಲಿ ನಡೆಯಬೇಕು,” ಎಂದು ಹೇಳಿದ್ದಾರೆ.

ಅನುಭವ ಹಂಚಿದ ಉಪನ್ಯಾಸಕರು

ಉಪನ್ಯಾಸಕರು ಶಿವರಾಂ, ಬಸವಣ್ಣ, ರಮೇಶ್, ಸುರೇಶ್ ದೊಡ್ಡಮ್ಮ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿದರು. ಶಿಕ್ಷಕ-ವಿದ್ಯಾರ್ಥಿ ಸಂಬಂಧದ ಮಹತ್ವವನ್ನು ವಿವರಿಸಿ, ಸುಂದರ ಹಾಡುಗಳ ಮೂಲಕ ಕಾರ್ಯಕ್ರಮವನ್ನು ಇನ್ನಷ್ಟು ಆಕರ್ಷಕಗೊಳಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗೌರವ

ವಿದ್ಯಾರ್ಥಿಗಳಿಂದ ಸರಳ ಸಾಂಸ್ಕೃತಿಕ ಕಾರ್ಯಕ್ರಮವೊಂದು ಆಯೋಜಿಸಲಾಗಿದ್ದು, ಶಿಕ್ಷಕರಿಗೆ ಗೌರವ ಸಲ್ಲಿಸಲಾಯಿತು. ಅಧ್ಯಕ್ಷತೆಯನ್ನು ಪ್ರಾಚಾರ್ಯ ಶಿವರಾಜಪ್ಪ ನಡೆಸಿದರು. ಅವರು ತಿಳಿಸಿದ್ದಾರೆ, “ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮದಿನವನ್ನು ಸೆಪ್ಟೆಂಬರ್ 5 ರಂದು ಇಡೀ ದೇಶದಲ್ಲಿ ಶಿಕ್ಷಕರಿಗೆ ಅರ್ಪಿಸಿ ಸ್ಮರಿಸಲಾಗುತ್ತದೆ.”

ಕಾರ್ಯಕ್ರಮವನ್ನು ನಡೆಸಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳಾದ ಶೀಲಾ, ಆದಿತ್ಯ, ತೇಜಶ್ರೀ, ಕವನ ಪ್ರಿಯ, ಭವಾನಿ ಪೂಜಾ, ಕವನ, ಶಶಿಕಲಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು. ವಿದ್ಯಾರ್ಥಿಗಳ ಈ ಪ್ರೀತಿಪೂರ್ಣ ಪ್ರಯತ್ನವು ಶಿಕ್ಷಕರಿಗೆ ಸಂತೋಷವನ್ನು ತಂದುಕೊಟ್ಟಿತು.

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಅಪರಾಧ

BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.

ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.

Continue Reading

ದೇಶ

638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.

Continue Reading

Trending