ಬೆಂಗಳೂರು
“ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ: ಬೆಂಗಳೂರು ತೊರೆಯುವ ಕಂಪನಿಗಳಿಗೆ ಡಿಕೆ ಶಿವಕುಮಾರ್ ಕಠಿಣ ಎಚ್ಚರಿಕೆ”
ಬೆಂಗಳೂರು:
“ಕಂಪನಿಗಳು ಸ್ಥಳ ಬದಲಾಯಿಸುವ ಮೂಲಕ ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಯಾವುದೇ ಕಂಪನಿಗೂ ಗುರಿ ಮುಟ್ಟಲು ಸಾಧ್ಯವಿಲ್ಲ,” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರು ತೊರೆಯುವ ನಿರ್ಧಾರವು ಕೆಲವೊಮ್ಮೆ ಮೂಲಸೌಕರ್ಯ ಸಮಸ್ಯೆಗಳ ಕಾರಣವಾಗಬಹುದು. ಆದರೆ, ಬೆಂಗಳೂರು ನೀಡುವ ಅವಕಾಶಗಳು, ಸೌಲಭ್ಯಗಳು ಮತ್ತು ಪ್ರತಿಭೆಗಳ ಗುಣಮಟ್ಟದಿಂದ ತೃಪ್ತರಾಗಿರುವವರು ಇಲ್ಲಿಯೇ ಉಳಿಯುತ್ತಾರೆ. ಸ್ಥಳಾಂತರದ ಬಗ್ಗೆ ತಾವು ಬಲವಂತ ಮಾಡೋದು ಸರ್ಕಾರದ ಉದ್ದೇಶವಲ್ಲ, ಆದರೆ ಮೂಲಸೌಕರ್ಯ ಸುಧಾರಣೆ ನಮ್ಮ ಕರ್ತವ್ಯ,” ಎಂದರು.
ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಭರವಸೆ:
- ಬೆಂಗಳೂರು ರಸ್ತೆಗಳ ಗುಂಡಿ ಸಮಸ್ಯೆ ಬಗೆಹರಿಸಲು ನವೆಂಬರ್ ಒಳಗೆ ಅಂತಿಮ ಗಡುವು ನೀಡಲಾಗಿದೆ.
- ಈಗಾಗಲೇ 10,000 ಗುಂಡಿಗಳಲ್ಲಿ 6,000 ಗುಂಡಿಗಳನ್ನು ಮುಚ್ಚಲಾಗಿದೆ; ಉಳಿದವುಗಳನ್ನು ಕೂಡ ಶೀಘ್ರ ಮುಚ್ಚಲಾಗುವುದು.
- ಈ ಸಂಬಂಧ ಅನುದಾನ ಹಂಚಿಕೆ ಮಾಡಲಾಗಿದ್ದು, ಗುತ್ತಿಗೆದಾರರಿಗೆ ಕಟ್ಟುನಿಟ್ಟಾದ ಗಡುವು ನೀಡಲಾಗಿದೆ.
- ಡಿಕೆಶಿ ತಮ್ಮ ಎಕ್ಸ್ ಖಾತೆಯಲ್ಲಿ “ಜಿಬಿಎ ಮುಕ್ತ ರಸ್ತೆ” ಅಭಿಯಾನವನ್ನು ಉಲ್ಲೇಖಿಸಿ ಭರವಸೆ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಯೋಜನೆ:
“ಬೆಂಗಳೂರು ಬಹುಮಟ್ಟಿಗೆ ವಿಸ್ತರಿಸುತ್ತಿರುವ ನಗರ. ಆದ್ದರಿಂದ ಐದು ನಿಗಮಗಳನ್ನು ರಚಿಸಲಾಗಿದೆ. ಇದರ ಜೊತೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ತರಲು ನಿರ್ಧಾರವಾಗಿದೆ,” ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.
ಚುನಾವಣೆ
BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.
ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.
ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ದೇಶ
ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
ಬೆಂಗಳೂರು, ಫೆ.10: ಶೋಷಿತರು, ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಹಿಂದ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಅಹಿಂದ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ. ರಾಷ್ಟ್ರೀಯ ಅಹಿಂದ ಸಂಘಟನೆಯ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ ಹಾಗೂ ಕರ್ನಾಟಕ ರಾಜ್ಯ ಒಬಿಸಿ ಘಟಕದ ಅಧ್ಯಕ್ಷ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಈ ಬೇಡಿಕೆ ಮುಂದಿಡಲಾಗಿದೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ಬಿ.ಕೆ. ಹರಿಪ್ರಸಾದ್ ಅವರು ಕೇವಲ ರಾಜಕೀಯ ನಾಯಕನಲ್ಲ, ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದಾರೆ ಎಂದು ಬಣ್ಣಿಸಿದರು. ಜಾತಿ ಗಣತಿಯಂತಹ ಸಂವೇದನಾಶೀಲ ಹಾಗೂ ಐತಿಹಾಸಿಕ ಮಹತ್ವದ ವಿಷಯದಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳ ಪರವಾಗಿ ಅವರು ದಿಟ್ಟ ನಿಲುವು ತಳೆದಿದ್ದಾರೆ ಎಂದು ಹೇಳಿದರು. ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳನ್ನು ರಾಜಕೀಯದ ಕೇಂದ್ರಬಿಂದುವಾಗಿಸಿಕೊಂಡು ನಡೆಸಿರುವ ಅವರ ಹೋರಾಟ ಅಹಿಂದ ಚಳವಳಿಗೆ ಹೊಸ ಬಲ ನೀಡಿದೆ ಎಂದು ಅಭಿಪ್ರಾಯಪಟ್ಟರು.
ಹಿಂದುಳಿದ ವರ್ಗದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ಆಡಳಿತಕ್ಕೆ ರಾಜಕೀಯ ಹಾಗೂ ನೈತಿಕವಾಗಿ ಬಲ ತುಂಬಿದ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್ ಪ್ರಮುಖರು ಎಂದು ಹೇಳಿದರು. ಪಕ್ಷದ ಒಳಗೂ ಹೊರಗೂ ಅಹಿಂದ ಧ್ವನಿಯನ್ನು ಸ್ಪಷ್ಟವಾಗಿ ಪ್ರತಿನಿಧಿಸಿರುವ ಇಂತಹ ನಾಯಕನನ್ನು ಸಂಪುಟಕ್ಕೆ ಸೇರಿಸುವುದರಿಂದ ಸರ್ಕಾರದ ವಿಶ್ವಾಸಾರ್ಹತೆ ಇನ್ನಷ್ಟು ಹೆಚ್ಚಲಿದೆ ಎಂದರು.
ಬಿ.ಕೆ. ಹರಿಪ್ರಸಾದ್ ಅವರು ಸಂಪುಟ ಸೇರಿದ್ದಲ್ಲಿ ಅಹಿಂದ ಸಂಘಟನೆಗಳಿಗೆ ಹೊಸ ಶಕ್ತಿ ಸಿಗಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆಗಳು, ಚರ್ಚೆಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಾಯಕರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಬಿ. ಶಿವಣ್ಣ ಸೇರಿದಂತೆ ಅಹಿಂದ ಕಾರ್ಯಕರ್ತರು ಮತ್ತು ಬಿ.ಕೆ. ಹರಿಪ್ರಸಾದ್ ಬೆಂಬಲಿಗರು ಉಪಸ್ಥಿತರಿದ್ದರು.
ದೇಶ
ಹಿರಿಯ ಪತ್ರಕರ್ತ ಹಾಗೂ ಮಾಜಿ ಎಂಎಲ್‌ಸಿ ಪಿ. ರಾಮಯ್ಯ ನಿಧನ: ಪತ್ರಿಕೋದ್ಯಮದ ‘ತಪಸ್ವಿ’ಗೆ ಅಂತಿಮ ವಿದಾಯ
ಬೆಂಗಳೂರು: ಹಿರಿಯ ಪತ್ರಕರ್ತರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ಪಿ. ರಾಮಯ್ಯ (93) (P Ramiah) ಅವರು ಮಂಗಳವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಅವರ ಪುತ್ರ ಡಾ. ಬಾಲಜಿ ಮಾಹಿತಿ ನೀಡಿದ್ದಾರೆ. ಅವರ ನಿಧನದಿಂದ ಕನ್ನಡ ಪತ್ರಿಕೋದ್ಯಮ ಲೋಕಕ್ಕೆ ಅಪಾರ ನಷ್ಟವಾಗಿದೆ.
1933 ಸೆಪ್ಟೆಂಬರ್ 12ರಂದು ಜನಿಸಿದ ಪಿ. ರಾಮಯ್ಯ ಅವರು ಸುಮಾರು ಐದು ದಶಕಗಳ ಕಾಲ ‘ದಿ ಹಿಂದೂ’ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅದರಲ್ಲೂ ಸುಮಾರು 45 ವರ್ಷಗಳ ಕಾಲ ಕರ್ನಾಟಕದಲ್ಲಿ The Hindu ಪತ್ರಿಕೆಯ ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದು, ಸತ್ಯ, ನೈತಿಕತೆ ಮತ್ತು ಪ್ರಾಮಾಣಿಕತೆಗೆ ಅವರು ಬದ್ಧರಾಗಿದ್ದರು. ಇದೇ ಕಾರಣಕ್ಕೆ ಅವರನ್ನು ‘ಪತ್ರಿಕೋದ್ಯಮದ ತಪಸ್ವಿ’ ಎಂದು ಗೌರವದಿಂದ ಕರೆಯಲಾಗುತ್ತಿತ್ತು.
ಪತ್ರಿಕೋದ್ಯಮದ ಜೊತೆಗೆ ಸಾರ್ವಜನಿಕ ಜೀವನದಲ್ಲೂ ಸಕ್ರಿಯರಾಗಿದ್ದ ರಾಮಯ್ಯ ಅವರು ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿ, ಸರ್ಕಾರದ ನೀತಿ ನಿರೂಪಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಅನುಭವ ಕಥನ “ನಾನು ಹಿಂದೂ ರಾಮಯ್ಯ” ಕೃತಿ, ಪತ್ರಿಕೋದ್ಯಮದ ಮೌಲ್ಯಗಳನ್ನು ಎತ್ತಿ ಹಿಡಿಯುವ ದಾಖಲೆ ಎಂದು ಪರಿಗಣಿಸಲಾಗಿದೆ.
ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಆದಿಚುಂಚನಗಿರಿ ಮಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ರಾಮಯ್ಯ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಮತ್ತು ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ ಎಂದು ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ ಗಿರೀಶ್ ಲಿಂಗಣ್ಣ ಮಾಹಿತಿ ನೀಡಿದ್ದಾರೆ. ಅವರಿಗೆ ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧು ಬಳಗ ಉಳಿದಿದೆ.
-
ದೇಶ24 hours agoBENGALURU : BCCI Centre of Excellence ಬೆಂಗಳೂರಿನಲ್ಲಿ 10 ಹುದ್ದೆಗಳ ನೇಮಕಾತಿ
-
ಅಪರಾಧ22 hours agoಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ನ್ಯಾಯಾಲಯ ನೋಟಿಸ್
-
ಕ್ರೀಡೆ22 hours ago“ಈ ನಾಟಕ ಮೊದಲೇ ಗೊತ್ತಿತ್ತು” – ರಿಕಿ ಪಾಂಟಿಂಗ್
-
ಅಪರಾಧ23 hours agoಮದುವೆ ವೇದಿಕೆಯಲ್ಲಿ ಗನ್ ಹಿಡಿದು ಕಾಂಗ್ರೆಸ್ ನಾಯಕ ಡ್ಯಾನ್ಸ್
-
Blog22 hours agoBIG NEWS : ಹೈಕಮಾಂಡ್ ಹೇಳಿದಂತೆ ನಡೆಯುತ್ತೇನೆ: ಸಿಎಂ ಸಿದ್ದರಾಮಯ್ಯ
-
ಚುನಾವಣೆ5 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ಅಪರಾಧ22 hours agoಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡ್ರೋನ್ ಹಾರಿಸಿದ ಯೂಟ್ಯೂಬರ್ ವಿರುದ್ಧ FIR
-
ದೇಶ5 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
