Connect with us

ಬೆಂಗಳೂರು

“6 ಎಕರೆ ಅಲ್ಲ, 6 ಇಂಚೂ ಕೊಡೋದಿಲ್ಲ”: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಸಿಲಿಕಾನ್ ಸಿಟಿಯ ಹಸಿರು ಹೃದಯವಾದ ಲಾಲ್ ಬಾಗ್ ಪ್ರದೇಶವನ್ನು ಸುರಂಗ ಮಾರ್ಗ (ಟನಲ್ ರೋಡ್) ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲು ಬಿಡುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಲಾಲ್ ಬಾಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸರ್ಕಾರ ಲಾಲ್ ಬಾಗ್‌ನ 6 ಎಕರೆ ಅಲ್ಲ, 6 ಇಂಚು ಜಾಗಕ್ಕೂ ಕೈ ಹಾಕಬಾರದು. ಈ ಪ್ರಾಜೆಕ್ಟ್ ಜನರಿಗಲ್ಲ, ಕಾರು ಇಟ್ಟುಕೊಂಡವರಿಗೆ ಮಾತ್ರ ಅನುಕೂಲವಾಗುತ್ತದೆ. ಇದು ಬೆಂಗಳೂರನ್ನು ಹಾಳು ಮಾಡುವ ಯೋಜನೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ತೇಜಸ್ವಿ ಸೂರ್ಯ ಸರ್ಕಾರದ ಟನಲ್ ರೋಡ್ ಯೋಜನೆ ವಿರುದ್ಧ ಹೈಕೋರ್ಟ್‌ನಲ್ಲಿ ಎರಡು ಪಿಐಎಲ್‌ಗಳನ್ನು ಹಾಕಿರುವುದಾಗಿ ತಿಳಿಸಿದ್ದಾರೆ. “ಲಾಲ್ ಬಾಗ್‌ನ್ನು ರಿಯಲ್ ಎಸ್ಟೇಟ್ ಅಥವಾ ಕಮರ್ಷಿಯಲ್ ಕಾಂಪ್ಲೆಕ್ಸ್ ಮಾಡುವ ಉದ್ದೇಶದ ವಿರುದ್ಧ ಹೋರಾಟ ಮಾಡುತ್ತೇವೆ. ಲಾಲ್ ಬಾಗ್ ನಮ್ಮ ನಗರಕ್ಕೆ ಆಮ್ಲಜನಕ ನೀಡುವ ನೈಸರ್ಗಿಕ ಸೌಂದರ್ಯ ಸ್ಥಳ,” ಎಂದರು.

ಇದಕ್ಕೂ ಮೊದಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, “ಸರ್ಕಾರಕ್ಕೆ ಲಾಲ್ ಬಾಗ್‌ನ್ನು ಸ್ವಾಧೀನಕ್ಕೆ ಪಡೆಯುವ ಉದ್ದೇಶವಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು. ಆದರೂ, ಈ ವಿಚಾರದಲ್ಲಿ ಚರ್ಚೆಗಳು ನಿಲ್ಲದೇ ಮುಂದುವರಿದಿವೆ.

ಲಾಲ್ ಬಾಗ್ ಹಲವು ದಶಕಗಳಿಂದ ಬೆಂಗಳೂರಿಗರ ವಿಶ್ರಾಂತಿ ಸ್ಥಳವಾಗಿದ್ದು, ಇಲ್ಲಿ ಪ್ರತಿವರ್ಷ ನಡೆಯುವ ಫಲಪುಷ್ಪ ಪ್ರದರ್ಶನ ವಿಶ್ವಪ್ರಸಿದ್ಧವಾಗಿದೆ. ಸರ್ಕಾರ ಭೂಸ್ವಾಧೀನದ ವಿಚಾರ ಮುಂದುವರೆಸಿದರೆ, ಬೃಹತ್ ಜನವಿರೋಧ ಎದುರಾಗುವ ಸಾಧ್ಯತೆ ಇದೆ.

Continue Reading
Click to comment

Leave a Reply

Your email address will not be published. Required fields are marked *

ಅಪರಾಧ

BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.

ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.

Continue Reading

ದೇಶ

638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.

Continue Reading

ದೇಶ

ಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಡಿಕೆ ಸುರೇಶ್ ಅವರು “ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಇನ್ನೇನು ಕೇಳೋದೇ ಇಲ್ಲವಾ ನಿಮಗೆ? ಮೂರು ತಿಂಗಳುಗಳಿಂದ ಇದೇ ವಿಚಾರ ಕೇಳ್ತಿದ್ದೀರಿ. ದಯವಿಟ್ಟು ಇನ್ನು ಮುಂದೆ ಈ ಪ್ರಶ್ನೆ ಕೇಳಬೇಡಿ” ಎಂದು ಅವರು ತಿರುಗೇಟು ನೀಡಿದರು.

ಹೈಕಮಾಂಡ್‌ಗೆ ಎಲ್ಲವೂ ತಿಳಿದಿದ್ದು, ಅಂತಿಮ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. “ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಬೇಕು, ಡಿಕೆ ಶಿವಕುಮಾರ್ ಕೂಡ ನಡೆದುಕೊಳ್ಳಬೇಕು” ಎಂದು ಸಿಎಂ ಹೇಳಿದರು.

ಡಿಕೆ ಸುರೇಶ್ ಅವರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ, “ಅವರು ಏನು ಹೇಳಿದ್ರು ಅಂದ್ರೆ ಅವರನ್ನೇ ಕೇಳಿ. ನನಗೆ ಯಾಕೆ ಕೇಳ್ತೀರಾ?” ಎಂದು ಅಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Trending