ರಾಜಕೀಯ
ಸತೀಶ್ ಸೈಲ್ ಅಲ್ಟಿಮೇಟಂ: ಮಾರ್ಚ್‌ನಲ್ಲಿ ಅನುದಾನ ಇಲ್ಲದಿದ್ದರೆ ರಾಜಕೀಯ ನಿವೃತ್ತಿ!
ಕಾರವಾರ: ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಅವರು ಭಾರೀ ಘೋಷಣೆ ಮಾಡಿದ್ದಾರೆ — “ಮುಖ್ಯಮಂತ್ರಿಗಳು ಮಾರ್ಚ್ ಒಳಗೆ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅನುದಾನ ನೀಡದಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.
ಸದಾಶಿವಗಡದ ಕಾಳಿ ಸಂಗಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮೂರು ವರ್ಷಗಳಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದೇನೆ. ಆದರೆ ಅನುದಾನ ಬಿಡುಗಡೆಯಾಗಿಲ್ಲ, ಘೋಷಣೆಯೂ ಆಗಿಲ್ಲ. ಕಾರವಾರದಲ್ಲಿ ಜನರಿಗೆ ತುರ್ತು ಚಿಕಿತ್ಸೆಗೆ ಗೋವಾ ಅಥವಾ ದೆಹಲಿಗೆ ಹೋಗಬೇಕಾಗುತ್ತಿದೆ. ಇದು ದುಃಖಕರ” ಎಂದು ಹೇಳಿದ್ದಾರೆ.
ಸತೀಶ್ ಸೈಲ್ ಮುಂದುವರಿದು, “ನಾನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿಯೇ ತೀರುತ್ತೇನೆ. ಮಾರ್ಚ್ ಬಜೆಟ್‌ನಲ್ಲಿ ಘೋಷಣೆ ಆಗದಿದ್ದರೆ, ಬಜೆಟ್ ಆದ ಮಾರನೇ ದಿನ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಯಾವ ಪಕ್ಷಕ್ಕೂ ಸೇರುವುದಿಲ್ಲ, ಯಾವ ಕೆಲಸವನ್ನೂ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಅವರ ಈ ಘೋಷಣೆಯಿಂದ ಕಾರವಾರ ರಾಜಕೀಯದಲ್ಲಿ ಚರ್ಚೆ ಶುರುವಾಗಿದೆ. ಸ್ಥಳೀಯರು ಹಾಗೂ ಕಾಂಗ್ರೆಸ್ ಬೆಂಬಲಿಗರು ಸಿಎಂಗೆ ತಕ್ಷಣ ಕ್ರಮಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.
ದೇಶ
638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ
ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.
ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.
ದೇಶ
ಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಡಿಕೆ ಸುರೇಶ್ ಅವರು “ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಇನ್ನೇನು ಕೇಳೋದೇ ಇಲ್ಲವಾ ನಿಮಗೆ? ಮೂರು ತಿಂಗಳುಗಳಿಂದ ಇದೇ ವಿಚಾರ ಕೇಳ್ತಿದ್ದೀರಿ. ದಯವಿಟ್ಟು ಇನ್ನು ಮುಂದೆ ಈ ಪ್ರಶ್ನೆ ಕೇಳಬೇಡಿ” ಎಂದು ಅವರು ತಿರುಗೇಟು ನೀಡಿದರು.
ಹೈಕಮಾಂಡ್‌ಗೆ ಎಲ್ಲವೂ ತಿಳಿದಿದ್ದು, ಅಂತಿಮ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. “ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಬೇಕು, ಡಿಕೆ ಶಿವಕುಮಾರ್ ಕೂಡ ನಡೆದುಕೊಳ್ಳಬೇಕು” ಎಂದು ಸಿಎಂ ಹೇಳಿದರು.
ಡಿಕೆ ಸುರೇಶ್ ಅವರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ, “ಅವರು ಏನು ಹೇಳಿದ್ರು ಅಂದ್ರೆ ಅವರನ್ನೇ ಕೇಳಿ. ನನಗೆ ಯಾಕೆ ಕೇಳ್ತೀರಾ?” ಎಂದು ಅಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಚುನಾವಣೆ
BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.
ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.
ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
-
ದೇಶ19 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ಬೆಂಗಳೂರು59 minutes agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ18 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ19 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ17 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ17 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ19 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
-
ಅಪರಾಧ18 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
