Connect with us

ದೇಶ

ಬೆಳಗಾವಿ: ಗೃಹಲಕ್ಷ್ಮಿ ಬಾಕಿ ಹಣ ವಿಚಾರಕ್ಕೆ ವಿಧಾನಸಭೆಯಲ್ಲಿ ಭಾರಿ ಗದ್ದಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ–ಕ್ಷಮೆ

ಬೆಳಗಾವಿ: ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಾಕಿ ವಿಚಾರ ವಿಧಾನಸಭೆಯಲ್ಲಿ ಭಾರಿ ಗದ್ದಲ ಹಾಗೂ ಕೋಲಾಹಲಕ್ಕೆ ಕಾರಣವಾಯಿತು. ವಿಪಕ್ಷಗಳ ಆಕ್ರೋಶದಿಂದ ಅರ್ಧ ದಿನದ ಕಲಾಪ ವ್ಯರ್ಥವಾಯಿತು. ಕೊನೆಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ಬಂದು ವಿಷಾದ ವ್ಯಕ್ತಪಡಿಸಿ, ಕ್ಷಮೆಯಾಚಿಸುವ ಮೂಲಕ ಪರಿಸ್ಥಿತಿ ಶಾಂತಗೊಂಡಿತು. ಎರಡು ತಿಂಗಳ ಗೃಹಲಕ್ಷ್ಮಿ ಕಂತುಗಳಲ್ಲಿ ವ್ಯತ್ಯಯ ಉಂಟಾಗಿದೆ ಎಂಬುದನ್ನು ಸಚಿವೆ ಸದನದಲ್ಲೇ ಒಪ್ಪಿಕೊಂಡರು.

ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಆರ್. ಅಶೋಕ್, “ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೂರು ದಿನಗಳಿಂದ ಸದನಕ್ಕೆ ಬಂದಿಲ್ಲ. ಮೊದಲು ಸಚಿವರನ್ನು ಕರೆಸಿ ಉತ್ತರ ಕೊಡಿಸಿ, ನಂತರವೇ ಕಲಾಪ ನಡೆಸಬೇಕು. ಎರಡು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ಪಕ್ಷದ ಕೆಲಸಗಳಿಗೆ ಬಳಸಲಾಗಿದೆಯೇ?” ಎಂದು ಪ್ರಶ್ನಿಸಿದರು. ಉತ್ತರ ಸಿಗದಿದ್ದರೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸ್ಪೀಕರ್ ಯು.ಟಿ. ಖಾದರ್, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದರೂ, ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಮಣಿಯಲಿಲ್ಲ. ಸದನದ ಬಾವಿಗಿಳಿದು ಧರಣಿ ನಡೆಸಿದ ಪರಿಣಾಮ ಕಲಾಪವನ್ನು 10 ನಿಮಿಷ ಮುಂದೂಡಲಾಯಿತು.

ಈ ನಡುವೆ ಸ್ಪೀಕರ್ ಕೊಠಡಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಚರ್ಚೆ ನಡೆಸಿದರು. ಮಹಿಳಾ ಮತ್ತು ಕಲ್ಯಾಣ ಇಲಾಖೆ ನಿರ್ದೇಶಕ ಮಹೇಶ್ ಬಾಬು ಅವರಿಂದ ಮಾಹಿತಿ ಪಡೆಯಲಾಯಿತು.

ಮೂರು ದಿನಗಳ ಬಳಿಕ ಸದನಕ್ಕೆ ಬಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸ್ಪೀಕರ್ ಸೂಚನೆ ಮೇರೆಗೆ ಮಾತನಾಡಿ, “ಎರಡು ತಿಂಗಳ ಗೃಹಲಕ್ಷ್ಮಿ ಕಂತುಗಳಲ್ಲಿ ವ್ಯತ್ಯಯ ಉಂಟಾಗಿರುವುದು ಸತ್ಯ. ಇದನ್ನು ಪರಿಶೀಲಿಸಿ ಸರಿಪಡಿಸಲಾಗುತ್ತದೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದರು.

ಇದಕ್ಕೆ ತೃಪ್ತರಾಗದ ಬಿಜೆಪಿ ಸದಸ್ಯರು, ವಿಷಾದ ಬೇಡ, ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಎರಡು ತಿಂಗಳ ಕಂತು ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸುವಂತೆ ಒತ್ತಾಯಿಸಿದರು.

ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್, “ಕೇಂದ್ರದಿಂದಲೂ ಅನುದಾನ ವಿಳಂಬವಾಗುತ್ತದೆ. ಹಾಗಂತ ಕೇಂದ್ರ ಸರ್ಕಾರ ದಿವಾಳಿ ಎನ್ನಲಾಗುತ್ತದೆಯೇ?” ಎಂದು ತಿರುಗೇಟು ನೀಡಿದರು. ಇದರಿಂದ ಮತ್ತೆ ಗದ್ದಲ ಉಂಟಾಯಿತು.

ಕೊನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ವಿಷಾದ ಎಂಬ ಪದ ಇಷ್ಟವಾಗದಿದ್ದರೆ ಕ್ಷಮೆ ಕೇಳುತ್ತೇನೆ” ಎಂದು ಹೇಳಿದರೂ, ಉತ್ತರದಿಂದ ತೃಪ್ತರಾಗದ ಬಿಜೆಪಿ ಸದಸ್ಯರು ಸದನದಿಂದ ಸಭಾತ್ಯಾಗ ಮಾಡಿದರು.

ದೇಶ

ಎಪ್ಸ್ಟೀನ್ ಫೈಲ್ಸ್‌ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ

ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್‌ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್‌ಗಟ್ಟಲೆ ಇಮೇಲ್‌ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ಮೂರು ಮಿಲಿಯನ್‌ ಇಮೇಲ್‌ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.

ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.

Continue Reading

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ದೇಶ

LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ

ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.

ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.

ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.

Continue Reading

Trending