ಕ್ರೀಡೆ
ಬಾಲ ಪುರಸ್ಕಾರ ಪಡೆದ ವೈಭವ್ ಸೂರ್ಯವಂಶಿ: ಯುವ ಕ್ರಿಕೆಟ್ ತಾರೆಗೆ ರಾಷ್ಟ್ರ ಗೌರವ
ನವದೆಹಲಿ: ನವದೆಹಲಿಯಲ್ಲಿ ಇಂದು ಆಯೋಜಿಸಲಾಗಿದ್ದ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು. ಈ ವರ್ಷ ದೇಶದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ 20 ಪ್ರತಿಭಾವಂತ ಮಕ್ಕಳಿಗೆ ಈ ಪ್ರತಿಷ್ಠಿತ ಗೌರವ ಲಭಿಸಿದೆ.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಈ ಪ್ರಶಸ್ತಿಗಳು ಕೇವಲ ಪುರಸ್ಕಾರ ಪಡೆದ ಮಕ್ಕಳಿಗೆ ಮಾತ್ರವಲ್ಲದೆ, ದೇಶದಾದ್ಯಂತದ ಕೋಟ್ಯಂತರ ಮಕ್ಕಳಿಗೆ ಪ್ರೇರಣೆಯಾಗುತ್ತವೆ ಎಂದು ಹೇಳಿದರು. ಬಾಲ ಪುರಸ್ಕಾರ ವಿಜೇತ ಮಕ್ಕಳು ಶೌರ್ಯ, ಕಲೆ ಮತ್ತು ಸಂಸ್ಕೃತಿ, ಪರಿಸರ ಸಂರಕ್ಷಣೆ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗಳನ್ನು ಮಾಡಿದ್ದಾರೆ ಎಂದು ಅವರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ವೀರ್ ಬಾಲ್ ದಿವಸ್‌ನ ಮಹತ್ವವನ್ನು ವಿವರಿಸಿದ ರಾಷ್ಟ್ರಪತಿ ಮುರ್ಮು, ಶ್ರೀ ಗುರು ಗೋವಿಂದ ಸಿಂಗ್ ಜಿ ಅವರ ಪುತ್ರರಾದ ಸಾಹಿಬ್‌ಜಾದಾ ಬಾಬಾ ಜೋರಾವರ್ ಸಿಂಗ್ ಜಿ ಮತ್ತು ಬಾಬಾ ಫತೇ ಸಿಂಗ್ ಜಿ ಅವರ ಹುತಾತ್ಮರ ಸ್ಮರಣಾರ್ಥವಾಗಿ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು. ಅವರ ಅಪಾರ ತ್ಯಾಗವು ಇಂದಿಗೂ ಪೀಳಿಗೆಯಿಂದ ಪೀಳಿಗೆಗೆ ಸ್ಪೂರ್ತಿಯಾಗಿ ಉಳಿದಿದೆ ಎಂದರು.
“ಒಂದು ದೇಶದ ಮಕ್ಕಳು ದೇಶಭಕ್ತಿ ಮತ್ತು ಉನ್ನತ ಆದರ್ಶಗಳಿಂದ ತುಂಬಿದ್ದರೆ, ಆ ರಾಷ್ಟ್ರದ ಭವಿಷ್ಯ ಖಚಿತವಾಗುತ್ತದೆ” ಎಂದು ರಾಷ್ಟ್ರಪತಿ ಹೇಳಿದರು.
ಇದೇ ಸಂದರ್ಭದಲ್ಲಿ ಭಾರತದ ಉದಯೋನ್ಮುಖ ಬ್ಯಾಟಿಂಗ್ ತಾರೆ ವೈಭವ್ ಸೂರ್ಯವಂಶಿ ಅವರಿಗೆ ಸಹ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಿ ಗೌರವಿಸಲಾಯಿತು. ಟೀಮ್ ಇಂಡಿಯಾ ಹಾಗೂ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ನೀಡಿದ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಅವರು ಹಲವು ದಾಖಲೆಗಳನ್ನು ಮುರಿದಿದ್ದಾರೆ.
ಕಿರಿಯ ವಯಸ್ಸಿನಲ್ಲೇ ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿರುವ ವೈಭವ್ ಸೂರ್ಯವಂಶಿ, ಇಂದಿನ ಯುವ ಪೀಳಿಗೆಗೆ ಮಾದರಿಯಾಗಿ ಹೊರಹೊಮ್ಮಿದ್ದಾರೆ ಎಂದು ಕಾರ್ಯಕ್ರಮದಲ್ಲಿ ಪ್ರಶಂಸಿಸಲಾಯಿತು.
ಕ್ರೀಡೆ
“ಈ ನಾಟಕ ಮೊದಲೇ ಗೊತ್ತಿತ್ತು” – ರಿಕಿ ಪಾಂಟಿಂಗ್
ಇಸ್ಲಾಮಾಬಾದ್:
ಹಲವು ಸುತ್ತಿನ ನಾಟಕದ ನಂತರ ಕೊನೆಗೂ ಪಾಕಿಸ್ತಾನ ಕ್ರಿಕೆಟ್ ತಂಡವು ಹೈವೋಲ್ಟೇಜ್ ಭಾರತ ವಿರುದ್ಧದ ಪಂದ್ಯವನ್ನು ಫೆಬ್ರವರಿ 15ರಂದು ಆಡಲು ಒಪ್ಪಿಗೆ ಸೂಚಿಸಿದೆ. ಕೊಲೊಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಶಿವರಾತ್ರಿ ದಿನದಂದು ಈ ಮಹತ್ವದ ಪಂದ್ಯ ನಡೆಯಲಿದೆ.
ಭಾರತ ವಿರುದ್ಧ ಪಂದ್ಯ ಆಡಲು ಮೊದಲಿಗೆ ಒಪ್ಪಿಕೊಂಡು, ಬಳಿಕ ಯು-ಟರ್ನ್ ಹೊಡೆದಿದ್ದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ನಿರ್ಧಾರಕ್ಕೆ ಈಗ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಬೆಳವಣಿಗೆಯ ಕುರಿತು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ತೀವ್ರ ವ್ಯಂಗ್ಯವಾಡಿದ್ದು, “ಪಾಕಿಸ್ತಾನದ ಈ ಡ್ರಾಮಾ ಮೊದಲೇ ಗೊತ್ತಿತ್ತು” ಎಂದು ಲೇವಡಿ ಮಾಡಿದ್ದಾರೆ. ಇದೇ ಅಭಿಪ್ರಾಯವನ್ನು ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ವ್ಯಕ್ತಪಡಿಸಿದ್ದರು.
ಪಾಕಿಸ್ತಾನ ಟಿವಿ ಚರ್ಚೆಯಲ್ಲಿ ಭಾಗವಹಿಸಿದ್ದ ಮಾಜಿ ನಾಯಕ ಶಹೀದ್ ಅಫ್ರಿದಿ, ಪಿಸಿಬಿಯ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. “ಯು-ಟರ್ನ್ ತೆಗೆದುಕೊಳ್ಳುವುದೇ ಇದ್ದರೆ ಇಷ್ಟೊಂದು ನಾಟಕ ಯಾಕೆ? ಕೊನೆಗೆ ಪಿಸಿಬಿ ಬಿಸಿಸಿಐ ಮುಂದೆ ಮಂಡಿಯೂರಿದೆ” ಎಂದು ಅವರು ಕಿಡಿಕಾರಿದ್ದಾರೆ.
“ನಾವು ಹಿಂದೆ ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅಲ್ಲಿನ ಜನರು ಪಾಕಿಸ್ತಾನಿಗಳನ್ನು ಪ್ರೀತಿಸುತ್ತಿದ್ದರು. ಆದರೆ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ನಾಲ್ಕು ಗುಜರಾತಿಗಳು ಭಾರತವನ್ನು ನಡೆಸುತ್ತಿದ್ದಾರೆ. ಅವರ ಆಟಕ್ಕೆ ಪಿಸಿಬಿ ಬುಗುರಿಯಂತೆ ಸುತ್ತುತ್ತಿದೆ” ಎಂದು ಅಫ್ರಿದಿ ಲೇವಡಿ ಮಾಡಿದ್ದಾರೆ.
ಇದೇ ವೇಳೆ, ರಿಕಿ ಪಾಂಟಿಂಗ್ ಕೂಡ ಪಾಕಿಸ್ತಾನ ಸರ್ಕಾರದ ಮಾನವನ್ನೂ ಈ ವಿಷಯದಲ್ಲಿ ಹರಾಜು ಹಾಕಲಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ. “ಪ್ರತಿ ಬಾರಿ ಪಿಸಿಬಿಯ ಮಾನ ಹೋಗುತ್ತಿತ್ತು. ಈ ಬಾರಿ ಸರ್ಕಾರದ ಮಾನವೂ ಹಾಳಾಗಿದೆ” ಎಂದು ಹೇಳಿದ್ದಾರೆ.
ಪಾಕಿಸ್ತಾನ ಭಾರತ ವಿರುದ್ಧ ಪಂದ್ಯ ಆಡಲು ಮೂರು ಷರತ್ತುಗಳನ್ನು ಮುಂದಿಟ್ಟಿತ್ತು. ದ್ವಿಪಕ್ಷೀಯ ಸರಣಿ ಹಾಗೂ ಬಾಂಗ್ಲಾದೇಶ ಸೇರಿ ತ್ರಿಕೋಣ ಸರಣಿಯ ಪ್ರಸ್ತಾಪವೂ ಇದರಲ್ಲಿ ಸೇರಿತ್ತು. ಆದರೆ, ಐಸಿಸಿ ಈ ಎಲ್ಲಾ ಷರತ್ತುಗಳನ್ನು ತಿರಸ್ಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕ್ರೀಡೆ
T20 WORLD CUP : ಪಾಕ್‌ಗೆ ಯುಎಸ್ಎ ಆಟಗಾರನ ಖಡಕ್ ಎಚ್ಚರಿಕೆ
ನವದೆಹಲಿ:
ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳಿಗಿಂತ ಇದೀಗ ನಡೆಯುತ್ತಿರುವ ಗೊಂದಲ, ವಿವಾದಗಳೇ ಭಾರೀ ಸದ್ದು ಮಾಡುತ್ತಿವೆ. ಫೆಬ್ರವರಿ 15ರಂದು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಹೇಳಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB)ಯ ಅಹಂಕಾರದ ಮಾತುಗಳು ಇದೀಗ ಸಂಪೂರ್ಣವಾಗಿ ಹಿನ್ನಡೆ ಕಂಡಿವೆ. ಐಸಿಸಿ ತಿರಸ್ಕಾರ ಹಾಗೂ ಬಿಸಿಸಿಐ ಮನವಿಯ ಬಳಿಕ, ಟೀಮ್ ಇಂಡಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯವನ್ನು ಆಡಲು ಪಾಕಿಸ್ತಾನ ಒಪ್ಪಿಗೆ ನೀಡಿದೆ.
ಈ ಮಧ್ಯೆ, ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ಮಂಗಳವಾರ (ಫೆ.10) ಕೊಲಂಬೊದಲ್ಲಿ ಪಾಕಿಸ್ತಾನ ಹಾಗೂ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (USA) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಯುಎಸ್ಎ ತಂಡದ ಆಟಗಾರ ಮೊಹಮ್ಮದ್ ಮೊಹ್ಸಿನ್ ನೀಡಿರುವ ಖಡಕ್ ಎಚ್ಚರಿಕೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಖಡಕ್ ಎಚ್ಚರಿಕೆ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊಹಮ್ಮದ್ ಮೊಹ್ಸಿನ್,
“ನಮ್ಮ ತಂಡದ ಮೇಲೆ ಯಾವುದೇ ಒತ್ತಡವಿಲ್ಲ. ಎಲ್ಲಾ ಒತ್ತಡ ಇರುವುದು ಪಾಕಿಸ್ತಾನ ತಂಡದ ಮೇಲೇ. ಕಳೆದ ಕೆಲ ವರ್ಷಗಳಲ್ಲಿ ಯುಎಸ್ಎ ಆಟಗಾರರ ಕೌಶಲ್ಯಗಳು ಸಾಕಷ್ಟು ಸುಧಾರಿಸಿಕೊಂಡಿವೆ. ಈ ಕಾರಣಕ್ಕೆ ಮತ್ತೊಮ್ಮೆ ಪಾಕಿಸ್ತಾನ ವಿರುದ್ಧ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದ್ದಾರೆ.
“2024ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಬಳಿಕ ನಮ್ಮ ಆತ್ಮವಿಶ್ವಾಸ ಇನ್ನಷ್ಟು ಹೆಚ್ಚಾಗಿದೆ. ಆಗ ಮತ್ತು ಈಗಿನ ನಡುವಿನ ವ್ಯತ್ಯಾಸವೆಂದರೆ – ನಮ್ಮ ಶಕ್ತಿ ಈಗ ದ್ವಿಗುಣವಾಗಿದೆ. ಈ ಪಂದ್ಯದಲ್ಲೂ ನಾವು ಗೆಲುವು ಸಾಧಿಸುತ್ತೇವೆ” ಎಂದು ಮೊಹ್ಸಿನ್ ಸ್ಪಷ್ಟಪಡಿಸಿದರು.
2024ರ ವಿಶ್ವಕಪ್: ಸೂಪರ್ ಓವರ್‌ನಲ್ಲಿ ಯುಎಸ್ಎ ರೋಚಕ ಗೆಲುವು
2024ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಿದ್ದ ಯುಎಸ್ಎ, ಆ ಪಂದ್ಯವನ್ನು ಟೈಗೆ ತಲುಪಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಯುಎಸ್ಎ ಕೂಡ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು.
ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಎಸ್ಎ 18 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ ಕೇವಲ 13 ರನ್ ಗಳಿಸುವ ಮೂಲಕ ಸೋಲು ಕಂಡಿತು. ಈ ಐತಿಹಾಸಿಕ ಗೆಲುವನ್ನೇ ಮುಂದಿಟ್ಟುಕೊಂಡು ಇಂದಿನ ಪಂದ್ಯದಲ್ಲೂ ಗೆಲುವು ಸಾಧಿಸುವ ವಿಶ್ವಾಸವನ್ನು ಮೊಹಮ್ಮದ್ ಮೊಹ್ಸಿನ್ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)
ಕ್ರೀಡೆ
CRICKET : ಪಿಸಿಬಿಯ ಮೂರು ಬೇಡಿಕೆಗಳಿಗೆ ಐಸಿಸಿ ಶಾಕ್
ನವದೆಹಲಿ, ಫೆ.10:
ಭಾರತೀಯ ತಂಡದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನು ಪುನರಾರಂಭಿಸಬೇಕೆಂಬ ಪಿಸಿಬಿ (ಪಾಕಿಸ್ತಾನ ಕ್ರಿಕೆಟ್ ಮಂಡಳಿ) ಬೇಡಿಕೆಯನ್ನು ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ) ತಿರಸ್ಕರಿಸಿದೆ. 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಪಾಕಿಸ್ತಾನ ತಂಡ ಆಡಲು ಅನುಮತಿ ನೀಡದಿರುವುದಾಗಿ ಪಾಕಿಸ್ತಾನ ಸರ್ಕಾರ ನಿರ್ಧಾರ ಕೈಗೊಂಡ ಬೆನ್ನಲ್ಲೇ ನಡೆದ ಸಭೆಯಲ್ಲಿ ಪಿಸಿಬಿ ಈ ಬೇಡಿಕೆ ಮುಂದಿಟ್ಟಿತ್ತು.
ಟಿ20 ವಿಶ್ವಕಪ್ ಬಹಿಷ್ಕಾರ ವಿವಾದದ ಹಿನ್ನೆಲೆಯಲ್ಲಿ ಪಿಸಿಬಿ ಐಸಿಸಿಗೆ ಮೂರು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿತ್ತು. ಭಾರತ–ಪಾಕಿಸ್ತಾನ ದ್ವಿಪಕ್ಷೀಯ ಸರಣಿಯನ್ನು ಪುನರಾರಂಭಿಸಬೇಕು, ಭಾರತ–ಬಾಂಗ್ಲಾದೇಶ–ಪಾಕಿಸ್ತಾನ ನಡುವೆ ತ್ರಿಕೋನ ಸರಣಿ ಆಯೋಜಿಸಬೇಕು ಹಾಗೂ ಸೆಪ್ಟೆಂಬರ್‌ನಲ್ಲಿ ಪ್ರಸ್ತಾವಿತ ಸರಣಿಗಾಗಿ ಭಾರತ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಬೇಕು ಎಂಬುದು ಆ ಬೇಡಿಕೆಗಳಾಗಿದ್ದವು.
ಆದರೆ ಈ ಎಲ್ಲಾ ಬೇಡಿಕೆಗಳನ್ನು ಐಸಿಸಿ ಸ್ಪಷ್ಟವಾಗಿ ತಿರಸ್ಕರಿಸಿದೆ. ಪಾಕಿಸ್ತಾನ ವಿರುದ್ಧ ದ್ವಿಪಕ್ಷೀಯ ಸರಣಿ ಆಡಲು ಟೀಮ್ ಇಂಡಿಯಾಗೆ ಅನುಮತಿ ನೀಡುವ ಅಧಿಕಾರ ನಮ್ಮದಲ್ಲ. ಆ ನಿರ್ಧಾರ ಸಂಪೂರ್ಣವಾಗಿ ಬಿಸಿಸಿಐ ಮತ್ತು ಭಾರತ ಸರ್ಕಾರದ ಅಧೀನದಲ್ಲಿದೆ ಎಂದು ಐಸಿಸಿ ಸ್ಪಷ್ಟಪಡಿಸಿರುವುದಾಗಿ ವರದಿಯಾಗಿದೆ.
ಲಾಹೋರ್‌ನಲ್ಲಿ ನಡೆದ ಸಭೆಯ ಬಳಿಕ, ಫೆಬ್ರವರಿ 15ರಂದು ನಡೆಯಲಿರುವ ಭಾರತ ವಿರುದ್ಧದ ಪಂದ್ಯದಲ್ಲಿ ಪಾಲ್ಗೊಳ್ಳಬೇಕೆ ಅಥವಾ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರ ಪ್ರಕಟಿಸಲು ಐಸಿಸಿ ಪಿಸಿಬಿಗೆ ಒಂದು ದಿನ ಕಾಲಾವಕಾಶ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿದ ಪಿಸಿಬಿ ಅಧ್ಯಕ್ಷ ನಖ್ವಿ, “ನಾವು ಐಸಿಸಿ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯೊಂದಿಗೆ ಚರ್ಚೆ ನಡೆಸಿದ್ದೇವೆ. ಅವರ ಪ್ರತಿಕ್ರಿಯೆ ಸಿಕ್ಕ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಐಸಿಸಿ ಉತ್ತರ ಬಂದ ನಂತರ ನಮ್ಮ ಪ್ರಧಾನಿ ಶೆಹಬಾಜ್ ಶರೀಫ್ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು” ಎಂದಿದ್ದಾರೆ.
-
ಕ್ರೀಡೆ23 hours agoT20 WORLD CUP : ಪಾಕ್‌ಗೆ ಯುಎಸ್ಎ ಆಟಗಾರನ ಖಡಕ್ ಎಚ್ಚರಿಕೆ
-
ಅಪರಾಧ22 hours agoVIRAL NEWS : ಹಾಸಿಗೆಯಲ್ಲಿ ಹಾವಿನ ಪೊರೆ: ಗ್ರಾಮವೇ ಬೆಚ್ಚಿಬಿತ್ತು
-
ದೇಶ22 hours agoBENGALURU : BCCI Centre of Excellence ಬೆಂಗಳೂರಿನಲ್ಲಿ 10 ಹುದ್ದೆಗಳ ನೇಮಕಾತಿ
-
ಅಪರಾಧ20 hours agoಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ನ್ಯಾಯಾಲಯ ನೋಟಿಸ್
-
ಕ್ರೀಡೆ20 hours ago“ಈ ನಾಟಕ ಮೊದಲೇ ಗೊತ್ತಿತ್ತು” – ರಿಕಿ ಪಾಂಟಿಂಗ್
-
ಕ್ರೀಡೆ24 hours agoCRICKET : ಪಿಸಿಬಿಯ ಮೂರು ಬೇಡಿಕೆಗಳಿಗೆ ಐಸಿಸಿ ಶಾಕ್
-
ದೇಶ24 hours agoಪಡಿತರ ಕಾರ್ಡ್: ಮೂರು ವರ್ಷಗಳಿಂದ ಹೊಸ ಅರ್ಜಿಗೆ ಅವಕಾಶವಿಲ್ಲ
-
ದೇಶ24 hours agoಧರ್ಮಸ್ಥಳ ಶಿವರಾತ್ರಿ ಪಾದಯಾತ್ರೆ: ಚಾರ್ಮಾಡಿ ಘಾಟ್ನಲ್ಲಿ ಭಕ್ತರ ಆತಂಕ
