Connect with us

ದೇಶ

ಮಹಾತ್ಮ ಗಾಂಧಿ ಹೆಸರನ್ನು ಇತಿಹಾಸದಿಂದ ಅಳಿಸಲು ಯಾರಿಗೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತಿಹಾಸದಲ್ಲಿ ಎಷ್ಟೋ ಚಕ್ರವರ್ತಿಗಳು ಕಾಲಗರ್ಭಕ್ಕೆ ಸೇರಿದ್ದಾರೆ. ಅಲೆಕ್ಸಾಂಡರ್ ದಿ ಗ್ರೇಟ್ ಮುಕ್ಕಾಲು ಪ್ರಪಂಚ ಗೆದ್ದರೂ ಶಾಶ್ವತನಾಗಲಿಲ್ಲ. ಸದ್ದಾಂ ಹುಸೇನ್ ಕೊನೆಗೆ ಅಡಗಿಕೊಂಡು ಬದುಕಬೇಕಾಯಿತು. ಇನ್ನು ಇತರರ ಸ್ಥಿತಿಯೇನು? ಎಂದು ಪ್ರಶ್ನಿಸಿದರು.


ಮನರೇಗಾ ಹೆಸರು ಬದಲಾವಣೆ ವಿರುದ್ಧ ಜನವರಿ 5ರಿಂದ ಹೋರಾಟ

ಮನರೇಗಾ ಯೋಜನೆಯ ಹೆಸರು ಬದಲಾವಣೆ ಹಾಗೂ ಕೇಂದ್ರ ಸರ್ಕಾರದ ತಿದ್ದುಪಡಿಗಳ ವಿರುದ್ಧ 2026ರ ಜನವರಿ 5ರಿಂದ ಹೊಸ ಹೋರಾಟ ಆರಂಭಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ಘೋಷಿಸಿದರು. ಈ ಹೋರಾಟ ಪಂಚಾಯಿತಿ ಮಟ್ಟದಿಂದ ಆರಂಭವಾಗಲಿದೆ ಎಂದರು.

ಗ್ಯಾರಂಟಿ ಸಮಿತಿ, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಾಮನಿರ್ದೇಶಿತವಾಗಿರುವ 150–200 ಸದಸ್ಯರು ಹೋರಾಟದ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು. ಈ ಹೋರಾಟದ ಉಸ್ತುವಾರಿಗಾಗಿ ಜಿ.ಸಿ.ಚಂದ್ರಶೇಖರ್ ನೇತೃತ್ವದಲ್ಲಿ ವೀಕ್ಷಕರನ್ನು ನೇಮಿಸಲಾಗುವುದು ಎಂದರು.


ಜಿಲ್ಲಾ–ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಸಿದ್ಧತೆ

ಮುಂದಿನ ಎರಡು–ಮೂರು ತಿಂಗಳೊಳಗೆ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಇದಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಈ ವಿಷಯವನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರ ಗಮನಕ್ಕೂ ತರಲಾಗಿದ್ದು, ಮೀಸಲಾತಿ ಸಂಬಂಧ ನ್ಯಾಯಾಲಯಗಳಲ್ಲಿ ಇರುವ ಅಡೆತಡೆಗಳನ್ನು ನಿವಾರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.


ಕಾಂಗ್ರೆಸ್ ಭವನಗಳ ಅಡಿಪಾಯಕ್ಕೆ ಶೀಘ್ರ ಚಾಲನೆ

ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರು ಅಡಿಪಾಯಕ್ಕಾಗಿ ಕಾಯಬಾರದು. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಬೆಂಗಳೂರಿನಿಂದ ವರ್ಚುವಲ್ ಮೂಲಕ ಎಲ್ಲಾ ಕಾಂಗ್ರೆಸ್ ಭವನಗಳ ಅಡಿಪಾಯಕ್ಕೆ ಚಾಲನೆ ನೀಡಲಿದ್ದಾರೆ. ಆದರೆ ಎಲ್ಲಾ ತಯಾರಿಗಳನ್ನು ಈಗಲೇ ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದೇನೆ ಎಂದು ಡಿಕೆಶಿ ಹೇಳಿದರು.


ಮನರೇಗಾ ಯೋಜನೆ ಮೇಲೆ ಕೇಂದ್ರದ ದಾಳಿ ಆರೋಪ

ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿಕೊಂಡು 101 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಅವರ ಹೆಸರನ್ನೇ ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಡಿಕೆಶಿ ಆರೋಪಿಸಿದರು. ಕಾಂಗ್ರೆಸ್ ಸರ್ಕಾರ ತಂದ ಮನರೇಗಾ ಯೋಜನೆ ಗ್ರಾಮೀಣ ಬಡವರಿಗೆ ಉದ್ಯೋಗ ನೀಡುವ ಐತಿಹಾಸಿಕ ಯೋಜನೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡಲು ಮುಂದಾಗಿದೆ ಎಂದರು.

60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡುವ ಹೊಸ ತಿದ್ದುಪಡಿ ತಂದಿದ್ದಾರೆ. ಬರಗಾಲ ಪ್ರದೇಶದಲ್ಲಿ 150 ಮಾನವ ದಿನಗಳ ಉದ್ಯೋಗ ನೀಡಬೇಕೆಂದು ಕಾನೂನಿನಲ್ಲಿ ಇದ್ದರೂ, ಬರಗಾಲ ಹಾಗೂ ಕೋವಿಡ್ ಸಮಯದಲ್ಲೂ ರಾಜ್ಯಕ್ಕೆ ಸರಿಯಾಗಿ ಅನುದಾನ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಕನಕಪುರ ಕ್ಷೇತ್ರದಲ್ಲಿ 200 ಕೋಟಿ ಅನುದಾನ ಸದ್ಬಳಕೆ

ಮನರೇಗಾ ಯೋಜನೆಯನ್ನು ಕನಕಪುರ ತಾಲ್ಲೂಕಿನಲ್ಲಿ ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸುಮಾರು 200 ಕೋಟಿ ರೂ.ಗೂ ಅಧಿಕ ಅನುದಾನವನ್ನು ಒಂದೇ ತಾಲ್ಲೂಕಿನಲ್ಲಿ ಸದ್ಬಳಕೆ ಮಾಡಲಾಗಿದೆ. ಇದರಲ್ಲಿ 57 ಸಾವಿರ ರೈತ ಕುಟುಂಬಗಳಿಗೆ ದನದ ಕೊಟ್ಟಿಗೆ, ಕೋಳಿ ಸಾಕಾಣಿಕೆ ಶೆಡ್, ಇಂಗುಗುಂಡಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರ ಹಣ ಲೂಟಿ ಆರೋಪದ ಹಿನ್ನೆಲೆಯಲ್ಲಿ ಹತ್ತು ತನಿಖಾ ತಂಡಗಳನ್ನು ಕಳುಹಿಸಿತ್ತು, ಆದರೆ ನಂತರ ನಮ್ಮ ಕ್ಷೇತ್ರಕ್ಕೆ ಪ್ರಶಸ್ತಿಯನ್ನೇ ನೀಡಬೇಕಾಯಿತು ಎಂದು ಡಿಕೆಶಿ ಹೇಳಿದರು.

ದೇಶ

ಎಪ್ಸ್ಟೀನ್ ಫೈಲ್ಸ್‌ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ

ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್‌ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್‌ಗಟ್ಟಲೆ ಇಮೇಲ್‌ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ಮೂರು ಮಿಲಿಯನ್‌ ಇಮೇಲ್‌ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.

ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.

Continue Reading

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ದೇಶ

LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ

ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.

ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.

ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.

Continue Reading

Trending