Connect with us

ಕ್ರೀಡೆ

ವಿಶ್ವಕಪ್ ಹೊತ್ತಲ್ಲೇ ಯುಎಸ್ಎಗೆ ಭಾರಿ ಆಘಾತ

ಟಿ20 ವಿಶ್ವಕಪ್ 2026 ಆರಂಭಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಫೆಬ್ರವರಿ 7ರಿಂದ ಪಂದ್ಯಾವಳಿ ಅಧಿಕೃತವಾಗಿ ಆರಂಭಗೊಳ್ಳಲಿದೆ. ಭಾರತ ಸೇರಿ ಒಟ್ಟು 20 ತಂಡಗಳು ಈ ಮಹಾ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ರೋಚಕತೆಯನ್ನು ನೀಡುವ ನಿರೀಕ್ಷೆಯಿದೆ. ಆದರೆ ವಿಶ್ವಕಪ್‌ಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಾಗಲೇ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (ಯುಎಸ್ಎ) ಕ್ರಿಕೆಟ್ ತಂಡದಲ್ಲಿ ಭಾರಿ ಕೋಲಾಹಲ ಉಂಟಾಗಿದೆ.

ಯುಎಸ್ಎ ತಂಡದ ಸ್ಟಾರ್ ಆಟಗಾರ, ವೆಸ್ಟ್ ಇಂಡೀಸ್ ಮೂಲದ ಆರನ್ ಜೋನ್ಸ್ ಅವರನ್ನು ಐಸಿಸಿ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಈ ಕುರಿತು ಐಸಿಸಿ ಹಾಗೂ ಕ್ರಿಕೆಟ್ ವೆಸ್ಟ್ ಇಂಡೀಸ್ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಜೋನ್ಸ್ ವಿರುದ್ಧ ಐದು ಭ್ರಷ್ಟಾಚಾರ ವಿರೋಧಿ ನಿಯಮಗಳ ಉಲ್ಲಂಘನೆ ಆರೋಪಗಳು ಕೇಳಿಬಂದಿವೆ. ಈ ಆರೋಪಗಳು 2023–24ರ ಋತುವಿನಲ್ಲಿ ಬಾರ್ಬಡೋಸ್‌ನಲ್ಲಿ ನಡೆದ BIM 10 ಟೂರ್ನಿಗೆ ಸಂಬಂಧಿಸಿದವು.

BIM 10 ಪಂದ್ಯಾವಳಿಯ ವೇಳೆ ಪಂದ್ಯ ಫಿಕ್ಸಿಂಗ್ ಅಥವಾ ಪಂದ್ಯ ಫಲಿತಾಂಶದ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆಸಿದ ಆರೋಪ ಜೋನ್ಸ್ ಮೇಲಿದೆ. ಅಲ್ಲದೆ, ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಅವರನ್ನು ಜನವರಿ 28, 2026ರಿಂದ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದ್ದು, 14 ದಿನಗಳೊಳಗೆ ಆರೋಪಗಳಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.

31 ವರ್ಷದ ಆರನ್ ಜೋನ್ಸ್ ಇದುವರೆಗೆ ಯುಎಸ್ಎ ಪರ 52 ಏಕದಿನ ಪಂದ್ಯಗಳಲ್ಲಿ 1,664 ರನ್ ಗಳಿಸಿದ್ದು, 48 ಟಿ20 ಪಂದ್ಯಗಳಲ್ಲಿ 770 ರನ್ ಗಳಿಸಿದ್ದಾರೆ. ಅವರ ಅಮಾನತು ಯುಎಸ್ಎ ತಂಡದ ವಿಶ್ವಕಪ್ ಸಿದ್ಧತೆಗಳಿಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಇದೀಗ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಯುಎಸ್ಎ ತಂಡದ ಭವಿಷ್ಯ ಪ್ರಶ್ನಾರ್ಥಕವಾಗಿದೆ.

ಕ್ರೀಡೆ

“ಈ ನಾಟಕ ಮೊದಲೇ ಗೊತ್ತಿತ್ತು” – ರಿಕಿ ಪಾಂಟಿಂಗ್

ಇಸ್ಲಾಮಾಬಾದ್:

ಹಲವು ಸುತ್ತಿನ ನಾಟಕದ ನಂತರ ಕೊನೆಗೂ ಪಾಕಿಸ್ತಾನ ಕ್ರಿಕೆಟ್ ತಂಡವು ಹೈವೋಲ್ಟೇಜ್ ಭಾರತ ವಿರುದ್ಧದ ಪಂದ್ಯವನ್ನು ಫೆಬ್ರವರಿ 15ರಂದು ಆಡಲು ಒಪ್ಪಿಗೆ ಸೂಚಿಸಿದೆ. ಕೊಲೊಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಶಿವರಾತ್ರಿ ದಿನದಂದು ಈ ಮಹತ್ವದ ಪಂದ್ಯ ನಡೆಯಲಿದೆ.

ಭಾರತ ವಿರುದ್ಧ ಪಂದ್ಯ ಆಡಲು ಮೊದಲಿಗೆ ಒಪ್ಪಿಕೊಂಡು, ಬಳಿಕ ಯು-ಟರ್ನ್ ಹೊಡೆದಿದ್ದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ (PCB) ನಿರ್ಧಾರಕ್ಕೆ ಈಗ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಬೆಳವಣಿಗೆಯ ಕುರಿತು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ತೀವ್ರ ವ್ಯಂಗ್ಯವಾಡಿದ್ದು, “ಪಾಕಿಸ್ತಾನದ ಈ ಡ್ರಾಮಾ ಮೊದಲೇ ಗೊತ್ತಿತ್ತು” ಎಂದು ಲೇವಡಿ ಮಾಡಿದ್ದಾರೆ. ಇದೇ ಅಭಿಪ್ರಾಯವನ್ನು ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ವ್ಯಕ್ತಪಡಿಸಿದ್ದರು.

ಪಾಕಿಸ್ತಾನ ಟಿವಿ ಚರ್ಚೆಯಲ್ಲಿ ಭಾಗವಹಿಸಿದ್ದ ಮಾಜಿ ನಾಯಕ ಶಹೀದ್ ಅಫ್ರಿದಿ, ಪಿಸಿಬಿಯ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. “ಯು-ಟರ್ನ್ ತೆಗೆದುಕೊಳ್ಳುವುದೇ ಇದ್ದರೆ ಇಷ್ಟೊಂದು ನಾಟಕ ಯಾಕೆ? ಕೊನೆಗೆ ಪಿಸಿಬಿ ಬಿಸಿಸಿಐ ಮುಂದೆ ಮಂಡಿಯೂರಿದೆ” ಎಂದು ಅವರು ಕಿಡಿಕಾರಿದ್ದಾರೆ.

“ನಾವು ಹಿಂದೆ ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅಲ್ಲಿನ ಜನರು ಪಾಕಿಸ್ತಾನಿಗಳನ್ನು ಪ್ರೀತಿಸುತ್ತಿದ್ದರು. ಆದರೆ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ನಾಲ್ಕು ಗುಜರಾತಿಗಳು ಭಾರತವನ್ನು ನಡೆಸುತ್ತಿದ್ದಾರೆ. ಅವರ ಆಟಕ್ಕೆ ಪಿಸಿಬಿ ಬುಗುರಿಯಂತೆ ಸುತ್ತುತ್ತಿದೆ” ಎಂದು ಅಫ್ರಿದಿ ಲೇವಡಿ ಮಾಡಿದ್ದಾರೆ.

ಇದೇ ವೇಳೆ, ರಿಕಿ ಪಾಂಟಿಂಗ್ ಕೂಡ ಪಾಕಿಸ್ತಾನ ಸರ್ಕಾರದ ಮಾನವನ್ನೂ ಈ ವಿಷಯದಲ್ಲಿ ಹರಾಜು ಹಾಕಲಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ. “ಪ್ರತಿ ಬಾರಿ ಪಿಸಿಬಿಯ ಮಾನ ಹೋಗುತ್ತಿತ್ತು. ಈ ಬಾರಿ ಸರ್ಕಾರದ ಮಾನವೂ ಹಾಳಾಗಿದೆ” ಎಂದು ಹೇಳಿದ್ದಾರೆ.

ಪಾಕಿಸ್ತಾನ ಭಾರತ ವಿರುದ್ಧ ಪಂದ್ಯ ಆಡಲು ಮೂರು ಷರತ್ತುಗಳನ್ನು ಮುಂದಿಟ್ಟಿತ್ತು. ದ್ವಿಪಕ್ಷೀಯ ಸರಣಿ ಹಾಗೂ ಬಾಂಗ್ಲಾದೇಶ ಸೇರಿ ತ್ರಿಕೋಣ ಸರಣಿಯ ಪ್ರಸ್ತಾಪವೂ ಇದರಲ್ಲಿ ಸೇರಿತ್ತು. ಆದರೆ, ಐಸಿಸಿ ಈ ಎಲ್ಲಾ ಷರತ್ತುಗಳನ್ನು ತಿರಸ್ಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Continue Reading

ಕ್ರೀಡೆ

T20 WORLD CUP : ಪಾಕ್‌ಗೆ ಯುಎಸ್ಎ ಆಟಗಾರನ ಖಡಕ್ ಎಚ್ಚರಿಕೆ

ನವದೆಹಲಿ:
ಟಿ20 ವಿಶ್ವಕಪ್‌ ಟೂರ್ನಿಯ ಪಂದ್ಯಗಳಿಗಿಂತ ಇದೀಗ ನಡೆಯುತ್ತಿರುವ ಗೊಂದಲ, ವಿವಾದಗಳೇ ಭಾರೀ ಸದ್ದು ಮಾಡುತ್ತಿವೆ. ಫೆಬ್ರವರಿ 15ರಂದು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಹೇಳಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB)ಯ ಅಹಂಕಾರದ ಮಾತುಗಳು ಇದೀಗ ಸಂಪೂರ್ಣವಾಗಿ ಹಿನ್ನಡೆ ಕಂಡಿವೆ. ಐಸಿಸಿ ತಿರಸ್ಕಾರ ಹಾಗೂ ಬಿಸಿಸಿಐ ಮನವಿಯ ಬಳಿಕ, ಟೀಮ್ ಇಂಡಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯವನ್ನು ಆಡಲು ಪಾಕಿಸ್ತಾನ ಒಪ್ಪಿಗೆ ನೀಡಿದೆ.

ಈ ಮಧ್ಯೆ, ಟಿ20 ವಿಶ್ವಕಪ್‌ ಟೂರ್ನಿಯ ಭಾಗವಾಗಿ ಮಂಗಳವಾರ (ಫೆ.10) ಕೊಲಂಬೊದಲ್ಲಿ ಪಾಕಿಸ್ತಾನ ಹಾಗೂ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (USA) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಯುಎಸ್ಎ ತಂಡದ ಆಟಗಾರ ಮೊಹಮ್ಮದ್ ಮೊಹ್ಸಿನ್ ನೀಡಿರುವ ಖಡಕ್‌ ಎಚ್ಚರಿಕೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಖಡಕ್‌ ಎಚ್ಚರಿಕೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊಹಮ್ಮದ್ ಮೊಹ್ಸಿನ್,
“ನಮ್ಮ ತಂಡದ ಮೇಲೆ ಯಾವುದೇ ಒತ್ತಡವಿಲ್ಲ. ಎಲ್ಲಾ ಒತ್ತಡ ಇರುವುದು ಪಾಕಿಸ್ತಾನ ತಂಡದ ಮೇಲೇ. ಕಳೆದ ಕೆಲ ವರ್ಷಗಳಲ್ಲಿ ಯುಎಸ್ಎ ಆಟಗಾರರ ಕೌಶಲ್ಯಗಳು ಸಾಕಷ್ಟು ಸುಧಾರಿಸಿಕೊಂಡಿವೆ. ಈ ಕಾರಣಕ್ಕೆ ಮತ್ತೊಮ್ಮೆ ಪಾಕಿಸ್ತಾನ ವಿರುದ್ಧ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದ್ದಾರೆ.

“2024ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಬಳಿಕ ನಮ್ಮ ಆತ್ಮವಿಶ್ವಾಸ ಇನ್ನಷ್ಟು ಹೆಚ್ಚಾಗಿದೆ. ಆಗ ಮತ್ತು ಈಗಿನ ನಡುವಿನ ವ್ಯತ್ಯಾಸವೆಂದರೆ – ನಮ್ಮ ಶಕ್ತಿ ಈಗ ದ್ವಿಗುಣವಾಗಿದೆ. ಈ ಪಂದ್ಯದಲ್ಲೂ ನಾವು ಗೆಲುವು ಸಾಧಿಸುತ್ತೇವೆ” ಎಂದು ಮೊಹ್ಸಿನ್ ಸ್ಪಷ್ಟಪಡಿಸಿದರು.

2024ರ ವಿಶ್ವಕಪ್‌: ಸೂಪರ್ ಓವರ್‌ನಲ್ಲಿ ಯುಎಸ್ಎ ರೋಚಕ ಗೆಲುವು

2024ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಿದ್ದ ಯುಎಸ್ಎ, ಆ ಪಂದ್ಯವನ್ನು ಟೈಗೆ ತಲುಪಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 159 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಯುಎಸ್ಎ ಕೂಡ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 159 ರನ್ ಗಳಿಸಿತು.

ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಎಸ್ಎ 18 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ ಕೇವಲ 13 ರನ್ ಗಳಿಸುವ ಮೂಲಕ ಸೋಲು ಕಂಡಿತು. ಈ ಐತಿಹಾಸಿಕ ಗೆಲುವನ್ನೇ ಮುಂದಿಟ್ಟುಕೊಂಡು ಇಂದಿನ ಪಂದ್ಯದಲ್ಲೂ ಗೆಲುವು ಸಾಧಿಸುವ ವಿಶ್ವಾಸವನ್ನು ಮೊಹಮ್ಮದ್ ಮೊಹ್ಸಿನ್ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)

Continue Reading

ಕ್ರೀಡೆ

CRICKET : ಪಿಸಿಬಿಯ ಮೂರು ಬೇಡಿಕೆಗಳಿಗೆ ಐಸಿಸಿ ಶಾಕ್

ನವದೆಹಲಿ, ಫೆ.10:
ಭಾರತೀಯ ತಂಡದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನು ಪುನರಾರಂಭಿಸಬೇಕೆಂಬ ಪಿಸಿಬಿ (ಪಾಕಿಸ್ತಾನ ಕ್ರಿಕೆಟ್ ಮಂಡಳಿ) ಬೇಡಿಕೆಯನ್ನು ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ) ತಿರಸ್ಕರಿಸಿದೆ. 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಪಾಕಿಸ್ತಾನ ತಂಡ ಆಡಲು ಅನುಮತಿ ನೀಡದಿರುವುದಾಗಿ ಪಾಕಿಸ್ತಾನ ಸರ್ಕಾರ ನಿರ್ಧಾರ ಕೈಗೊಂಡ ಬೆನ್ನಲ್ಲೇ ನಡೆದ ಸಭೆಯಲ್ಲಿ ಪಿಸಿಬಿ ಈ ಬೇಡಿಕೆ ಮುಂದಿಟ್ಟಿತ್ತು.

ಟಿ20 ವಿಶ್ವಕಪ್ ಬಹಿಷ್ಕಾರ ವಿವಾದದ ಹಿನ್ನೆಲೆಯಲ್ಲಿ ಪಿಸಿಬಿ ಐಸಿಸಿಗೆ ಮೂರು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿತ್ತು. ಭಾರತ–ಪಾಕಿಸ್ತಾನ ದ್ವಿಪಕ್ಷೀಯ ಸರಣಿಯನ್ನು ಪುನರಾರಂಭಿಸಬೇಕು, ಭಾರತ–ಬಾಂಗ್ಲಾದೇಶ–ಪಾಕಿಸ್ತಾನ ನಡುವೆ ತ್ರಿಕೋನ ಸರಣಿ ಆಯೋಜಿಸಬೇಕು ಹಾಗೂ ಸೆಪ್ಟೆಂಬರ್‌ನಲ್ಲಿ ಪ್ರಸ್ತಾವಿತ ಸರಣಿಗಾಗಿ ಭಾರತ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಬೇಕು ಎಂಬುದು ಆ ಬೇಡಿಕೆಗಳಾಗಿದ್ದವು.

ಆದರೆ ಈ ಎಲ್ಲಾ ಬೇಡಿಕೆಗಳನ್ನು ಐಸಿಸಿ ಸ್ಪಷ್ಟವಾಗಿ ತಿರಸ್ಕರಿಸಿದೆ. ಪಾಕಿಸ್ತಾನ ವಿರುದ್ಧ ದ್ವಿಪಕ್ಷೀಯ ಸರಣಿ ಆಡಲು ಟೀಮ್ ಇಂಡಿಯಾಗೆ ಅನುಮತಿ ನೀಡುವ ಅಧಿಕಾರ ನಮ್ಮದಲ್ಲ. ಆ ನಿರ್ಧಾರ ಸಂಪೂರ್ಣವಾಗಿ ಬಿಸಿಸಿಐ ಮತ್ತು ಭಾರತ ಸರ್ಕಾರದ ಅಧೀನದಲ್ಲಿದೆ ಎಂದು ಐಸಿಸಿ ಸ್ಪಷ್ಟಪಡಿಸಿರುವುದಾಗಿ ವರದಿಯಾಗಿದೆ.

ಲಾಹೋರ್‌ನಲ್ಲಿ ನಡೆದ ಸಭೆಯ ಬಳಿಕ, ಫೆಬ್ರವರಿ 15ರಂದು ನಡೆಯಲಿರುವ ಭಾರತ ವಿರುದ್ಧದ ಪಂದ್ಯದಲ್ಲಿ ಪಾಲ್ಗೊಳ್ಳಬೇಕೆ ಅಥವಾ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರ ಪ್ರಕಟಿಸಲು ಐಸಿಸಿ ಪಿಸಿಬಿಗೆ ಒಂದು ದಿನ ಕಾಲಾವಕಾಶ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಪಿಸಿಬಿ ಅಧ್ಯಕ್ಷ ನಖ್ವಿ, “ನಾವು ಐಸಿಸಿ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯೊಂದಿಗೆ ಚರ್ಚೆ ನಡೆಸಿದ್ದೇವೆ. ಅವರ ಪ್ರತಿಕ್ರಿಯೆ ಸಿಕ್ಕ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಐಸಿಸಿ ಉತ್ತರ ಬಂದ ನಂತರ ನಮ್ಮ ಪ್ರಧಾನಿ ಶೆಹಬಾಜ್ ಶರೀಫ್ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು” ಎಂದಿದ್ದಾರೆ.

Continue Reading

Trending