Connect with us

ಬೆಂಗಳೂರು

ಮನೆ ಖರ್ಚಿಗೆ ಗೃಹ ಲಕ್ಷ್ಮಿ ಹಣ ಬಳಕೆ: ಪಂಚ ಗ್ಯಾರಂಟಿ ಯೋಜನೆಗಳ ಸಮೀಕ್ಷೆಯಲ್ಲಿ ಕಂಡುಬಂದ ಅಂಶಗಳೇನು ಗೊತ್ತಾ? – Guarantee Schemes Survey

ಬೆಂಗಳೂರು: ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಜಾರಿಗೆಯಾಗಿ ಒಂದು ವರ್ಷ ಕಳೆದಿದೆ.‌ ಆರ್ಥಿಕ‌ ಸಂಕಷ್ಟದ ಮಧ್ಯೆಯೂ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಗೃಹ ಜ್ಯೋತಿ, ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಗಳಿಂದ ಫಲಾನುಭವಿಗಳು ಪಡೆಯುತ್ತಿರುವ ಪ್ರಯೋಜನಗಳ ಕುರಿತು ಸರ್ಕಾರ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಿದೆ.

ಗೃಹ ಜ್ಯೋತಿ ಯೋಜನೆಯ ಸಮೀಕ್ಷೆ: ಗೃಹ ಜ್ಯೋತಿ ಫಲಾನುಭವಿಗಳ ಪೈಕಿ ಶೇ.45ರಷ್ಟು ಸಮೀಕ್ಷೆ ಮಾಡಲಾಗಿದೆ. ಇನ್ನೂ ಶೇ.55ರಷ್ಟು ಫಲಾನುಭವಿಗಳ ಸಮೀಕ್ಷೆ ನಡೆಸಬೇಕಿದೆ. ಸಮೀಕ್ಷೆಯಂತೆ ಶೇ.98 ಫಲಾನುಭವಿಗಳು ಉಚಿತ ವಿದ್ಯುತ್ ಯೋಜನೆಯಿಂದ ತಮ್ಮ ಜೀವನವನ್ನು ಸುಧಾರಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ.29 ಜನರು ಯೋಜನೆಯು ಹೆಚ್ಚಿನ ಅಧ್ಯಯನಕ್ಕೆ ಸಹಾಯ ಮಾಡಿದೆ ಎಂದಿದ್ದಾರೆ. ಇನ್ನು ಶೇ.33 ಜನರು ಇದು ಹಣ ಉಳಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ ಸಮೀಕ್ಷೆ: ಗೃಹ ಲಕ್ಷ್ಮಿ ಫಲಾನುಭವಿಗಳ ಪೈಕಿ ಶೇ.63 ಸಮೀಕ್ಷೆ ನಡೆಸಲಾಗಿದ್ದು, ಶೇ.37 ಫಲಾನುಭವಿಗಳ ಇನ್ನಷ್ಟೇ ಸಮೀಕ್ಷೆ ನಡೆಸಬೇಕು. ಗೃಹ ಲಕ್ಷ್ಮಿಯಡಿ ಯಜಮಾನಿಗೆ ಕೊಡುವ ಮಾಸಿಕ 2,000 ರೂ. ಹಣದ ಪೈಕಿ ಶೇ.43 ರಷ್ಟು ಹಣವನ್ನು ಹಣ್ಣುಗಳು ಮತ್ತು ತರಕಾರಿಗಳನ್ನು ಖರೀದಿಸಲು ಬಳಸಿದ್ದಾರೆ. ಶೇ.13ರಷ್ಟು ಹಣವನ್ನು ಮಕ್ಕಳ ಶಾಲಾ ಶಿಕ್ಷಣಕ್ಕಾಗಿ ಬಳಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಶೇ.15ರಷ್ಟು ಜನರು ವೈದ್ಯಕೀಯ ವೆಚ್ಚಗಳಿಗೆ ಬಳಸುತ್ತಿದ್ದರೆ, ಶೇ.23ರಷ್ಟು ಜನರು ಸಾಮಾನ್ಯ ಮನೆ ವೆಚ್ಚಕ್ಕಾಗಿ ಬಳಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಶಕ್ತಿ ಯೋಜನೆಯ ಸಮೀಕ್ಷೆ: ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಸಮೀಕ್ಷೆಯಲ್ಲಿ ಶೇ.98ರಷ್ಟು ಜನರು ಯೋಜನೆಯ ಪ್ರಯೋಜನ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಶೇ.94ರಷ್ಟು ಜನರು ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅನ್ನಭಾಗ್ಯ ಯೋಜನೆಯ ಸಮೀಕ್ಷೆ: ಅನ್ನಭಾಗ್ಯದಡಿ ಒಟ್ಟು ಫಲಾನುಭವಿಗಳ ಪೈಕಿ ಶೇ.73ರಷ್ಟು ಸಮೀಕ್ಷೆ ಮಾಡಲಾಗಿದೆ. ಶೇ.27 ಫಲಾನುಭವಿಗಳ ಸಮೀಕ್ಷೆ ನಡೆಸಬೇಕಾಗಿದೆ. ಸಮೀಕ್ಷೆಯಲ್ಲಿ ಶೇ.90 ರಷ್ಟು ಜನರು ಸರ್ಕಾರ ಅಕ್ಕಿಯ ಜೊತೆಗೆ ಬೇಳೆಕಾಳುಗಳು, ತೈಲ ಮುಂತಾದ ಇತರ ಆಹಾರ ಪದಾರ್ಥಗಳನ್ನು ಒದಗಿಸಿದರೆ ಉತ್ತಮ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಯುವನಿಧಿ ಸಮೀಕ್ಷೆ: ಯುವನಿಧಿ ಗ್ಯಾರಂಟಿ ಸಮೀಕ್ಷೆಯಲ್ಲಿ ಶೇ.73ರಷ್ಟು ಯುವಕರು, ಆರ್ಥಿಕ ಒತ್ತಡ ಕಡಿಮೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾರ್ಚ್ 1ರಿಂದ ಮಾರ್ಚ್ 15ರ ವರೆಗೆ ಸಮೀಕ್ಷೆ ನಡೆಸಲಾಗಿದೆ. ಇದಕ್ಕಾಗಿ 72,435 ಅಂಗನವಾಡಿ ಕಾರ್ಯಕರ್ತರು, 42,417 ಆಶಾ ಕಾರ್ಯಕರ್ತರು, 2,233 ಬಿಬಿಎಂಪಿ ಸಮೀಕ್ಷಾಕಾರರು, 581 ನಗರ ಮತ್ತು ಪಂಚಾಯತ್ ರಾಜ್ ಸಮೀಕ್ಷಾಕಾರರನ್ನು ನೋಂದಾಯಿಸಲಾಗಿದೆ. ಒಟ್ಟು 84,52,317 ಕುಟುಂಬಗಳ ಮತ್ತು 5 ಕೋಟಿ ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಅಪರಾಧ

BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.

ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.

Continue Reading

Trending