ಕ್ರೀಡೆ
6ನೇ ಬಾರಿ ಅಖಿಲ ಭಾರತ ಅಥ್ಲೆಟಿಕ್ ಕೂಟಕ್ಕೆ ಆಳ್ವಾಸ್ ಆತಿಥ್ಯ
ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ (RGUHS) ಆಶ್ರಯದಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ಹಾಗೂ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟೀಸ್ (AIU) ಸಹಭಾಗಿತ್ವದಲ್ಲಿ 85ನೇ ಅಖಿಲ ಭಾರತ ಪುರುಷ ಹಾಗೂ ಮಹಿಳಾ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್ – 2026 ಅನ್ನು ಜನವರಿ 12ರಿಂದ 16ರವರೆಗೆ ಆಯೋಜಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.
ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿರುವ ಈ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ದೇಶದ 312ಕ್ಕೂ ಅಧಿಕ ವಿಶ್ವವಿದ್ಯಾಲಯಗಳಿಂದ 4,288ಕ್ಕೂ ಹೆಚ್ಚು ಅಥ್ಲೀಟ್‌ಗಳು ಹಾಗೂ ಸುಮಾರು 1,000ಕ್ಕೂ ಹೆಚ್ಚು ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ. ಇದು ದೇಶದ ಅತ್ಯಂತ ದೊಡ್ಡ ಅಂತರ್‌ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆಗಳಲ್ಲೊಂದಾಗಿದೆ.
ಕ್ರೀಡಾಕೂಟವನ್ನು ಅತ್ಯಾಧುನಿಕ ಸಿಂಥಟಿಕ್ ಟ್ರ್ಯಾಕ್‌ನಲ್ಲಿ, ಹೊನಲು ಬೆಳಕಿನ ವ್ಯವಸ್ಥೆಯೊಂದಿಗೆ ಆಯೋಜಿಸಲಾಗಿದ್ದು, ಫಲಿತಾಂಶಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಫೋಟೋ ಫಿನಿಶಿಂಗ್ ತಂತ್ರಜ್ಞಾನ ಅಳವಡಿಸಲಾಗಿದೆ. ಈ ಕೂಟವನ್ನು ಖೇಲೋ ಇಂಡಿಯಾ ಹಾಗೂ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ ಮಟ್ಟದ ಕ್ರೀಡಾಕೂಟಗಳಿಗೆ ಮಾದರಿಯಾಗಿ ಪರಿಗಣಿಸಲಾಗುತ್ತಿದೆ.
ಜನವರಿ 12ರಂದು ಸಂಜೆ 4.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಜೇತರಿಗೆ ₹20 ಲಕ್ಷಕ್ಕೂ ಅಧಿಕ ನಗದು ಬಹುಮಾನ ಘೋಷಿಸಲಾಗಿದ್ದು, ಪ್ರತಿ ದಿನ ಸಂಜೆ 7 ಗಂಟೆಗೆ ಭವ್ಯ ವಿಜಯ ವೇದಿಕೆಯಲ್ಲಿ ಪದಕ ಪ್ರದಾನ ನಡೆಯಲಿದೆ. 6ನೇ ಬಾರಿ ಆಳ್ವಾಸ್ ಈ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುತ್ತಿರುವುದು ವಿಶೇಷ.