Connect with us

ದೇಶ

ಸಂಸದೀಯ ಸ್ಥಾಯಿ ಸಮಿತಿಗಳ ರಚನೆ: ರಕ್ಷಣಾ ಸಮಿತಿಯಲ್ಲಿ ರಾಹುಲ್​ ಗಾಂಧಿ – Parliamentary Standing Committees

ನವದೆಹಲಿ: 2024-2025ರ ಇಲಾಖಾವಾರು ಸಂಸದೀಯ ಸ್ಥಾಯಿ ಸಮಿತಿಗಳನ್ನು ಗುರುವಾರ ರಚಿಸಲಾಗಿದ್ದು, 24 ಸ್ಥಾಯಿ ಸಮಿತಿಗಳ ಪೈಕಿ ಕಾಂಗ್ರೆಸ್​ಗೆ 4 ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ರಕ್ಷಣಾ ಸಮಿತಿಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಸದಸ್ಯರಾಗಿದ್ದಾರೆ. ಪ್ರತಿ ಸಮಿತಿಯಲ್ಲೂ ರಾಜ್ಯಸಭಾ ಮತ್ತು ಲೋಕಸಭೆಯ ಸದಸ್ಯರಿದ್ದಾರೆ.

ಮಾಜಿ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ರಾಹುಲ್ ಗಾಂಧಿ, ಹ್ಯಾರಿಸ್ ಬೀರನ್, ಸಾಮಿಕ್ ಭಟ್ಟಾಚಾರ್ಯ, ಅಜಯ್ ಮಾಕನ್, ಡೆರೆಕ್ ಒ’ಬ್ರೇನ್, ನಬಮ್ ರೆಬಿಯಾ, ನೀರಜ್ ಶೇಖರ್, ಕಪಿಲ್ ಸಿಬಲ್, ಜಿ.ಕೆ.ವಾಸನ್ ಮತ್ತು ಸಂಜಯ್ ಯಾದವ್ ಸಮಿತಿಯ ಸದಸ್ಯರಾಗಿದ್ದಾರೆ.

ಶಿಕ್ಷಣ, ಮಹಿಳೆ, ಮಕ್ಕಳು, ಯುವ ಮತ್ತು ಕ್ರೀಡಾ ಸಮಿತಿಯ ಹೊಣೆಯನ್ನು ದಿಗ್ವಿಜಯ್​ ಸಿಂಗ್​ಗೆ ನೀಡಲಾಗಿದೆ. ಕೃಷಿ, ಪಶು ಸಂಗೋಪನೆ, ಆಹಾರ ಸಂಸ್ಕರಣೆ ಸಮಿತಿಯ ಜವಾಬ್ದಾರಿಯನ್ನು ಚರಂಜಿತ್​ ಸಿಂಗ್​ ಚನ್ನಿ ಅವರಿಗೆ ನೀಡಲಾಗಿದೆ. ಗ್ರಾಮೀಣ, ಪಂಚಾಯತ್​ ರಾಜ್​ ಸಮಿತಿಗೆ ಸಪ್ತಗಿರಿ ಶಂಕರ್​ ಉಲಕ ಮತ್ತು ವಿದೇಶಾಂಗ ವ್ಯವಹಾರಗಳ ಸಮಿತಿ ಮುಖ್ಯಸ್ಥರಾಗಿ ಶಶಿ ತರೂರು ಕಾರ್ಯ ನಿರ್ವಹಿಸಲಿದ್ದಾರೆ.

ಬಿಜೆಪಿಯ ರಾಧಾ ಮೋಹನ್ ಸಿಂಗ್ ರಕ್ಷಣಾ ಸಮಿತಿಯ ಮುಖ್ಯಸ್ಥರಾಗಿದ್ದು, ಭರ್ತೃಹರಿ ಮಹತಾಬ್ ಅವರು ಹಣಕಾಸು ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಅನುರಾಗ್ ಠಾಕೂರ್​ ಮತ್ತು ರಾಜೀವ್​ ಪ್ರತಾಪ್​ ರೂಬಿ ಅವರಿಗೆ ಕ್ರಮವಾಗಿ ಕಲ್ಲಿದಲು, ಗಣಿ ಮತ್ತು ಉಕ್ಕು ಹಾಗೂ ಜಲ ಸಂಪನ್ಮೂಲ ಸಮಿತಿ ನೀಡಲಾಗಿದೆ. ಬಿಜೆಪಿ ಸದಸ್ಯ ನಿಶಿಕಾಂತ್​ ದುಬೆ ಅವರಿಗೆ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ರಾಧಾ ಮೋಹನ್​ ದಾಸ್​ ಅಗರ್ವಾಲ್ ಗೃಹ ವ್ಯವಹಾರ ಸಮಿತಿ ಅಧ್ಯಕ್ಷರಾಗಿದ್ದು, ಟಿಎಂಸಿಯ ಡೊಲಾ ಸೇನ್​ ವಾಣಿಜ್ಯ ಸಮಿತಿ ಮುಖ್ಯಸ್ಥರಾಗಿದ್ದಾರೆ.

ಸಮಾಜವಾದಿ ಪಕ್ಷದ ರಾಮ್​ ಗೋಪಾಲ್​ ಯಾದವ್​​ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಿತಿ ಮುಖ್ಯಸ್ಥರಾದರೆ, ಡಿಎಂಕೆಯ ತಿರುಚಿ ಶಿವ ಕೈಗಾರಿಕಾ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಸಂವಹನ ಮತ್ತು ಐಟಿ ಸಮಿತಿ ಸದಸ್ಯರಾಗಿ ಸಮಾಜವಾದಿ ಪಕ್ಷದ ಜಯಾ ಬಚ್ಚನ್​, ಬಿಜೆಡಿಯ ಸುಶ್ಮಿತ್ ಪಾತ್ರ ಮತ್ತು ಕಾಂಗ್ರೆಸ್‌ನ ಕೆಟಿಎಸ್ ತುಳಸಿ, ಬಿಜೆಪಿ ಸಂಸದರಾದ ಅನಿಲ್ ಬಲೂನಿ, ಕಂಗನಾ ರನೌತ್ ಮತ್ತು ಪೂನಂ ಮತ್ತು ಟಿಎಂಸಿಯ ಮಹುವಾ ಮೊಯಿತ್ರಾ ಇರಲಿದ್ದಾರೆ.

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರನ್ನು ಯಾವುದೇ ಸಮಿತಿಯಲ್ಲಿ ಹೆಸರಿಸಲಾಗಿಲ್ಲ. ಬಿಜೆಪಿ ಮೈತ್ರಿಯ ಟಿಡಿಪಿ ಮತ್ತು ಜನತಾ ದಳ(ಯು) ಎನ್​ಸಿಪಿಯ ಸದಸ್ಯರು ಪ್ರತಿ ಸಮಿತಿಯಲ್ಲಿದ್ದಾರೆ.(ಐಎಎನ್​ಎಸ್​)

ದೇಶ

ಎಪ್ಸ್ಟೀನ್ ಫೈಲ್ಸ್‌ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ

ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್‌ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್‌ಗಟ್ಟಲೆ ಇಮೇಲ್‌ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ಮೂರು ಮಿಲಿಯನ್‌ ಇಮೇಲ್‌ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.

ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.

Continue Reading

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ದೇಶ

LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ

ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.

ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.

ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.

Continue Reading

Trending