Connect with us

ರಾಜಕೀಯ

ಯತ್ನಾಳ್​ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ಶಿವಾನಂದ ಪಾಟೀಲ್

Published

on

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರದಲ್ಲೇನಿದೆ: ”ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ತಮ್ಮ ವಿಜಯಪುರ ಮತ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ, ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ, ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ, ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ” ಎಂದು ಶಿವಾನಂದ ಪಾಟೀಲ್ ಸ್ಪೀಕರ್ ಅವರನ್ನು ಕೋರಿದ್ದಾರೆ.

ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಿವಾನಂದ ಪಾಟೀಲ್, ”ವಿಜಯಪುರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ನಿಂದನೆ ಮಾಡಿದ್ದರು. ನನ್ನ ಪೂರ್ವಜರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ವೈಯಕ್ತಿಕವಾಗಿ ತೇಜೋವಧೆ ಮಾಡಿದ್ದಾರೆ. ಇಂತಹ ಮಾತುಗಳನ್ನು ಸಹಿಸುವುದಕ್ಕೆ ಆಗುವುದಿಲ್ಲ. ಹಾಗಾಗಿ, ಸ್ಪೀಕರ್​​ಗೆ ರಾಜೀನಾಮೆ ಕೊಟ್ಟು ಬಂದಿದ್ದೇನೆ” ಎಂದು ಹೇಳಿದರು.

ಯತ್ನಾಳ್ ಸವಾಲನ್ನು ಸ್ವೀಕರಿಸಿದ್ದೇನೆ. ಯತ್ನಾಳ್ ಅವರು ರಾಜೀನಾಮೆ ನೀಡಲಿ, ನಾನು ವಿಜಯಪುರದಲ್ಲಿ ಚುನಾವಣೆ ಎದುರಿಸುತ್ತೇನೆ. ಇಲ್ಲವೇ, ನೀವು (ಯತ್ನಾಳ್) ಬಸವನಬಾಗೇವಾಡಿಗೆ ಬಂದು ಚುನಾವಣೆಯಲ್ಲಿ ಸ್ಪರ್ಧಿಸಿ” ಎಂದು ಸವಾಲು ಹಾಕಿದರು.

”ನಾನು ಬಸವನಬಾಗೇಡಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದೇನೆ. ನೀವು ರಾಜೀನಾಮೆ ನೀಡಿ ಎಂದು ಅವರು ಶುಕ್ರವಾರದವರೆಗೆ ನನಗೆ ಗಡುವು ಕೊಟ್ಟಿದ್ದರು. ಅದರಂತೆ ನಾನು ಸ್ಪೀಕರ್​​ಗೆ ರಾಜೀನಾಮೆ ನೀಡಿದ್ದೇನೆ. ಯತ್ನಾಳ್ ಅವರಿಗಿಂತ ಮುಂಚೆಯೇ ನನ್ನ ರಾಜೀನಾಮೆ ‌ಪಡೆಯಲು‌ ಮನವಿ ಮಾಡಿದ್ದೇನೆ” ಎಂದರು.

”ನಾನು ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಜೊತೆಗೆ ಮಾತನಾಡಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ. ಯತ್ನಾಳ್​​ಗೆ ಯಾವುದೇ ಗಡುವು ನೀಡಲ್ಲ. ಅವರು ರಾಜೀನಾಮೆ ಕೊಟ್ಟರೆ, ನನ್ನ ರಾಜೀನಾಮೆ ಅಂಗೀಕಾರ ಆಗುತ್ತದೆ. ನಾನು ಈ ಬಗ್ಗೆ ಸಿಎಂ ಗಮನಕ್ಕೆ ತರಲ್ಲ” ಎಂದು ಪ್ರತಿಕ್ರಿಯಿಸಿದರು.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

BJP ‘ಗೊಂದಲಕ್ಕೆ ಅವಕಾಶವೇ ಇಲ್ಲ’: ಸೆ.1ರ ಪಾದಯಾತ್ರೆ ಕುರಿತು ವಿಜಯೇಂದ್ರ ಮಹತ್ವದ ಹೇಳಿಕೆ

Published

on

ಬೆಂಗಳೂರು: BJP ರಾಜ್ಯ ರಾಜಕೀಯದಲ್ಲಿ ಮತ್ತೆ ಪಾದಯಾತ್ರೆಯ ಕಾವು ಹೆಚ್ಚಾಗಿದ್ದು, ಸೆಪ್ಟೆಂಬರ್‌ 1ರಿಂದ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ತಾವು ಸ್ವತಃ ಮಾತನಾಡಿದ್ದು, ರಾಷ್ಟ್ರೀಯ ನಾಯಕರ ಅನುಮತಿಯನ್ನೂ ಪಡೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ವಿಜಯೇಂದ್ರ, ಬಿ. ನಾಗೇಂದ್ರ ರಾಜೀನಾಮೆ ನೀಡಿದ ಬಳಿಕವೂ ಪಾದಯಾತ್ರೆ ಏಕೆ ಎಂಬ ಪ್ರಶ್ನೆ ಪಕ್ಷದ ಕೆಲವು ಮುಖಂಡರಲ್ಲಿ ಮೂಡಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಅನುಮತಿ ಪಡೆದಿರುವುದಾಗಿ ಹೇಳಿದರು.

ಕುಮಾರಸ್ವಾಮಿ ಅವರು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಪಾದಯಾತ್ರೆಯ ಉದ್ದೇಶವೇನು ಎಂಬುದು ಸ್ಪಷ್ಟವಾಗಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಪಾದಯಾತ್ರೆ ಕೇವಲ ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಸೀಮಿತವಾಗಿಲ್ಲ. ಸುಮಾರು 8ರಿಂದ 10 ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ಅವರೊಂದಿಗೆ ಮತ್ತೆ ಮಾತುಕತೆ ನಡೆಸುವುದಾಗಿ ತಿಳಿಸಿದ ಅವರು, ಈ ವಿಚಾರದಲ್ಲಿ ಅವರಿಗೆ ತಪ್ಪು ಕಲ್ಪನೆ ಉಂಟಾಗಿರಬಹುದು ಎಂದರು.

ಸೆ.1ರಿಂದ ಲಿಂಗಸುಗೂರಿನಿಂದ ಪಾದಯಾತ್ರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ, ಎಸ್‌ಇಪಿ-ಟಿಎಸ್‌ಪಿ ಅನುದಾನ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ, ಉತ್ತರ ಕರ್ನಾಟಕದ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಜಯೇಂದ್ರ ಹೇಳಿದರು.

ಸೆಪ್ಟೆಂಬರ್‌ 1ರಂದು ಲಿಂಗಸುಗೂರಿನಿಂದ ಪಾದಯಾತ್ರೆ ಆರಂಭವಾಗಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದುರ್ಬಳಕೆಯಾಗಿದೆ ಎನ್ನಲಾದ ₹185 ಕೋಟಿ ಹಣವನ್ನು ಮರಳಿ ನಿಗಮಕ್ಕೆ ಜಮಾ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಅದೇ ರೀತಿ ಕೊಪ್ಪಳ ಭಾಗದಲ್ಲಿ ಸಮಾನಾಂತರ ಜಲಾಶಯ ನಿರ್ಮಾಣದ ವಿಚಾರವನ್ನು ಜಾರಿಗೊಳಿಸಬೇಕು ಮತ್ತು ರಾಜ್ಯದ 2.5 ಲಕ್ಷ ಯುವಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೆ.ಎನ್. ರಾಜಣ್ಣ ಅವರ ರಾಜೀನಾಮೆ ವಿಚಾರವನ್ನೂ ಪ್ರಸ್ತಾಪಿಸಿದ ವಿಜಯೇಂದ್ರ, ದಲಿತರ ಬಗ್ಗೆ ಕಾಂಗ್ರೆಸ್‌ ನಾಯಕರು ಮಾತನಾಡುವ ಮೊದಲು ತಮ್ಮ ಸರ್ಕಾರದ ಕ್ರಮಗಳನ್ನು ಪರಿಶೀಲಿಸಬೇಕು ಎಂದು ವಾಗ್ದಾಳಿ ನಡೆಸಿದರು.

ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆ ಕ್ರಮಕ್ಕೆ ಹಿನ್ನಡೆ ಉಂಟಾಗಿದೆ ಎಂದು ಆರೋಪಿಸಿದರು.

ಎಸ್‌ಇಪಿ ಮತ್ತು ಟಿಎಸ್‌ಪಿ ಹಣದ ಬಳಕೆ, ಬರಗಾಲ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಕೆಪಿಎಸ್‌ಸಿ ಅಕ್ರಮದ ಬಗ್ಗೆಯೂ ಪ್ರಸ್ತಾಪ

ಕೆಪಿಎಸ್‌ಸಿ ಅಕ್ರಮ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ತನಿಖೆಗೆ ಹಾಜರಾಗಿರುವ ವಿಚಾರದ ಬಗ್ಗೆಯೂ ವಿಜಯೇಂದ್ರ ಪ್ರತಿಕ್ರಿಯಿಸಿದರು. ಪ್ರಕರಣದ ತನಿಖೆ ಮುಂದುವರಿಯಲಿ ಮತ್ತು ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದರು.

ಯಾರೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಅಕ್ರಮದಲ್ಲಿ ಪಾತ್ರವಿದ್ದರೆ ಸತ್ಯ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು. ಈ ಮೂಲಕ ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿಚಾರವನ್ನೂ ಬಿಜೆಪಿ ತನ್ನ ಪಾದಯಾತ್ರೆಯಲ್ಲಿ ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

Continue Reading

ಬೆಂಗಳೂರು

KPSC ಅಕ್ರಮಕ್ಕೆ ಬಿಜೆಪಿ ಸರ್ಕಾರವೇ ಕಾರಣ? ಜ್ಞಾನೇಂದ್ರ ಕುಮಾರ್ ನೇಮಕದ ಬಗ್ಗೆ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ

Published

on

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷಾ ನಿಯಂತ್ರಕರಾಗಿ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ನೇಮಕ ಮಾಡಿದ್ದು ಬಿಜೆಪಿ ಸರ್ಕಾರವೇ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, KPSC ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಜ್ಞಾನೇಂದ್ರ ಕುಮಾರ್ ನೇಮಕದ ಬಗ್ಗೆ ಆರೋಪ

ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರ ಪಾತ್ರದ ಕುರಿತು ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಅವರ ನೇಮಕದ ವಿಚಾರವನ್ನು ಬಿ.ಕೆ. ಹರಿಪ್ರಸಾದ್ ಪ್ರಸ್ತಾಪಿಸಿದ್ದಾರೆ.

ಜ್ಞಾನೇಂದ್ರ ಕುಮಾರ್ ಅವರನ್ನು KPSCಗೆ ಕರೆತಂದು ಪರೀಕ್ಷಾ ನಿಯಂತ್ರಕರಂತಹ ಪ್ರಮುಖ ಹುದ್ದೆಗೆ ನೇಮಕ ಮಾಡಿದ್ದು ಬಿಜೆಪಿ ಆಡಳಿತಾವಧಿಯಲ್ಲಿ ಎಂದು ಅವರು ಆರೋಪಿಸಿದರು. ಹೀಗಾಗಿ ಈಗ KPSCಯಲ್ಲಿ ಉಂಟಾಗಿರುವ ಅಕ್ರಮ ಹಾಗೂ ಗೊಂದಲಗಳಿಗೆ ಕಾಂಗ್ರೆಸ್ ಸರ್ಕಾರವನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಹರಿಪ್ರಸಾದ್ ಹೇಳಿದರು.

ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಸ್ಪಷ್ಟನೆ ನೀಡಬೇಕು. ತಮ್ಮ ಅವಧಿಯ ವಿಚಾರಗಳನ್ನು ಮರೆಮಾಚಿ ಪ್ರಸ್ತುತ ಸರ್ಕಾರದ ವಿರುದ್ಧ ರಾಜಕೀಯ ಆರೋಪ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದರು.

KPSC ಅಕ್ರಮ ಪ್ರಕರಣದಲ್ಲಿ CID, ED ತನಿಖೆ

KPSC ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಪ್ರಕರಣದ ವಿವಿಧ ಆಯಾಮಗಳ ಕುರಿತು CID ಹಾಗೂ Enforcement Directorate (ED) ತನಿಖೆ ನಡೆಸುತ್ತಿವೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಅಧಿಕಾರಿಗಳ ಪಾತ್ರವೇನು ಎಂಬುದು ಸೇರಿದಂತೆ ಹಲವು ವಿಚಾರಗಳು ತನಿಖೆಯ ವ್ಯಾಪ್ತಿಯಲ್ಲಿವೆ. ಪ್ರಕರಣದ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ.

ವಿಚಾರಣೆಗೆ ಹಾಜರಾದ ಜ್ಞಾನೇಂದ್ರ ಕುಮಾರ್

ಇದೇ ಪ್ರಕರಣದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಸಂಪರ್ಕಕ್ಕೆ ಸಿಗದೆ ಇದ್ದಾರೆ ಎನ್ನಲಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ಇತ್ತೀಚೆಗೆ CID ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ತನಿಖಾ ಸಂಸ್ಥೆಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಮಾಹಿತಿ ಕಲೆಹಾಕುತ್ತಿವೆ. ಅಧಿಕಾರಿಗಳ ಪಾತ್ರ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ ಎಂಬುದನ್ನು ತನಿಖೆಯ ಮೂಲಕ ಪರಿಶೀಲಿಸಲಾಗುತ್ತಿದೆ.

ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರ

KPSC ಅಕ್ರಮ ಪ್ರಕರಣ ಇದೀಗ ರಾಜಕೀಯವಾಗಿಯೂ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದರೆ, ಕಾಂಗ್ರೆಸ್ ನಾಯಕರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ನೇಮಕಾತಿ ಹಾಗೂ ಅಧಿಕಾರಿಗಳ ನೇಮಕವನ್ನು ಪ್ರಶ್ನಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಜ್ಞಾನೇಂದ್ರ ಕುಮಾರ್ ಅವರ ನೇಮಕ, KPSCಯಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಅಕ್ರಮ ಹಾಗೂ ತನಿಖಾ ಸಂಸ್ಥೆಗಳ ಮುಂದಿನ ಕ್ರಮಗಳು ಪ್ರಕರಣದ ಪ್ರಮುಖ ಅಂಶಗಳಾಗಿವೆ.

ಸದ್ಯ CID ಮತ್ತು ED ತನಿಖೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕವೇ ಆರೋಪಗಳ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ. KPSC ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Continue Reading

ಬೆಂಗಳೂರು

KPSC ರದ್ದು ಮಾಡುತ್ತೇನೆ ಎಂದಿದ್ದ ಪ್ರಿಯಾಂಕ್ ಖರ್ಗೆ ಈಗ ಏಕೆ ಸುಮ್ಮನಿದ್ದಾರೆ? ಹೆಚ್‌ಡಿಕೆ ಕಿಡಿ

Published

on

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ನಡೆಯುತ್ತಿರುವ ನೇಮಕಾತಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಪಿಎಸ್‌ಸಿ ಬಗ್ಗೆ ಸಾರ್ವಜನಿಕರಲ್ಲಿ ಅಸಹ್ಯಕರ ಭಾವನೆ ಮೂಡಿದ್ದು, ಇಂತಹ ಸಂಸ್ಥೆ ಅಗತ್ಯವಿದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ ಎಂದು ಅವರು ಹೇಳಿದ್ದಾರೆ.

ಕೆಪಿಎಸ್‌ಸಿ ಎಇಇ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್‌ಡಿ ಕುಮಾರಸ್ವಾಮಿ, ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಭವಿಷ್ಯದೊಂದಿಗೆ ಕೆಪಿಎಸ್‌ಸಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.

‘ಸಂಪೂರ್ಣ ಅಧಿಕಾರ ಸಿಕ್ಕರೆ KPSC ರದ್ದು ಮಾಡ್ತೀನಿ ಎಂದಿದ್ರಲ್ಲಾ’

ಪ್ರಿಯಾಂಕ್ ಖರ್ಗೆ ಅವರು ಹಿಂದೆ ಸಂಪೂರ್ಣ ಅಧಿಕಾರ ದೊರೆತರೆ ಕೆಪಿಎಸ್‌ಸಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು. ಇದೀಗ ಅಧಿಕಾರದಲ್ಲಿರುವ ಅವರು ಕೆಪಿಎಸ್‌ಸಿ ವಿರುದ್ಧ ಏನು ಕ್ರಮ ಕೈಗೊಂಡಿದ್ದಾರೆ ಎಂದು ಹೆಚ್‌ಡಿಕೆ ಪ್ರಶ್ನಿಸಿದರು.

ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಆದರೆ ಕೆಪಿಎಸ್‌ಸಿ ಪರಿಸ್ಥಿತಿ ಹಂತಹಂತವಾಗಿ ಹದಗೆಡುತ್ತಿದೆ. ಇಂತಹ ಸಂಸ್ಥೆಯನ್ನು ಹೇಗೆ ಸರಿಪಡಿಸುತ್ತೀರಿ ಎಂದು ಸರ್ಕಾರವನ್ನು ಪ್ರಶ್ನಿಸಿದರು.

ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾನೂನುಬಾಹಿರವಾಗಿ ಯಾರಿಗೂ ಸೂಚನೆ ನೀಡಿಲ್ಲ. ತಮ್ಮ ಸಂಬಂಧಿಕರು ಅಥವಾ ಆಪ್ತರಿಗೆ ಅನುಕೂಲವಾಗುವಂತೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನ ನೀಡಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು. 2006ರಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾಗಿ ಅವರು ಹೇಳಿದರು.

ಎಇಇ ನೇಮಕಾತಿ ಕುರಿತು ಗಂಭೀರ ಆರೋಪ

ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ನೇಮಕಾತಿ ಪ್ರಕ್ರಿಯೆ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ ಹೆಚ್‌ಡಿಕೆ, ಪ್ರಶ್ನೆಪತ್ರಿಕೆ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದರು. ಪ್ರಶ್ನೆಪತ್ರಿಕೆಯನ್ನು ರೆಸಾರ್ಟ್‌ಗೆ ತೆಗೆದುಕೊಂಡು ಹೋಗಲಾಗಿದೆ ಎಂಬ ಆರೋಪದ ಬಗ್ಗೆ ಸರ್ಕಾರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಒಎಂಆರ್‌ ಶೀಟ್‌ ತಿದ್ದಲಾಗಿದೆ, ಸಿಸಿಟಿವಿ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಹಾಗೂ ದೃಶ್ಯಾವಳಿಗಳಿಗೆ ಸಂಬಂಧಿಸಿದಂತೆ ಹಲವು ಅನುಮಾನಗಳಿವೆ ಎಂದು ಅವರು ಆರೋಪಿಸಿದರು. ಈ ವಿಚಾರದಲ್ಲಿ ಸರ್ಕಾರ ನ್ಯಾಯಾಲಯದ ಮುಂದೆ ತನ್ನ ನಿಲುವನ್ನು ಸ್ಪಷ್ಟವಾಗಿ ಮಂಡಿಸಬೇಕಿತ್ತು ಎಂದರು.

‘ಯುವಕರಿಗೆ ಎಷ್ಟು ಉದ್ಯೋಗ ಕೊಟ್ಟಿದ್ದೀರಿ?’

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಎಷ್ಟು ಉದ್ಯೋಗಗಳನ್ನು ನೀಡಲಾಗಿದೆ ಎಂಬುದನ್ನು ಸರ್ಕಾರ ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂದು ಆರೋಪಿಸಿದ ಅವರು, ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಸಿಗದೆ ಕಡಿಮೆ ಅಂಕ ಪಡೆದವರಿಗೆ ಉತ್ತಮ ರ‍್ಯಾಂಕ್ ದೊರೆತಿದೆ ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸಬೇಕು ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳು ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಣ ನೀಡಿದರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಅವರು ಆರೋಪಿಸಿದರು.

ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ

ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ ಹಾಗೂ ಕಂಟ್ರೋಲರ್‌ಗಳ ಅಧಿಕಾರ ಮತ್ತು ಜವಾಬ್ದಾರಿಗಳ ಬಗ್ಗೆಯೂ ಹೆಚ್‌ಡಿಕೆ ಪ್ರಶ್ನೆಗಳನ್ನು ಎತ್ತಿದರು. ನೇಮಕಾತಿ ಅಕ್ರಮಗಳ ಆರೋಪ ಕೇಳಿಬಂದರೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಎಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು.

ಕೆಪಿಎಸ್‌ಸಿ ಅಕ್ರಮಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ ಅವರು, ಉದ್ಯೋಗಾಕಾಂಕ್ಷಿಗಳ ಹಿತ ಕಾಪಾಡಲು ಪಾರದರ್ಶಕ ನೇಮಕಾತಿ ವ್ಯವಸ್ಥೆ ರೂಪಿಸಬೇಕು ಎಂದು ಒತ್ತಾಯಿಸಿದರು.

‘ಬರೀ ಹೇಳಿಕೆ ಕೊಡಬೇಡಿ, ಪ್ರಾಮಾಣಿಕವಾಗಿ ಕೆಲಸ ಮಾಡಿ. ಕೆಪಿಎಸ್‌ಸಿ ಯಾವಾಗ ಸರಿಪಡಿಸುತ್ತೀರಿ ಎಂಬುದನ್ನು ಜನರಿಗೆ ತಿಳಿಸಿ’ ಎಂದು ಸರ್ಕಾರದ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Continue Reading

Trending