ದೇಶ
ನೈಟ್ ಬಸ್ಗಳಲ್ಲಿ ಅಗ್ನಿ ದುರಂತ ತಡೆಗೆ ಕೆಎಸ್ಆರ್ಟಿಸಿ ಮಹತ್ವದ ಕ್ರಮ: ಅಂಬಾರಿ, ಐರಾವತ ಬಸ್ಗಳಿಗೆ ಅಡಾಸ್ ಸಿಸ್ಟಮ್
ಬೆಂಗಳೂರು, ಜ.02: ಇತ್ತೀಚಿನ ದಿನಗಳಲ್ಲಿ ನೈಟ್ ಸರ್ವಿಸ್ ಖಾಸಗಿ ಬಸ್ಗಳಲ್ಲಿ ಸಂಭವಿಸಿದ ಅಗ್ನಿ ದುರಂತಗಳು ಅಮಾಯಕ ಪ್ರಯಾಣಿಕರ ಜೀವ ಹರಣ ಮಾಡಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೆಎಸ್ಆರ್ಟಿಸಿ (KSRTC), ಅತ್ಯಾಧುನಿಕ ಅಡಾಸ್ (ADAS) ಸುರಕ್ಷತಾ ವ್ಯವಸ್ಥೆ ಅಳವಡಿಕೆಗೆ ಮುಂದಾಗಿದೆ. ಮೊದಲ ಹಂತದಲ್ಲಿ ಅಂಬಾರಿ ಉತ್ಸವ ಹಾಗೂ ಅಂಬಾರಿ 2.0 ಎಸಿ ಸ್ಲೀಪರ್ ಬಸ್ಗಳಲ್ಲಿ ಈ ನೂತನ ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ.
ಅಂಬಾರಿ ಉತ್ಸವ ಬಸ್ಗಳಲ್ಲಿ ಡ್ರೈವರ್ ಸೀಟ್ ಬಳಿ ಡ್ಯಾಶ್ ಕ್ಯಾಮ್ ಅಳವಡಿಸಲಾಗಿದ್ದು, ಅಪಘಾತ ಅಥವಾ ಅವಘಡಗಳ ಕಾರಣ ಪತ್ತೆಹಚ್ಚಲು ಇದು ಸಹಾಯಕವಾಗಲಿದೆ. ಅಗ್ನಿ ಅವಘಡ ಸಂಭವಿಸಿದರೆ ಪ್ರಯಾಣಿಕರಿಗೆ ತಕ್ಷಣ ಮಾಹಿತಿ ನೀಡಲು ಅನೌನ್ಸರ್ ವ್ಯವಸ್ಥೆ ಅಳವಡಿಸಲಾಗಿದೆ. ಇಂಜಿನ್ ಕಂಪಾರ್ಟ್ಮೆಂಟ್ನಲ್ಲಿ ಫೈರ್ ಡಿಟೆಕ್ಷನ್ ಅಂಡ್ ಸಪ್ರೆಶನ್ ಸಿಸ್ಟಮ್ (FDSS) ಅಳವಡಿಸಿದ್ದು, ಬೆಂಕಿ ಕಾಣಿಸಿಕೊಂಡರೆ 15 ನಾಜಲ್ಗಳಿಂದ ಸ್ವಯಂಚಾಲಿತವಾಗಿ ಫೋಮ್ ಸ್ಪ್ರೇ ಆಗುತ್ತದೆ.
ಸ್ವಯಂಚಾಲಿತ ವ್ಯವಸ್ಥೆ ಕಾರ್ಯನಿರ್ವಹಿಸದಿದ್ದರೆ ಡ್ರೈವರ್ ಮುಂಭಾಗದ ಡಿಸ್ಪ್ಲೇಯಲ್ಲಿರುವ ಬಟನ್ ಒತ್ತುವ ಮೂಲಕ ಫೋಮ್ ಸ್ಪ್ರೇ ಸಕ್ರಿಯಗೊಳಿಸಬಹುದು. ಇದಕ್ಕಾಗಿ ಬಸ್ ಹಿಂಭಾಗದಲ್ಲಿ 4 ಕೆಜಿಯ ಫೋಮ್ ಸಿಲಿಂಡರ್ ಅಳವಡಿಸಲಾಗಿದೆ. ಬಸ್ ಒಳಭಾಗದಲ್ಲಿ ಮುಂಭಾಗ ಮತ್ತು ಹಿಂಭಾಗದಲ್ಲಿ ತಲಾ 4 ಕೆಜಿಯ ಎರಡು ಫೈರ್ ಎಕ್ಸ್ಟಿಂಗ್ವಿಷರ್ಗಳನ್ನು ಅಳವಡಿಸಲಾಗಿದೆ.
ತುರ್ತು ಸಂದರ್ಭಗಳಲ್ಲಿ ತಪ್ಪಿಸಿಕೊಳ್ಳಲು ಡ್ರೈವರ್ ಸೀಟ್ ಹಿಂಭಾಗ ಹಾಗೂ ಪ್ರತಿಯೊಂದು ಬರ್ತ್ ಸೀಟ್ ಬಳಿ ಗ್ಲಾಸ್ ಒಡೆಯುವ ಹ್ಯಾಮರ್ಗಳನ್ನು ಇಡಲಾಗಿದೆ. ಜೊತೆಗೆ ಡ್ರೈವರ್ ಮುಂಭಾಗದಲ್ಲಿ ಪ್ಯಾನಿಕ್ ಬಟನ್ ಅಳವಡಿಸಲಾಗಿದ್ದು, ಅದನ್ನು ಒತ್ತಿದಾಗ ಶಬ್ದದ ಮೂಲಕ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗುತ್ತದೆ. ಬಲಭಾಗದ ಮೂರನೇ ಬರ್ತ್ನಲ್ಲಿ ಎಮರ್ಜೆನ್ಸಿ ಎಕ್ಸಿಟ್ ಡೋರ್ ಅಳವಡಿಸಿದ್ದು, ಈ ಸೀಟ್ ಯಾರಿಗೂ ಬುಕ್ ಮಾಡುವುದಿಲ್ಲ.
ಕುಡಿದು ಬಂದರೆ ಬಸ್ ಸ್ಟಾರ್ಟ್ ಆಗಲ್ಲ
ದೇಶದಲ್ಲೇ ಮೊದಲ ಬಾರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಅಡಾಸ್ ಸಿಸ್ಟಮ್ ಅಳವಡಿಸಲಾಗಿದ್ದು, ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ನಿದ್ರೆಗೆ ಜಾರುವುದು ಅಥವಾ ಅನಾರೋಗ್ಯದ ಲಕ್ಷಣಗಳು ಕಂಡುಬಂದರೆ ಕೋಲಿಷನ್ ವಾರ್ನಿಂಗ್ ನೀಡುತ್ತದೆ. ಮೊದಲು ಬೀಪ್ ಸೌಂಡ್, ನಂತರ ಕ್ರಿಟಿಕಲ್ ವಾರ್ನಿಂಗ್ ನೀಡಿ ವಾಹನದ ವೇಗವನ್ನು ಕಡಿಮೆ ಮಾಡುತ್ತದೆ. ಡ್ರೈವರ್ ಕುಡಿದು ಬಂದಿದ್ದರೆ ಬಸ್ ಸ್ಟಾರ್ಟ್ ಆಗುವುದೇ ಇಲ್ಲ.
ಐರಾವತ ಬಸ್ಗಳಲ್ಲಿ ಹೆಚ್ಚುವರಿ ಸುರಕ್ಷತೆ
ಐರಾವತ ಬಸ್ಗಳಲ್ಲಿ ಪ್ರಯಾಣಿಕರ ಸೀಟ್ ಬಳಿ 30 ಸ್ಪ್ರಿಂಕ್ಲರ್ ನಾಜಲ್ ಅಳವಡಿಸಿದ್ದು, ಅಗ್ನಿ ಅವಘಡದ ವೇಳೆ ಸ್ವಯಂಚಾಲಿತವಾಗಿ ನೀರು ಸಿಂಪಡಣೆ ಆಗುತ್ತದೆ. ಇದಕ್ಕಾಗಿ ಲಗೇಜ್ ಕಂಪಾರ್ಟ್ಮೆಂಟ್ ಬಳಿ 170 ಲೀಟರ್ ಸಾಮರ್ಥ್ಯದ ಎರಡು ಸ್ಟೇನ್ಲೆಸ್ ಸ್ಟೀಲ್ ಟ್ಯಾಂಕರ್ಗಳನ್ನು ಅಳವಡಿಸಲಾಗಿದೆ. ಬಸ್ ಹಿಂಬದಿಯಲ್ಲಿ ಎಮರ್ಜೆನ್ಸಿ ಎಕ್ಸಿಟ್ ಡೋರ್ ಹಾಗೂ ಸ್ಟೀಲ್ ಲ್ಯಾಡರ್ ಅಳವಡಿಸಿದ್ದು, ಪ್ರಯಾಣಿಕರು ಸುರಕ್ಷಿತವಾಗಿ ಇಳಿಯಬಹುದು ಎಂದು ಕೆಎಸ್ಆರ್ಟಿಸಿ ಡಿ.ಸಿ ನಾಗರಾಜ್ ಮೂರ್ತಿ ತಿಳಿಸಿದ್ದಾರೆ.
ದೇಶ
ಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್ಗಟ್ಟಲೆ ಇಮೇಲ್ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.
ಮೂರು ಮಿಲಿಯನ್ ಇಮೇಲ್ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.
ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.
ಕ್ರೀಡೆ
JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್ಬಾಲ್ ಹಬ್ಬ
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.
ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.
ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.
ಮೂರನೇ ಪಂದ್ಯದಲ್ಲಿ ಎಸ್ಆರ್ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್ಪಿಎಸ್ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.
ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.
ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.
ಆರನೇ ಪಂದ್ಯದಲ್ಲಿ ಎಲ್ಎನ್ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.
ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.
ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ದೇಶ
LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.
ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.
ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.
-
ದೇಶ7 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ14 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ13 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ6 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ14 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ದೇಶ14 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ಕ್ರೀಡೆ7 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ6 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
