Connect with us

ದೇಶ

ಉಚಿತ ಗರ್ಭಕಂಠ ಕ್ಯಾನ್ಸರ್ ತಪಾಸಣೆ ಅಭಿಯಾನ: 5 ಸಾವಿರ ಮಹಿಳೆಯರಿಗೆ ಸೇವೆ

ಬೆಂಗಳೂರು, ಫೆಬ್ರವರಿ 6: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದ ಆಶ್ರಯದಲ್ಲಿ ಬೆಂಗಳೂರಿನ ಗಾಂಧಿನಗರ ಶಾಖೆಯ ವತಿಯಿಂದ ಉಚಿತ ಗರ್ಭಕಂಠ (ಸರ್ವೈಕಲ್) ಕ್ಯಾನ್ಸರ್ ತಪಾಸಣೆ ಹಾಗೂ ಚಿಕಿತ್ಸೆ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಈ ಅಭಿಯಾನದ ಮೂಲಕ ಸುಮಾರು 5 ಸಾವಿರ ಮಹಿಳೆಯರಿಗೆ ಉಚಿತ ತಪಾಸಣೆ ನಡೆಸುವ ಗುರಿ ಹೊಂದಲಾಗಿದೆ.

ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದ ಲಕ್ಷ್ಮೀ ಬೋಹ್ರಾ ಅವರು ಮಾತನಾಡಿ, 21 ರಿಂದ 65 ವರ್ಷದ ವಯೋಮಿತಿಯ ಮಹಿಳೆಯರಿಗೆ ಈ ಅಭಿಯಾನವನ್ನು ಆಯೋಜಿಸಲಾಗಿದ್ದು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಉಚಿತ ಸೇವೆ ಒದಗಿಸಲಾಗುತ್ತಿದೆ ಎಂದರು. ತಪಾಸಣೆಯಲ್ಲಿ ಕ್ಯಾನ್ಸರ್ ಪತ್ತೆಯಾದ ಮಹಿಳೆಯರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಹಾಗೂ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ನಟಿ ಸಂಜನಾ ಗುರ್ಲಾನಿ ಈ ಅಭಿಯಾನದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರು ನಗರದಲ್ಲಿ ಉದ್ಯೋಗದಲ್ಲಿರುವ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವಿಶೇಷ ಅಭಿಯಾನ ರೂಪಿಸಲಾಗಿದೆ ಎಂದು ಹೇಳಿದರು. ಒಟ್ಟು 20 ಆಸ್ಪತ್ರೆಗಳಲ್ಲಿ ಉಚಿತ ನೋಂದಣಿ ಮತ್ತು ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ತಪಾಸಣೆ ಸರಳ, ಸುರಕ್ಷಿತ ಹಾಗೂ ನೋವು ರಹಿತವಾಗಿದ್ದು, ಸ್ಥಳದಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಸರ್ವೈಕಲ್ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿದ ಕೇಂದ್ರ ಸರ್ಕಾರ ಲಸಿಕಾ ಅಭಿಯಾನಕ್ಕೂ ಚಾಲನೆ ನೀಡಿದೆ. ಈ ಹಿನ್ನೆಲೆಯಲ್ಲಿ ರೋಗ ತಡೆಗಟ್ಟುವ ಜೊತೆಗೆ ಸಮಸ್ಯೆ ಇರುವವರಿಗೆ ಸಮಯಕ್ಕೆ ಚಿಕಿತ್ಸೆ ದೊರಕಿಸಿಕೊಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಈ ಶಿಬಿರದಲ್ಲಿ ಕಾರ್ಯದರ್ಶಿ ವಿಜೇತ ಜೈನ್, ಸಂಚಾಲಕರಾದ ಇಂದು ಕಿನ್ವೇಸರ, ನೀತಾ ಗೋಡಿಯಾ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

ದೇಶ

LATEST NEWS “ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ”: ಅಮೆರಿಕಾ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ: ಅಮೆರಿಕದೊಂದಿಗೆ ನಡೆದ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯಲ್ಲಿ ಬಜೆಟ್ ಚರ್ಚೆಯ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಭಾರತ ಯಾರಿಂದ ತೈಲ ಖರೀದಿಸಬೇಕು ಎಂಬುದನ್ನೂ ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡು ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲವೇ?” ಎಂದು ಪ್ರಶ್ನಿಸಿದರು.

ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಂಡಿರುವುದು ಸರ್ಕಾರದ ಶರಣಾಗತಿ ರಾಜಕೀಯ ಎಂದು ಅವರು ಆರೋಪಿಸಿದರು. ಈ ಹಿಂದೆ ಭಾರತದ ಉತ್ಪನ್ನಗಳಿಗೆ 3% ಟ್ಯಾರಿಫ್ ಇದ್ದದ್ದು, ಈಗ ಅದನ್ನು 18%ಕ್ಕೆ ಏರಿಸಲಾಗಿದೆ. ಇದನ್ನು ಸರ್ಕಾರ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಟೀಕಿಸಿದರು.

ಟೆಕ್ಸ್‌ಟೈಲ್ ವಸ್ತುಗಳಿಗೆ ಭಾರತಕ್ಕೆ 18% ಟ್ಯಾರಿಫ್ ವಿಧಿಸಿರುವಾಗ, ಬಾಂಗ್ಲಾದೇಶಕ್ಕೆ 0% ಟ್ಯಾರಿಫ್ ನೀಡಲಾಗಿದೆ. “ಇದು ಭಾರತೀಯ ಕೈಗಾರಿಕೆಗಳಿಗೆ ಹಿನ್ನಡೆಯಾಗಿದೆ. ಟ್ರಂಪ್ ಮೋದಿ ಮೇಲೆ ಬಿಗಿಪಟ್ಟು ಹಾಕಿದ್ದಾರೆ” ಎಂದು ಹೇಳಿದರು.

ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ನಿಂದ 146 ಬಿಲಿಯನ್ ಡಾಲರ್‌ಗೆ ಏರಿಕೆಯಾಗಲಿದೆ ಎಂದು ಹೇಳಿದ ರಾಹುಲ್, “ಅಮೆರಿಕಕ್ಕೆ ಭಾರತದ ಬಗ್ಗೆ ಬದ್ಧತೆ ಇಲ್ಲ. ಆದರೆ ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿದೆ. ನಾವು ಮೂರ್ಖರಂತೆ ನಿಂತಿದ್ದೇವೆ” ಎಂದು ಕಿಡಿಕಾರಿದರು.

Continue Reading

ದೇಶ

BIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್‌, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ತಿಳಿಸಿದ್ದಾರೆ.

600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಷ್ಕರದ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್‌, ವಿಮಾ, ರಕ್ಷಣಾ, ರೈಲ್ವೆ, ಬಂದರು, ವಿಮಾನಯಾನ ಹಾಗೂ ವಿವಿಧ ಗುತ್ತಿಗೆ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ಸಹ ಪ್ರತಿಭಟನೆಗಳಲ್ಲಿ ಭಾಗಿಯಾಗಲಿವೆ.

ನವೆಂಬರ್ 2025ರಲ್ಲಿ ಸೂಚಿಸಲಾದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘಟನೆಗಳು ಮುಂದಿಟ್ಟಿವೆ. ಒಡಿಶಾ ಮತ್ತು ಅಸ್ಸಾಂ ರಾಜ್ಯಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶಾಲೆ-ಕಾಲೇಜುಗಳ ಮುಚ್ಚುವಿಕೆ ಕುರಿತು ಅಧಿಕೃತ ಘೋಷಣೆ ಇಲ್ಲದಿದ್ದರೂ, ಕೆಲವು ರಾಜ್ಯಗಳಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರ್ವಜನಿಕ ಸಾರಿಗೆ ಸೇವೆಗಳು ಅಸ್ತವ್ಯಸ್ತವಾಗಬಹುದು. ಆದರೆ ಹಾಲು, ಆಸ್ಪತ್ರೆ, ಮೆಡಿಕಲ್‌, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

Continue Reading

ದೇಶ

638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.

Continue Reading

Trending