CM ರಾಜಕೀಯ ಕಾರ್ಯದರ್ಶಿಯಾಗಿ A S Ponnanna ನೇಮಕ: ಕೊಡಗಿಗೆ ಮೊದಲ ಬಾರಿಗೆ ಮಹತ್ವದ ಹುದ್ದೆ | Hosa Suddi

ರಾಜ್ಯ

CM ರಾಜಕೀಯ ಕಾರ್ಯದರ್ಶಿಯಾಗಿ A S Ponnanna ನೇಮಕ: ಕೊಡಗಿಗೆ ಮೊದಲ ಬಾರಿಗೆ ಮಹತ್ವದ ಹುದ್ದೆ

Published

on

ಮಡಿಕೇರಿ: ವಿರಾಜಪೇಟೆ ಶಾಸಕ A.S.Pnnanna ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದು, ಕೊಡಗು ಜಿಲ್ಲೆಗೆ ಇದೇ ಮೊದಲ ಬಾರಿಗೆ ಈ ಮಹತ್ವದ ಹುದ್ದೆ ದೊರೆತಂತಾಗಿದೆ. ಕಾಂಗ್ರೆಸ್‌ನಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವ ಪೊನ್ನಣ್ಣ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಈ ನೇಮಕಾತಿ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎ.ಎಸ್. ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಸರ್ಕಾರ ಹಾಗೂ ಹಲವು ಸಚಿವರಿಗೆ ಎದುರಾದ ವಿವಿಧ ವಿಷಯಗಳಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಮೂಲಕ ಅವರು ‘ಟ್ರಬಲ್ ಶೂಟರ್’ ಎಂಬ ಹೆಗ್ಗಳಿಕೆಯನ್ನೂ ಗಳಿಸಿದ್ದರು ಎನ್ನಲಾಗಿದೆ.

ನಂತರ ಡಿ.ಕೆ. ಶಿವಕುಮಾರ್ ಆಡಳಿತದಲ್ಲಿ ಪೊನ್ನಣ್ಣ ಅವರಿಗೆ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ, ಈ ಹುದ್ದೆಯನ್ನು ಸ್ವೀಕರಿಸಿದರೆ ಸಕ್ರಿಯ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅವರು ಅಸಮಾಧಾನ ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ. ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂಬ ಅಭಿಪ್ರಾಯ ಅವರದ್ದಾಗಿತ್ತು.

ಶಿವಕುಮಾರ್ ಸಚಿವ ಸಂಪುಟದಲ್ಲಿ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಕಾಂಗ್ರೆಸ್ ವಲಯದಲ್ಲಿತ್ತು. ಆದರೆ ಅಂತಿಮ ಪಟ್ಟಿಯಲ್ಲಿ ಅವರ ಹೆಸರು ಇಲ್ಲದಿರುವುದು ಅಚ್ಚರಿಗೆ ಕಾರಣವಾಗಿತ್ತು. ಇದೀಗ ದೆಹಲಿ ಮಟ್ಟದಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ದೊರೆತಿರುವುದು ಅವರ ಬೆಂಬಲಿಗರಲ್ಲಿ ಸಂತಸ ಮೂಡಿಸಿದೆ.

ಹಿರಿಯ ರಾಜಕಾರಣಿ ಎ.ಕೆ. ಸುಬ್ಬಯ್ಯ ಅವರ ಪುತ್ರರಾಗಿರುವ ಪೊನ್ನಣ್ಣ, ಕೊಡಗಿನಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಸುಮಾರು 25 ವರ್ಷಗಳ ಬಳಿಕ ವಿರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ ಮಣಿಸಿ ಕಾಂಗ್ರೆಸ್ ಗೆಲುವು ಸಾಧಿಸುವಲ್ಲಿ ಅವರ ಶ್ರಮ ಪ್ರಮುಖವಾಗಿತ್ತು.

ಈಗ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿರುವ ಪೊನ್ನಣ್ಣ ಅವರು ತಮ್ಮ ಹೊಸ ಜವಾಬ್ದಾರಿಯೊಂದಿಗೆ ಕೊಡಗು ಜಿಲ್ಲೆಯ ರಾಜಕೀಯ ಹಾಗೂ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ನೀಡಲಿದ್ದಾರೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Trending

Exit mobile version