ರಾಜ್ಯ
NICE ROAD ಟೋಲ್ ವಿರುದ್ಧ HD Kumar Swamy ಕಿಡಿ; ಸರ್ಕಾರಕ್ಕೆ 10 ದಿನಗಳ ಗಡುವು
ಬೆಂಗಳೂರು, ಆ.8: BMIC ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠ ಜುಲೈ 29ರಂದು ನೀಡಿರುವ ತೀರ್ಪಿನ ಬಗ್ಗೆ ರಾಜ್ಯ ಸರ್ಕಾರ ಏಕೆ ಮೌನ ವಹಿಸಿದೆ? ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ HD Kumar Swamy ಪ್ರಶ್ನಿಸಿದ್ದಾರೆ. ಇದೇ ವೇಳೆ NICE ROAD ಯ ಟೋಲ್ ಸಂಗ್ರಹವನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಸರ್ಕಾರಕ್ಕೆ ಒಂದು ವಾರದಿಂದ ಹತ್ತು ದಿನಗಳವರೆಗೆ ಗಡುವು ನೀಡಲಾಗುವುದು ಎಂದು ತಿಳಿಸಿದರು.
ನೈಸ್ ಟೋಲ್ ಪರಿಷ್ಕರಣೆ ವಿರುದ್ಧ ಆಕ್ರೋಶ
ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದೆ ನೈಸ್ ಸಂಸ್ಥೆ ಟೋಲ್ ದರ ಪರಿಷ್ಕರಣೆ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಹೀಗಾಗಿ ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ರಸ್ತೆ ಬಳಕೆದಾರರು, ಬೆಂಗಳೂರಿನ ನಾಗರಿಕರು, ರೈತರು ಹಾಗೂ ಯುವಕರು ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.
BMIC ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಲಯ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ಹಿಂದೆ ಸದನ ಸಮಿತಿಯೂ ಯೋಜನೆ ಕುರಿತು CBI ತನಿಖೆ ನಡೆಸಬೇಕು ಎಂದು ಶಿಫಾರಸು ಮಾಡಿತ್ತು. ಆದರೂ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳದೆ ಮೌನ ವಹಿಸಿರುವುದು ಏಕೆ ಎಂದು ಅವರು ಪ್ರಶ್ನಿಸಿದರು.
20 ಸಾವಿರ ಎಕರೆ ಭೂಮಿ ಸ್ವಾಧೀನದ ಆರೋಪ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ BMIC ಯೋಜನೆಗೆ ಸಂಬಂಧಿಸಿದ ಮೂಲ ಒಪ್ಪಂದ ಮಾಡಿಕೊಳ್ಳಲಾಗಿತ್ತು. ನಂತರದ ಸರ್ಕಾರಗಳಲ್ಲಿ ಒಪ್ಪಂದದಲ್ಲಿ ಬದಲಾವಣೆಗಳಾಗಿವೆ ಎಂದು ಕುಮಾರಸ್ವಾಮಿ ಹೇಳಿದರು.
ಮೂಲ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿ ರೈತರಿಂದ ಸುಮಾರು 20 ಸಾವಿರ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದ ಅವರು, ರೈತರಿಗೆ ಭೂ ಪರಿಹಾರ ನೀಡುವ ವಿಚಾರದಲ್ಲಿಯೂ ಸಮಸ್ಯೆಗಳಿವೆ ಎಂದರು.
ಸುಮಾರು 150 ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ. ಮೂಲ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಮತ್ತು ಕಾನೂನುಬಾಹಿರವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂಬುದು ತಮ್ಮ ಆರೋಪ ಎಂದು ಕುಮಾರಸ್ವಾಮಿ ಹೇಳಿದರು.
ರೈತರ ಪರ ಹೋರಾಟದ ಕರೆ
ನೈಸ್ ಯೋಜನೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಹೊಸಕೆರೆಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳನ್ನು ತೆರವುಗೊಳಿಸಿ ಜನರನ್ನು ಒಕ್ಕಲೆಬ್ಬಿಸಲಾಗಿದೆ ಎಂದು ಹೇಳಿದರು.
ಸುಮಾರು 4 ಸಾವಿರ ಕುಟುಂಬಗಳಿಗೆ ಪರಿಹಾರ ನಿವೇಶನ ನೀಡಲಾಗಿಲ್ಲ ಎಂದು ಆರೋಪಿಸಿದ ಅವರು, ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಬಿಡದಿ ಟೌನ್‌ಶಿಪ್, BMIC ಅಧಿವೇಶನದಲ್ಲಿ ಪ್ರಸ್ತಾಪ
ಬಿಡದಿ ಟೌನ್‌ಶಿಪ್ ಹಾಗೂ BMIC ಯೋಜನೆಗೆ ಸಂಬಂಧಿಸಿದ ವಿಚಾರಗಳನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪ್ರಸ್ತಾಪಿಸಲಿವೆ ಎಂದು ಕುಮಾರಸ್ವಾಮಿ ತಿಳಿಸಿದರು.
BMIC ಯೋಜನೆಯ 111 ಕಿ.ಮೀ. ರಸ್ತೆ ಪೈಕಿ ಕೇವಲ 5 ಕಿ.ಮೀ. ರಸ್ತೆ ನಿರ್ಮಾಣವಾಗಿದೆ ಎಂಬ ಮಾಹಿತಿಯನ್ನು ಸರ್ಕಾರವೇ ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಅವರು ಹೇಳಿದರು.
ನೈಸ್ ಯೋಜನೆಗೆ ಸಂಬಂಧಿಸಿದ ಅಕ್ರಮಗಳು ಹಾಗೂ ಟೋಲ್ ಸಂಗ್ರಹದ ಬಗ್ಗೆ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕು. ರೈತರ ಹಿತಾಸಕ್ತಿ ಕಾಪಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು, ಸಂಸದ ಮಲ್ಲೇಶಬಾಬು, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನಪರಿಷತ್ ಸದಸ್ಯ ಬೋಜೇಗೌಡ ಹಾಗೂ ಮಾಜಿ ಶಾಸಕ ಅನ್ನದಾನಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.