ದೇಶ

ಕಮರ್ಷಿಯಲ್ ಸ್ಟ್ರೀಟ್ ಬಳಿ ಟ್ರಾಫಿಕ್ ತಲೆನೋವು: ತಿಂಗಳಾದರೂ ಮುಗಿಯದ ರಸ್ತೆ ಕಾಮಗಾರಿ

Published

on

ಬೆಂಗಳೂರು, ಜೂನ್ 15: ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಕಮರ್ಷಿಯಲ್ ಸ್ಟ್ರೀಟ್ ಸುತ್ತಮುತ್ತ ಸಂಚಾರ ದಟ್ಟಣೆ ದಿನೇದಿನೇ ಹೆಚ್ಚುತ್ತಿದ್ದು, ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜಕಾಲುವೆ ದುರಸ್ತಿ ಹಾಗೂ ಪೈಪ್‌ಲೈನ್ ಕಾಮಗಾರಿಗಾಗಿ ಮುಖ್ಯ ಸಂಪರ್ಕ ರಸ್ತೆಯನ್ನು ಬಂದ್ ಮಾಡಿರುವುದು ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.

ಎಂಜಿ ರಸ್ತೆ ಭಾಗದಿಂದ ಫ್ರೆಜರ್ ಟೌನ್ ಕಡೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ಮುಚ್ಚಲ್ಪಟ್ಟಿದ್ದು, ಕಾಮಗಾರಿ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ವೇಗವಾಗಿ ನಡೆಯದ ಕಾರಣ ಪ್ರತಿದಿನ ಸಾವಿರಾರು ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳೀಯರ ಪ್ರಕಾರ, ರಸ್ತೆ ಬಂದ್ ಆಗಿರುವುದರಿಂದ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಪರ್ಯಾಯ ಮಾರ್ಗಗಳ ಸಾಮರ್ಥ್ಯ ಕಡಿಮೆ ಇರುವುದರಿಂದ ಸಂಚಾರ ಸುಗಮವಾಗಿ ಸಾಗುತ್ತಿಲ್ಲ. ಶಾಲಾ ವಾಹನಗಳು, ಕಚೇರಿಗೆ ತೆರಳುವ ಉದ್ಯೋಗಿಗಳು ಹಾಗೂ ವ್ಯಾಪಾರಿಗಳು ವಿಶೇಷವಾಗಿ ತೊಂದರೆ ಅನುಭವಿಸುತ್ತಿದ್ದಾರೆ.

ಕಾಮಗಾರಿ ಆರಂಭವಾಗಿ ಹಲವು ತಿಂಗಳುಗಳಾಗಿದ್ದರೂ ರಸ್ತೆ ಬಂದ್ ಮಾಡಿ ತಿಂಗಳಾದರೂ ಯಾವುದೇ ಸ್ಪಷ್ಟ ಪ್ರಗತಿ ಕಾಣುತ್ತಿಲ್ಲ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಿಷ್ಠ ತಾತ್ಕಾಲಿಕ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸ್ಥಳೀಯ ನಿವಾಸಿಗಳು ಹಾಗೂ ವ್ಯಾಪಾರಸ್ಥರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರು ತಕ್ಷಣ ಮಧ್ಯಪ್ರವೇಶಿಸಿ ಕಾಮಗಾರಿಯನ್ನು ವೇಗಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕೆಂದು ಆಗ್ರಹಿಸಿದ್ದಾರೆ. ಕಮರ್ಷಿಯಲ್ ಸ್ಟ್ರೀಟ್‌ನಂತಹ ಪ್ರಮುಖ ಪ್ರದೇಶದಲ್ಲಿ ದೀರ್ಘಕಾಲ ರಸ್ತೆ ಬಂದ್ ಆಗಿರುವುದು ವ್ಯಾಪಾರ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

Trending

Exit mobile version