ಕೆಮ್ಮಿನ ಸಿರಪ್ ಅಕ್ರಮ ವ್ಯಾಪಾರ: ಸಮಾಜವಾದಿ ಪಕ್ಷದ ಸಂಪರ್ಕ, ಬುಲ್ಡೋಜರ್ ಕ್ರಮಕ್ಕೆ ಯೋಗಿ ಎಚ್ಚರಿಕೆ | Hosa Suddi

ದೇಶ

ಕೆಮ್ಮಿನ ಸಿರಪ್ ಅಕ್ರಮ ವ್ಯಾಪಾರ: ಸಮಾಜವಾದಿ ಪಕ್ಷದ ಸಂಪರ್ಕ, ಬುಲ್ಡೋಜರ್ ಕ್ರಮಕ್ಕೆ ಯೋಗಿ ಎಚ್ಚರಿಕೆ

Published

on

ಲಕ್ನೋ: ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿರುವ ಕೆಮ್ಮಿನ ಸಿರಪ್ ಅಕ್ರಮ ವ್ಯಾಪಾರ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಸಮಾಜವಾದಿ ಪಕ್ಷದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರ ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ಯಾರನ್ನೂ ಬಿಡುವುದಿಲ್ಲ, ಸಮಯ ಬಂದಾಗ ಬುಲ್ಡೋಜರ್ ಕಾರ್ಯಾಚರಣೆಗೂ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 78 ಆರೋಪಿಗಳನ್ನು ಬಂಧಿಸಲಾಗಿದ್ದು, ರಾಜ್ಯಾದ್ಯಂತ 134 ಕಡೆ ದಾಳಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಪ್ರಕರಣದ ಗಂಭೀರತೆಯನ್ನು ಗಮನಿಸಿ ಡಿಜಿಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಮಾಜವಾದಿ ಪಕ್ಷಕ್ಕೆ ಸಂಬಂಧಿಸಿದವರು ಈ ಅಕ್ರಮ ವ್ಯಾಪಾರದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಅವರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾನೂನು ಪ್ರಕಾರವೇ ಕ್ರಮ ಜರುಗಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇನ್ನೂ ಉತ್ತರ ಪ್ರದೇಶದಲ್ಲಿ ಕೆಮ್ಮಿನ ಸಿರಪ್ ಉತ್ಪಾದನೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಸಿರಪ್‌ಗಳನ್ನು ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಉತ್ಪಾದಿಸಿ, ಅಕ್ರಮವಾಗಿ ಉತ್ತರ ಪ್ರದೇಶಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೆ ನಕಲಿ ಬಿಲ್‌ಗಳ ಮೂಲಕ ಈ ಕೆಮ್ಮಿನ ಸಿರಪ್‌ಗಳನ್ನು ಬಾಂಗ್ಲಾದೇಶ ಮತ್ತು ನೇಪಾಳಕ್ಕೆ ಕಳ್ಳಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ತನಿಖೆಯಲ್ಲಿ ಲಭಿಸಿದೆ ಎಂದು ತಿಳಿಸಿದರು.

ಈ ಪ್ರಕರಣವು ರಾಜ್ಯದಲ್ಲಿ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ತೀವ್ರಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳು ಹಾಗೂ ಆಸ್ತಿಗಳ ಜಪ್ತಿ ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

Trending

Exit mobile version