ದೇಶ
ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿದ್ದು, ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸಚಿವರ ಹೆಸರುಗಳು ಅಧಿಕೃತವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರ ಕೈಗೊಂಡ ಬಳಿಕವೇ ಸಚಿವರ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವರ ಆಯ್ಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ನಾಯಕರು ಈಗಾಗಲೇ ಚರ್ಚೆ ನಡೆಸಿದ್ದಾರೆ. ರಾಜ್ಯ ನಾಯಕರ ಅಭಿಪ್ರಾಯವನ್ನು ತಿಳಿಸಲಾಗಿದ್ದು, ಅಂತಿಮ ತೀರ್ಮಾನವನ್ನು ದೆಹಲಿ ನಾಯಕತ್ವವೇ ಕೈಗೊಳ್ಳಲಿದೆ. ಬುಧವಾರ ಬೆಳಗ್ಗೆ ಅಥವಾ ಮಧ್ಯಾಹ್ನ ವೇಳೆಗೆ ಸಚಿವರ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಿದರು.
ಇದೇ ವೇಳೆ ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಆಹ್ವಾನಿತರಾದ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಗ್ಯಾರಂಟಿ ಸಮಿತಿ ಸದಸ್ಯರು ಭಾರತ ಜೋಡೋ ಭವನಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೀಳ್ಕೊಟ್ಟು ನಂತರ ಕಾರ್ಯಕರ್ತರನ್ನು ಭೇಟಿ ಮಾಡುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇತ್ತ ಲೋಕಭವನದಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ಭರ್ಜರಿ ಸಿದ್ಧತೆಗಳು ಪೂರ್ಣಗೊಂಡಿವೆ. ಗ್ಲಾಸ್ ಹೌಸ್‌ನಲ್ಲಿ ಸುಮಾರು 3,500 ಮಂದಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, 20 ಆಸನಗಳ ವಿಶೇಷ ವೇದಿಕೆ ಸಜ್ಜುಗೊಳಿಸಲಾಗಿದೆ. ಕಾರ್ಯಕ್ರಮ ವೀಕ್ಷಣೆಗೆ ಆರು ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದ್ದು, 2,000ಕ್ಕೂ ಹೆಚ್ಚು ವಿಐಪಿ ಪಾಸ್‌ಗಳನ್ನು ವಿತರಿಸಲಾಗಿದೆ.
ಸಮಾರಂಭಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿವಿಧ ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ನಾಯಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗಿದೆ. ಜೊತೆಗೆ ರೈತರು, ಪೌರ ಕಾರ್ಮಿಕರು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ಕಲಾವಿದರು, ಸಾಹಿತಿಗಳು, ಉದ್ಯಮಿಗಳು ಮತ್ತು ಯುವ ಮುಖಂಡರಿಗೂ ಆಹ್ವಾನ ನೀಡಲಾಗಿದೆ.
ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಘಟ್ಟವೆನಿಸಿರುವ ಈ ಪದಗ್ರಹಣ ಸಮಾರಂಭದತ್ತ ಈಗ ಎಲ್ಲರ ಗಮನ ಕೇಂದ್ರೀಕೃತವಾಗಿದೆ.