ದೇಶ
ಕುಮಾರಸ್ವಾಮಿ ಹೇಳಿಕೆಗೆ ಡಿಕೆಶಿ ಕಿಡಿ: ‘ಯಾರ ಜೊತೆ ಸಭೆ ಮಾಡಬೇಕೆಂದು ನನಗೆ ಗೊತ್ತು’
ಬೆಂಗಳೂರು: ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರಿಗಿಂತ ನನಗೆ ಹೆಚ್ಚಿನ ಆಡಳಿತ ಅನುಭವವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟವಾಗಿ ಹೇಳಿದ್ದಾರೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ಹೇಗೆ ನಡೆಸಬೇಕು ಎಂಬುದನ್ನು ಕಲಿಯುವ ಅಗತ್ಯ ನನಗಿಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಗೋವಿಂದರಾಜ್ ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸಂದರ್ಭದಲ್ಲಿ ಮಾತನಾಡಿದ ಡಿಕೆಶಿ, ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆ ಬಗ್ಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ತೀವ್ರ ಪ್ರತಿಕ್ರಿಯೆ ನೀಡಿದರು. ನಾನು ಹಲವು ವರ್ಷಗಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದರು.
ಜೆಡಿಎಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಹೊಂದಾಣಿಕೆಗೆ ವ್ಯಂಗ್ಯವಾಡಿದ ಅವರು, ಕುಮಾರಸ್ವಾಮಿ ಅವರ ನಡೆ ನೋಡಿದರೆ ಜೆಡಿಎಸ್ ಪಕ್ಷ ಶೀಘ್ರದಲ್ಲೇ ಬಿಜೆಪಿ ಜೊತೆ ವಿಲೀನವಾಗುವ ಸಾಧ್ಯತೆ ಇದೆ ಎಂದರು. ವಿಲೀನವಾದರೆ ನಮಗೂ ಒಳ್ಳೆಯದೇ. ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ನಾಯಕರೇ ಸ್ವಾಗತಿಸುತ್ತಿದ್ದಾರೆ ಎಂದು ಡಿಕೆಶಿ ಹೇಳಿದರು. ಕುಡಿಯುವ ನೀರು, ರಸ್ತೆ ನಿರ್ಮಾಣ, ಖಾತಾ ಪರಿವರ್ತನೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಸರ್ಕಾರ ಪರಿಹಾರ ನೀಡುತ್ತಿದೆ ಎಂದರು.
ಪಾಲಿಕೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಕರೆ ನೀಡಿದ ಡಿಕೆಶಿ, ಈ ವರ್ಷವನ್ನು ಚುನಾವಣಾ ವರ್ಷವೆಂದು ಸರ್ಕಾರ ಪರಿಗಣಿಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.