ದೇಶ
ಡಿಕೆಶಿ ಸಿಎಂ ಆಗುತ್ತಿದ್ದಂತೆ ಕಾಂಗ್ರೆಸ್ ಸಂಘಟನೆಯಲ್ಲಿ ಮಹಾ ಸರ್ಜರಿ!
ನವದೆಹಲಿ/ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿ ಹುದ್ದೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ಹೆಸರು ಬಹುತೇಕ ಅಂತಿಮಗೊಂಡಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನಕ್ಕೂ (KPCC President) ಹೊಸ ಮುಖದ ಆಯ್ಕೆ ಕುರಿತ ಚರ್ಚೆಗಳು ಜೋರಾಗಿವೆ.
ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ತಕ್ಷಣ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ತೆರವಾಗುವ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಹೆಸರು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಗಂಭೀರವಾಗಿ ಚರ್ಚೆಯಲ್ಲಿದ್ದು, ಬಹುತೇಕ ಅಂತಿಮ ಹಂತ ತಲುಪಿದೆ ಎಂದು ಪಕ್ಷದ ಆಪ್ತ ಮೂಲಗಳು ಮಾಹಿತಿ ನೀಡಿವೆ.
ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸತೀಶ್ ಜಾರಕಿಹೊಳಿ ಅವರೊಂದಿಗೆ ಮಾತುಕತೆ ನಡೆಸಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಆದರೆ, ಸತೀಶ್ ಜಾರಕಿಹೊಳಿ ಅವರು ಸಚಿವ ಸ್ಥಾನ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಮುಂದುವರಿಸಬೇಕು ಎಂಬ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ನಡೆದ ಮಾತುಕತೆಯಲ್ಲೂ ಇದೇ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರಂತೆ.
ಈ ಬೇಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡುತ್ತದೆಯೇ ಅಥವಾ ಪ್ರತ್ಯೇಕ ನಾಯಕರಿಗೆ ಸಂಘಟನಾ ಜವಾಬ್ದಾರಿ ನೀಡುತ್ತದೆಯೇ ಎಂಬುದು ಇದೀಗ ಕುತೂಹಲದ ವಿಷಯವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆಯೊಂದಿಗೆ ಕಾಂಗ್ರೆಸ್ ಸಂಘಟನೆಯಲ್ಲೂ ದೊಡ್ಡ ಮಟ್ಟದ ಮರುಸಂರಚನೆ ನಡೆಯುವ ಸಾಧ್ಯತೆಗಳು ಕಾಣಿಸುತ್ತಿವೆ.