ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ನಡೆಗೆ ಸಿಎಂ ಆಕ್ರೋಶ | Hosa Suddi

ದೇಶ

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ನಡೆಗೆ ಸಿಎಂ ಆಕ್ರೋಶ

Published

on

ಬೆಂಗಳೂರು: ಮೊದಲ ವರ್ಷದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಇದು ಜನಪ್ರತಿನಿಧಿಗಳ ಸದನಕ್ಕೆ ಮಾಡಿದ ಅವಮಾನ ಹಾಗೂ ಸಂಪೂರ್ಣ ಸಂವಿಧಾನ ಬಾಹಿರ ನಡೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಜಂಟಿ ಅಧಿವೇಶನಕ್ಕೆ ಆಗಮಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ ತೆರಳಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿ ವರ್ಷದ ಆರಂಭದಲ್ಲಿ ಹಾಗೂ ಹೊಸ ಸರ್ಕಾರ ರಚನೆಯಾದ ಸಂದರ್ಭದಲ್ಲಿ ನಡೆಯುವ ಜಂಟಿ ಅಧಿವೇಶನದಲ್ಲಿ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದುವುದು ರಾಜ್ಯಪಾಲರ ಸಂವಿಧಾನಾತ್ಮಕ ಕರ್ತವ್ಯ ಎಂದು ತಿಳಿಸಿದರು.

ಸಂವಿಧಾನದ ಕಲಂ 176 ಮತ್ತು 163ರ ಪ್ರಕಾರ, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನೇ ಓದಲೇಬೇಕು; ರಾಜ್ಯಪಾಲರು ಸ್ವಂತ ಭಾಷಣ ಓದುವಂತಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಬಾರಿ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು ಎಂದು ಹೇಳಿದರು.

MGNREGA ಕಾಯ್ದೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊಸದಾಗಿ ವಿಬಿಜಿರಾಮ್ ಜಿ (ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್) ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ರಾಜ್ಯ ಸರ್ಕಾರದ ತೀವ್ರ ವಿರೋಧವಿದೆ ಎಂದು ಸಿಎಂ ಹೇಳಿದರು. ಈ ಕಾಯ್ದೆಯಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗಿದೆ ಎಂದು ಆರೋಪಿಸಿದರು.

ಹಿಂದಿನ ಕಾಯ್ದೆಯಿಂದ ದಲಿತರು, ಮಹಿಳೆಯರು, ಸಣ್ಣ ರೈತರು ಹಾಗೂ ಬಡ ಕಾರ್ಮಿಕರಿಗೆ ಉದ್ಯೋಗದ ಖಾತ್ರಿ ದೊರಕುತ್ತಿತ್ತು. ಆದರೆ ಹೊಸ ಕಾಯ್ದೆಯಲ್ಲಿ ಈ ಹಕ್ಕುಗಳನ್ನು ಕಡಿತಗೊಳಿಸಲಾಗಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರ MGNREGA ಮರುಸ್ಥಾಪನೆ ಮತ್ತು ಹೊಸ ಕಾಯ್ದೆ ರದ್ದುಗೊಳಿಸುವ ಗುರಿಯೊಂದಿಗೆ ಹೋರಾಟ ಮುಂದುವರಿಸಲಿದೆ ಎಂದು ಘೋಷಿಸಿದರು.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಎಂಬ ಆರೋಪ ಮಾಡಿದರು. ಈ ವಿಚಾರದಲ್ಲಿ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಸಿಎಂ ತಿಳಿಸಿದರು.

Trending

Exit mobile version