ಹುಬ್ಬಳ್ಳಿ ವಿವಸ್ತ್ರ ಪ್ರಕರಣ: ಎನ್‌ಸಿಡಬ್ಲ್ಯು ಸ್ವಯಂಪ್ರೇರಿತ ದೂರು |

ಅಪರಾಧ

ಹುಬ್ಬಳ್ಳಿ ವಿವಸ್ತ್ರ ಪ್ರಕರಣ: ಎನ್‌ಸಿಡಬ್ಲ್ಯು ಸ್ವಯಂಪ್ರೇರಿತ ದೂರು

Published

on

ನವದೆಹಲಿ: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಆಯೋಗ, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮಹಿಳೆಯ ಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ನಡೆದ ಗಂಭೀರ ದಾಳಿ ಎಂದು ಅಭಿಪ್ರಾಯಪಟ್ಟಿದೆ.

ಆಯೋಗದ ಪ್ರಕಟಣೆಯ ಪ್ರಕಾರ, ಪಕ್ಷದ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಲಾಗಿದ್ದು, ಪೊಲೀಸ್ ಸಿಬ್ಬಂದಿ ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಲಾಗಿದೆ. ಇಂತಹ ಘಟನೆಗಳು ಲಿಂಗಾಧಾರಿತ ಹಿಂಸೆಯಿಂದ ಮಹಿಳೆಯರನ್ನು ರಕ್ಷಿಸುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಯೋಗ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ರಾಹತ್ಕರ್, “ಮಹಿಳೆಯ ಘನತೆ, ವೈಯಕ್ತಿಕ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳಿಗೆ ಧಕ್ಕೆ ತರುವ ಯಾವುದೇ ಘಟನೆಗಳನ್ನು ಸಹಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಆಯೋಗವು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದು, ಎಫ್‌ಐಆರ್ ದಾಖಲಿಸುವುದು, ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಪರಿಶೀಲನೆ, ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚಿಸಿದೆ. ತಪ್ಪಿತಸ್ಥರು ಸಾಬೀತಾದಲ್ಲಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಇಲಾಖಾ ಹಾಗೂ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ಜೊತೆಗೆ ಸಂತ್ರಸ್ತೆಗೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ ಮತ್ತು ಕಾನೂನುಬದ್ಧ ಪರಿಹಾರ ಒದಗಿಸಲು ಸೂಚಿಸಲಾಗಿದೆ.

ಪ್ರಕರಣದ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಐದು ದಿನಗಳೊಳಗೆ ವರದಿ ಸಲ್ಲಿಸಲು ಆಯೋಗ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಎನ್‌ಸಿಡಬ್ಲ್ಯು ಹಸ್ತಕ್ಷೇಪದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

Trending

Exit mobile version