ವಿದ್ಯುತ್ ಖಾಸಗೀಕರಣಕ್ಕೆ ಬ್ರೇಕ್: KERC ಸಭೆಗೆ ಮುನ್ನ ಡಿಕೆ ಶಿವಕುಮಾರ್ ಸ್ಪಷ್ಟ ಸಂದೇಶ! | Hosa Suddi

ದೇಶ

ವಿದ್ಯುತ್ ಖಾಸಗೀಕರಣಕ್ಕೆ ಬ್ರೇಕ್: KERC ಸಭೆಗೆ ಮುನ್ನ ಡಿಕೆ ಶಿವಕುಮಾರ್ ಸ್ಪಷ್ಟ ಸಂದೇಶ!

Published

on

ಬೆಂಗಳೂರು, ಜು. 3: ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ (Electricity Privatization) ರಾಜ್ಯ ಸರ್ಕಾರ ಸ್ಪಷ್ಟ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಸಭೆಯಲ್ಲಿ ಶುಕ್ರವಾರ (ಜು. 3) ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಾಟಾ ಸಂಸ್ಥೆ ವಿದ್ಯುತ್ ವಿತರಣಾ ಕ್ಷೇತ್ರದ ಖಾಸಗೀಕರಣಕ್ಕೆ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದೆ. ರಾಜ್ಯದ ಎಲ್ಲಾ ಎಸ್ಕಾಂ (ESCOM) ಸಂಸ್ಥೆಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣವನ್ನು ಒಪ್ಪುವುದಿಲ್ಲ ಎಂದು ಅವರು ಹೇಳಿದರು.

ಈ ಕುರಿತು ಶುಕ್ರವಾರ ನಡೆಯಲಿರುವ ಕೆಇಆರ್‌ಸಿ ಸಭೆಯಲ್ಲಿ ಸರ್ಕಾರದ ನಿಲುವಿನ ಆಧಾರದ ಮೇಲೆ ಅಂತಿಮ ಚರ್ಚೆ ಹಾಗೂ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಜನರ ಮನೆ ಬಾಗಿಲಿಗೆ ಸರ್ಕಾರ: ‘ಪ್ರಜಾಸೇವಾ’ ಇಲಾಖೆಗೆ ಚಾಲನೆ

ಇದೇ ವೇಳೆ, ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾಸೇವಾ’ ಇಲಾಖೆಯನ್ನು ಆರಂಭಿಸುತ್ತಿರುವುದಾಗಿ ಮುಖ್ಯಮಂತ್ರಿ ಘೋಷಿಸಿದರು.

ಈ ಇಲಾಖೆಯ ಜವಾಬ್ದಾರಿಯನ್ನು ಒಬ್ಬ ಸಚಿವರಿಗೆ ವಹಿಸಲಾಗುವುದು. ಪ್ರತಿ ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ ಕಡ್ಡಾಯವಾಗಿ ಎರಡು ದಿನ, ಎರಡು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಈ ಸಭೆಗಳಲ್ಲಿ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳ ಹಾಜರಾತಿ ಕಡ್ಡಾಯವಾಗಿರುತ್ತದೆ.

ಸಾರ್ವಜನಿಕರಿಗೆ ಸಭೆಯ ದಿನಾಂಕವನ್ನು ಮುಂಚಿತವಾಗಿಯೇ ತಿಳಿಸಲಾಗುವುದು. ಸಭೆಗೆ ಒಂದು ದಿನ ಮೊದಲು ಅರ್ಜಿಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಸಮಸ್ಯೆಗಳ ಪರಿಶೀಲನೆ ಹಾಗೂ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಸೇವೆ ನೀಡುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಇದರ ಜೊತೆಗೆ ತಾವು ಕೂಡ ಕೆಲವು ತಾಲ್ಲೂಕುಗಳಿಗೆ ಭೇಟಿ ನೀಡಿ ನೇರವಾಗಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

Trending

Exit mobile version