ರಾಜ್ಯ

ಮೋದಿ ಭಾವಚಿತ್ರ, Gyanesh Kumar ಪ್ರತಿಕೃತಿ ದಹನಕ್ಕೆ ಯತ್ನ: ಮಂಡ್ಯದಲ್ಲಿ ಬಿಗುವಿನ ವಾತಾವರಣ

Published

on

ಮಂಡ್ಯ: ಮುಖ್ಯ ಚುನಾವಣಾ ಆಯುಕ್ತ (CEC) Gyanesh Kumar ಅವರ ವಜಾ ಹಾಗೂ ಬಂಧನಕ್ಕೆ ಆಗ್ರಹಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ ನಡೆಯಿತು.

ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾದರು ಎನ್ನಲಾಗಿದೆ. ಇದನ್ನು ತಡೆಯಲು ಪೊಲೀಸರು ಮುಂದಾದಾಗ ಸ್ಥಳದಲ್ಲಿ ಮಾತಿನ ಚಕಮಕಿ ಉಂಟಾಯಿತು.

ಪ್ರತಿಭಟನಾಕಾರರಿಂದ ಮೋದಿ ಅವರ ಪೋಸ್ಟರ್ ಹಾಗೂ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಎರಡೂ ಕಡೆಯವರ ನಡುವೆ ಕೆಲಕಾಲ ವಾಗ್ವಾದ ಮತ್ತು ನೂಕಾಟ-ತಳ್ಳಾಟ ನಡೆದಿದೆ.

ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೆ, ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಮಾಡುತ್ತಿರುವ ಆರೋಪಗಳನ್ನು ಉಲ್ಲೇಖಿಸಿ ಬಿಜೆಪಿ ಹಾಗೂ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಇತ್ತೀಚೆಗೆ ಜ್ಞಾನೇಶ್ ಕುಮಾರ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿವೆ. ಸೆಪ್ಟೆಂಬರ್ 30ರಂದು ವಿರೋಧ ಪಕ್ಷಗಳ ಸಭೆ ನಡೆಯಲಿದ್ದು, ಜ್ಞಾನೇಶ್ ಕುಮಾರ್ ವಿರುದ್ಧ ಮುಂದಿನ ಕ್ರಮದ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಪ್ರತಿಭಟನೆಯಲ್ಲಿ ಪ್ರತಿಕೃತಿ ದಹನಕ್ಕೆ ಪೊಲೀಸರು ತಡೆ ಒಡ್ಡಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡರು.

ಇನ್ನು ಜ್ಞಾನೇಶ್ ಕುಮಾರ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಆಂತರಿಕ ಭಿನ್ನಾಭಿಪ್ರಾಯಗಳು ಸಾಂಸ್ಥಿಕ ಚರ್ಚೆಯ ಭಾಗವಾಗಿದ್ದು, ಇತ್ತೀಚಿನ ಆದೇಶಗಳು ಸಾಮೂಹಿಕವಾಗಿ ಕೈಗೊಳ್ಳಲಾಗಿದೆ ಎಂದು ಹೇಳಿದೆ.

Trending

Exit mobile version