ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧ: ಸಿಎಂ ಸಿದ್ದರಾಮಯ್ಯ | Hosa Suddi

ಬೆಂಗಳೂರು

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧ: ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ಸರ್ಕಾರಿ ಸ್ಥಳಗಳಲ್ಲಿ ನಿಷೇಧಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಸಿಎಂ ಪರಿಶೀಲಿಸಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಪತ್ರದಲ್ಲಿ, ಆರ್‌ಎಸ್‌ಎಸ್ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು, ಸಾರ್ವಜನಿಕ ಮೈದಾನಗಳು, ಉದ್ಯಾನವನಗಳು, ಮುಜರಾಯಿ ದೇವಾಲಯಗಳು ಹಾಗೂ ಪುರಾತತ್ವ ಇಲಾಖೆ ವ್ಯಾಪ್ತಿಯ ಸ್ಥಳಗಳಲ್ಲಿ ಶಾಖೆ, ಸಾಂಘಿಕ್ ಹಾಗೂ ಬೈಠಕ್‌ಗಳನ್ನು ನಡೆಸುತ್ತಿದೆ ಎಂದು ಆರೋಪಿಸಲಾಗಿದೆ. “ಜನರಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳನ್ನು ನಿಗ್ರಹಿಸುವುದು ಸರ್ಕಾರದ ಕರ್ತವ್ಯ. ಆರ್‌ಎಸ್‌ಎಸ್ ಚಟುವಟಿಕೆಗಳು ಮಕ್ಕಳಲ್ಲಿ ನಕಾರಾತ್ಮಕ ಆಲೋಚನೆ ಬೆಳೆಸುತ್ತಿವೆ,” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು “ಪರಿಶೀಲಿಸಿ ಕ್ರಮ ಕೈಗೊಳ್ಳಿ” ಎಂದು ಅಧಿಕಾರಿಗಳಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ನಿಷೇಧ ಹೇರಬಹುದಾದ ಸಾಧ್ಯತೆ ಮೂಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂತಹ ಚರ್ಚೆಗಳು ಹಲವು ಬಾರಿ ಮುಂದಾಗಿದೆ.

ಆರ್‌ಎಸ್‌ಎಸ್ ತನ್ನ 100ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪಥಸಂಚಲನಗಳನ್ನು ನಡೆಸುತ್ತಿರುವ ಸಂದರ್ಭದಲ್ಲಿ ಈ ಪತ್ರ ಬಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿಯು ಈ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು “ಆರ್‌ಎಸ್‌ಎಸ್ ದೇಶಭಕ್ತಿ ಸಂಘಟನೆಯಾಗಿದ್ದು, ಅದನ್ನು ನಿಷೇಧಿಸುವುದು ಸಂವಿಧಾನ ವಿರೋಧಿ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Trending

Exit mobile version