ರಾಜ್ಯ

Foot Path ತೆರವುಗೊಳಿಸಿ, ಇಲ್ಲದಿದ್ದರೆ ಕಾನೂನು ಕ್ರಮ: ವ್ಯಾಪಾರಿಗಳಿಗೆ ಎಚ್ಚರಿಕೆ

Published

on

ಶಿಡ್ಲಘಟ್ಟ: ನಗರದ Foot Path ಗಳು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕಾಗಿ ಮೀಸಲಾಗಿದ್ದು, ಅವುಗಳನ್ನು ವ್ಯಾಪಾರ ಅಥವಾ ಇತರೆ ಉದ್ದೇಶಗಳಿಗೆ ಅತಿಕ್ರಮಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ನಗರ ಪೊಲೀಸ್ ಠಾಣೆಯ ಪಿಎಸ್‌ಐ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಫುಟ್ಪಾತ್ ಹಾಗೂ ರಸ್ತೆ ಒತ್ತುವರಿಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ ಎಂದು ತಿಳಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳು ಮತ್ತು ವ್ಯಾಪಾರಿಗಳು ಫುಟ್ಪಾತ್‌ಗಳನ್ನು ಅತಿಕ್ರಮಿಸಿರುವ ಪರಿಣಾಮ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಪಘಾತಗಳ ಸಾಧ್ಯತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಒತ್ತುವರಿಗಳನ್ನು ತೆರವುಗೊಳಿಸಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

ಸೂಚನೆ ಪಾಲಿಸದವರ ವಿರುದ್ಧ ನಗರಸಭೆಯ ಸಹಯೋಗದೊಂದಿಗೆ ನೋಟಿಸ್ ಜಾರಿ, ದಂಡ ವಿಧಿಸುವುದರ ಜೊತೆಗೆ ಸಂಬಂಧಿತ ಕಾನೂನುಗಳಡಿ ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್‌ಐ ಸುನಿಲ್ ಕುಮಾರ್ ಸ್ಪಷ್ಟಪಡಿಸಿದರು.

ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒಂದು ದಿನ ರಸ್ತೆಯ ಎಡಭಾಗದಲ್ಲಿ ಹಾಗೂ ಮತ್ತೊಂದು ದಿನ ಬಲಭಾಗದಲ್ಲಿ ವಾಹನ ನಿಲುಗಡೆ ಮಾಡುವ ಕ್ರಮವನ್ನು ಜಾರಿಗೊಳಿಸಲಾಗುವುದು. ಈ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಿಡ್ಲಘಟ್ಟವನ್ನು ಒತ್ತುವರಿರಹಿತ ಹಾಗೂ ಸಂಚಾರ ಸ್ನೇಹಿ ನಗರವನ್ನಾಗಿ ರೂಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು ಎಂದು ಅವರು ಹೇಳಿದರು.

Trending

Exit mobile version