ರಾಜ್ಯ
ಮಂಡ್ಯ Dasara ಕ್ಕೆ ಸಿನಿ ಮೆರುಗು; ರವಿಚಂದ್ರನ್ಗೆ ಅಧಿಕೃತ ಆಹ್ವಾನ
ಮಂಡ್ಯ: ಐತಿಹಾಸಿಕ ಹಾಗೂ ಪಾರಂಪರಿಕ ಮಹತ್ವ ಹೊಂದಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ‘ಕ್ರೇಜಿಸ್ಟಾರ್’ ವಿ. ರವಿಚಂದ್ರನ್ ಅವರಿಗೆ ಮಂಡ್ಯ ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನ ನೀಡಿದೆ.
ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ಹಾಗೂ ಸೆಂಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಭಾನುವಾರ ಬೆಂಗಳೂರಿನಲ್ಲಿರುವ ರವಿಚಂದ್ರನ್ ಅವರ ನಿವಾಸಕ್ಕೆ ತೆರಳಿ ದಸರಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಟ ರವಿಚಂದ್ರನ್ ಅವರಿಗೆ ಶಲ್ಯ ಹೊದಿಸಿ, ಫಲಪುಷ್ಪ ನೀಡಿ ಗೌರವಪೂರ್ವಕವಾಗಿ ದಸರಾ ಮಹೋತ್ಸವಕ್ಕೆ ಆಹ್ವಾನಿಸಲಾಯಿತು. ಜಿಲ್ಲಾಡಳಿತದ ಆಹ್ವಾನವನ್ನು ರವಿಚಂದ್ರನ್ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 15ರಿಂದ 18ರವರೆಗೆ ಶ್ರೀರಂಗಪಟ್ಟಣ ದಸರಾ
ಈ ಬಾರಿಯ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಅಕ್ಟೋಬರ್ 15ರಿಂದ 18ರವರೆಗೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಹಾಗೂ ಕಲಾತ್ಮಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ.
ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಪ್ರತಿವರ್ಷ ಸಾವಿರಾರು ಪ್ರವಾಸಿಗರು ಹಾಗೂ ಸಾರ್ವಜನಿಕರನ್ನು ಆಕರ್ಷಿಸುತ್ತದೆ. ಈ ಹಿನ್ನೆಲೆಯಲ್ಲಿ ಉತ್ಸವದ ಸಂದರ್ಭದಲ್ಲಿ ಅಗತ್ಯ ಮೂಲಸೌಕರ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಲು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.
ಪ್ರತಿವರ್ಷದಂತೆ ಈ ಬಾರಿಯೂ ಸಾಂಪ್ರದಾಯಿಕ ವೈಭವ ಮತ್ತು ಕಲಾತ್ಮಕ ಕಾರ್ಯಕ್ರಮಗಳೊಂದಿಗೆ ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.