ತುಮಕೂರಿನಲ್ಲಿ ಲಾಕಪ್ ಡೆತ್ ಆರೋಪ: ಹುಳಿಯಾರು ಠಾಣೆ ಮುಂದೆ ಪ್ರತಿಭಟನೆ, ತನಿಖೆಗೆ ಆಗ್ರಹ | Hosa Suddi

ಅಪರಾಧ

ತುಮಕೂರಿನಲ್ಲಿ ಲಾಕಪ್ ಡೆತ್ ಆರೋಪ: ಹುಳಿಯಾರು ಠಾಣೆ ಮುಂದೆ ಪ್ರತಿಭಟನೆ, ತನಿಖೆಗೆ ಆಗ್ರಹ

Published

on

ತುಮಕೂರು: ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಶದಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇಸ್ಪೀಟ್ ಆಡುತ್ತಿದ್ದ ಆರೋಪದ ಮೇರೆಗೆ ವಶಕ್ಕೆ ಪಡೆದಿದ್ದ ಕಾಂತರಾಜು (45) ಮೃತಪಟ್ಟಿದ್ದು, ಪೊಲೀಸರ ವಿರುದ್ಧ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಳನಾಡು ಗ್ರಾಮದ ಕಾಂತರಾಜು ಸೇರಿದಂತೆ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಆದರೆ, ಕೆಲವೇ ಸಮಯದಲ್ಲಿ ಕಾಂತರಾಜು ಮೃತಪಟ್ಟಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕುಡಿಯಲು ನೀರು ನೀಡದೆ, ಬೆದರಿಕೆ ಹುಟ್ಟಿಸಿದ್ದರಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಹಿನ್ನೆಲೆ ನೂರಾರು ಗ್ರಾಮಸ್ಥರು ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿ, ಹುಳಿಯಾರು ಪೊಲೀಸ್ ಠಾಣೆಗೆ ಬೀಗ ಹಾಕಿ ಆಕ್ರೋಶ ಹೊರಹಾಕಿದರು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಯಿತು.

ಘಟನೆ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಮಾಜಿ ಸಚಿವ ಮಾಧುಸ್ವಾಮಿ ಹಾಗೂ ಮಾಜಿ ಶಾಸಕ ಕಿರಣ್ ಕುಮಾರ್ ಕೂಡ ಸ್ಥಳಕ್ಕೆ ಆಗಮಿಸಿ ಜನರನ್ನು ಸಮಾಧಾನಪಡಿಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ ಹೃದಯಾಘಾತದಿಂದ ಸಾವು ಸಂಭವಿಸಿರಬಹುದು ಎಂದು ಹೇಳಲಾಗುತ್ತಿದ್ದರೂ, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ನಿಖರ ಕಾರಣ ಬಹಿರಂಗವಾಗಲಿದೆ.

ಎಸ್‌ಪಿ ಅಶೋಕ್ ‘ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ. ಪೊಲೀಸರ ತಪ್ಪು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು. ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Trending

Exit mobile version