ದೇಶ
ಹೊಸ ವರ್ಷಾಚರಣೆ ಹಿನ್ನೆಲೆ ತುಮಕೂರಿನಲ್ಲಿ ನಿಷೇಧಾಜ್ಞೆ: ದೇವರಾಯನದುರ್ಗ ಸೇರಿ ಮೂರು ಬೆಟ್ಟಗಳಲ್ಲಿ ಸೆಕ್ಷನ್ 144 ಜಾರಿ
ತುಮಕೂರು: ಹೊಸ ವರ್ಷಾಚರಣೆ (New Year 2026) ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಪ್ರಮುಖ ಪ್ರವಾಸಿ ಹಾಗೂ ಧಾರ್ಮಿಕ ತಾಣಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದೇವರಾಯನದುರ್ಗ, ನಾಮದ ಚಿಲುಮೆ ಹಾಗೂ ಮಂದಾರಗಿರಿ ಬೆಟ್ಟ ಪ್ರದೇಶಗಳಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ.
ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 8 ಗಂಟೆವರೆಗೆ ಹಾಗೂ ಜನವರಿ 1ರ ಸಂಜೆ 6 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಹೊಸ ವರ್ಷದ ಪ್ರಯುಕ್ತ ದೇವಸ್ಥಾನಗಳಿಗೆ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ಹಗಲು ಹೊತ್ತಿನಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶವಾಗಿರುವ ಕಾರಣ, ಹೊಸ ವರ್ಷಾಚರಣೆಯ ನೆಪದಲ್ಲಿ ಮೋಜು–ಮಸ್ತಿ, ಮದ್ಯಪಾನ ಹಾಗೂ ಅಶಾಂತಿ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪರಿಸರ ರಕ್ಷಣೆ ಹಾಗೂ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ನಡುವೆ ಹೊಸ ವರ್ಷ ಸಮೀಪಿಸುತ್ತಿದ್ದಂತೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಮಧ್ಯಾಹ್ನದ ನಂತರ ಪ್ರವೇಶ ನಿರ್ಬಂಧಿಸಲಾಗುವ ಹಿನ್ನೆಲೆ, ದೇವರಾಯನದುರ್ಗ ಹಾಗೂ ನಾಮದ ಚಿಲುಮೆ ಕಡೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ದೌಡಾಯಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಭದ್ರತಾ ಬಂದೋಬಸ್ತ್‌ನ್ನು ಬಿಗಿಗೊಳಿಸಿದ್ದಾರೆ.
ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿ, ಸಾರ್ವಜನಿಕರು ಸಹಕರಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.