ಸಿಎಂ ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ – ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ |

ದೇಶ

ಸಿಎಂ ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ – ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Published

on

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಇಳಿಸಬೇಕು ಎಂದು ಯಾರೂ ಕೇಳುತ್ತಿಲ್ಲ. ಹೈಕಮಾಂಡ್ ನೇರವಾಗಿ ಹೇಳದೇ ಇದ್ದರೂ, ನಾಯಕತ್ವ ಬದಲಾವಣೆ ಇಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ನಂಬಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದರು. ಸಿಎಂ ಬದಲಾವಣೆ ಬಗ್ಗೆ ರಾಜಕೀಯ ವಲಯದಲ್ಲಿ ಯಾವುದೇ ಚರ್ಚೆಯೇ ಇಲ್ಲ, ಕೇವಲ ಮಾಧ್ಯಮಗಳಲ್ಲಿ ಮಾತ್ರ ಈ ವಿಚಾರ ಪ್ರಸ್ತಾಪವಾಗುತ್ತಿದೆ ಎಂದು ಹೇಳಿದರು.

ಸಿಎಂ ಬದಲಾವಣೆ ಕುರಿತ ಬೇಡಿಕೆಗಳಿಗೆ ಹೈಕಮಾಂಡ್ ಯಾವುದೇ ಮನ್ನಣೆ ನೀಡಿಲ್ಲ. ಈ ವಿಷಯ ಈಗಾಗಲೇ ಸೆಟಲ್ ಆಗಿದ್ದು, ಸಿದ್ದರಾಮಯ್ಯ ಅವರನ್ನು ಕೆಳಗೆ ಇಳಿಸುವ ಪ್ರಶ್ನೆಯೇ ಇಲ್ಲ ಎಂದು ಯತೀಂದ್ರ ಸ್ಪಷ್ಟಪಡಿಸಿದರು.

ಮೂಡಾ ಹಗರಣ ಪ್ರಕರಣದಲ್ಲಿ ಕೋರ್ಟ್ ಬಿ-ರಿಪೋರ್ಟ್ ಪುರಸ್ಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾನೂನಿನ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇತ್ತು. ನಾವು ಯಾವುದೇ ತಪ್ಪು ಮಾಡಿರಲಿಲ್ಲ. ಕೋರ್ಟ್ ತೀರ್ಪಿನಿಂದ ನಮ್ಮ ತಾಯಿ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದರು. ದೂರುದಾರ ಸ್ನೇಹಮಹಿ ಕೃಷ್ಣ ಅವರು ಕಾನೂನು ಹೋರಾಟ ನಡೆಸಬಹುದು, ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.

ಸಚಿವ ಜಾರ್ಜ್ ಅವರ ಇಲಾಖೆ ಬಗ್ಗೆ ಮೂಗು ತೂರಿಸುತ್ತಿದ್ದಾರೆ ಎಂಬ ಆರೋಪಗಳನ್ನು ಯತೀಂದ್ರ ತಳ್ಳಿಹಾಕಿದರು. ಬಿಜೆಪಿಯವರು ಸುಮ್ಮನೆ ನನ್ನ ಹೆಸರನ್ನು ಎಳೆದು ತರುತ್ತಿದ್ದಾರೆ, ಈ ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ದೂರಿದರು.

ಮನರೇಗಾ ವಿಚಾರದಲ್ಲಿ ಬಿಜೆಪಿ–ಕಾಂಗ್ರೆಸ್ ನಡುವಿನ ಜಟಾಪಟಿಗೆ ಪ್ರತಿಕ್ರಿಯಿಸಿ, ನಾವು ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಲ್ಲಿ ನಡೆಯುತ್ತಿದ್ದೇವೆ. ಬಿಜೆಪಿಗೆ ಜನರ ಕೆಲಸ ಬೇಕಿಲ್ಲ, ಹೆಸರು ಮಾತ್ರ ಬೇಕು ಎಂದು ಟೀಕಿಸಿದರು. ಜೊತೆಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವುದನ್ನು ಸ್ವಾಗತಿಸುವುದಾಗಿ ಹೇಳಿದರು.

Trending

Exit mobile version